ಕನ್ನಡ ಬೆಳೆಯಲು ಕನ್ನಡವನ್ನೇ ಬಳಸಿ: ಶಾಸಕ

| Published : Dec 29 2023, 01:30 AM IST

ಸಾರಾಂಶ

ಕನ್ನಡ ರಾಜ್ಯೋತ್ಸವ ನವೆಂಬರ್ ತಿಂಗಳಿಗೆ ಸೀಮಿತವಾಗದೆ ನಿತ್ಯೋತ್ಸವವಾಗಬೇಕು. ಆಗ ಮಾತ್ರ ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆ, ಸೂರ್ಯ-ಚಂದ್ರರಿರುವವರೆಗೂ ಶಾಶ್ವತವಾಗಿರುತ್ತದೆ ಎಂದು ಶಾಸಕ ಶಿವಲಿಂಗೇಗೌಡ ಹೇಳಿದರು.

ಆಟೋ ಚಾಲಕರಿಂದ ಕನ್ನಡ ರಾಜ್ಯೋತ್ಸವ । ಹಲವು ಸಾಧಕರಿಗೆ ಸನ್ಮಾನ ।

ಕನ್ನಡಪ್ರಭ ವಾರ್ತೆ ಅರಸೀಕೆರೆ

ಕನ್ನಡ ಭಾಷೆಯನ್ನು ಉಳಿಸುವುದಕ್ಕೆ ಹೋರಾಟ ಮಾಡುವುದಕ್ಕಿಂತ ಕನ್ನಡ ಬಳಸುವ ಸಂಕಲ್ಪ ಮಾಡಿದರೆ ಸಾಕು, ಕನ್ನಡ ಭಾಷೆ ತನ್ನಷ್ಟಕ್ಕೆ ತಾನೆ ಅಜರಾಮರವಾಗಿ ಬೆಳೆಯುತ್ತದೆ ಎಂದು ಶಾಸಕ ಕೆಎಂ ಶಿವಲಿಂಗೇಗೌಡ ಹೇಳಿದರು.

ನಗರದ ಜಯ ಕರ್ನಾಟಕ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕನ್ನಡ ರಾಜ್ಯೋತ್ಸವ ನವೆಂಬರ್ ತಿಂಗಳಿಗೆ ಸೀಮಿತವಾಗದೆ ನಿತ್ಯೋತ್ಸವವಾಗಬೇಕು. ಆಗ ಮಾತ್ರ ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆ, ಸೂರ್ಯ-ಚಂದ್ರರಿರುವವರೆಗೂ ಶಾಶ್ವತವಾಗಿರುತ್ತದೆ ಎಂದು ಕರೆ ನೀಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ನಗರಸಭೆ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಎಂ, ಸಮಿವುಲ್ಲಾ ಮಾತನಾಡಿ, ಕನ್ನಡಪರ ಹೋರಾಟಗಾರ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ. ಎ. ನಾರಾಯಣಗೌಡರು ಸೇರಿ ಕನ್ನಡ ನಾಡು, ನುಡಿ, ಸಂಸ್ಕೃತಿಗೆ ಅರಸೀಕೆರೆ ತಾಲೂಕಿನ ಕೊಡುಗೆ ಅಪಾರವಾಗಿದೆ ಎಂದು ಸ್ಮರಿಸಿದರು.

ಗಂಡಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೆಟ್ರೋ ಬಾಬು ಮಾತನಾಡಿ, ನವಂಬರ್ ತಿಂಗಳು ಕಳೆದು ಡಿಸೆಂಬರ್ ತಿಂಗಳ ಅಂತ್ಯದಲ್ಲಿ ನಾವಿದ್ದರೂ ನಗರ ಸೇರಿದಂತೆ ತಾಲೂಕಿನಾದ್ಯಂತ ಇನ್ನೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಗಳು ಅಲ್ಲಲ್ಲಿ ಆಚರಣೆಯಾಗುತ್ತಿರುವುದು ನಿಜಕ್ಕೂ ಸಂತಸದ ವಿಷಯವಾಗಿದೆ. ಕನ್ನಡ ನಾಡು, ನುಡಿ, ನೆಲ, ಜಲದ ಬಗ್ಗೆ ತಾಲೂಕಿನ ಜನತೆಗಿರುವ ಅಭಿಮಾನ ನಿಜಕ್ಕೂ ಪ್ರಶಂಸನಾರ್ಹವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ತಾಲೂಕು ಒಕ್ಕಲಿಗರ ಸಮಾಜದ ಅಧ್ಯಕ್ಷ ಆರ್. ಅನಂತ ಕುಮಾರ್ ಮಾತನಾಡಿ, ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆ ಹಾಗೂ ಪದ ಪುಂಜಗಳ ಶ್ರೀಮಂತಿಕೆಯನ್ನು ನಮ್ಮ ಮಕ್ಕಳಿಗೆ ತಿಳಿಸುವ ಜತೆಗೆ ಬಳಸುವುದನ್ನೂ ಹೇಳಿಕೊಡುವ ಮೂಲಕ ನಾವೆಲ್ಲ ಕನ್ನಡತನ ಮೆರೆಯೋಣ ಹಾಗೂ ತಾಯಿನಾಡಿನ ಭಾಷೆಯನ್ನು ಬೆಳೆಸೋಣ ಎಂದು ಕರೆ ನೀಡಿದರು.

ಸಮಾರಂಭದಲ್ಲಿ ನಾನಾ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನಿಸಿ, ಗೌರವಿಸಲಾಯಿತು. ವೇದಿಕೆಯಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಜಿ,ಎನ್ ಮನೋಜ್ ಕುಮಾರ್,ಮಂಡ್ಯ ಜಿಲ್ಲಾ ಕಾರಾಗೃಹದ ಅಧೀಕ್ಷಕ ಲೋಕೇಶ್, ಗೀಜಿಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಧರ್ಮೇಶ್, ಕಾರ್ಯಕ್ರಮ ಆಯೋಜಕರಾದ ಅನಿಲ್, ಹೇಮಗಿರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕನ್ನಡ ಗೆಳೆಯರ ಬಳಗದ ದಿಲೀಪ್ ಕುಮಾರ್ ನಿರೂಪಣೆ ಮಾಡಿದರು.

------

ರಾಜ್ಯೋತ್ಸವ ಸಮಾರಂಭದಲ್ಲಿ ನಾನಾ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು.