ಕನ್ನಡದ ಬೆಳವಣಿಗೆಗಾಗಿ ಸಂಘ-ಸಂಸ್ಥೆಗಳು ನಿರಂತರವಾಗಿ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ. ಇಂಗ್ಲಿಷ್ ಮಾಧ್ಯಮದ ಪ್ರಭಾವದಿಂದ ಮಕ್ಕಳಲ್ಲಿ ಕನ್ನಡದ ಬಳಕೆ ಕಡಿಮೆಯಾಗುತ್ತಿರುವುದು ಆತಂಕಕಾರಿ. ಶಾಲೆಗಳ ಜತೆಗೆ ಮನೆಗಳಲ್ಲಿಯೂ ಕನ್ನಡ ಮಾತನಾಡುವ ವಾತಾವರಣ ನಿರ್ಮಿಸಬೇಕು. ಮಕ್ಕಳಿಗೆ ಕನ್ನಡ ಸಾಹಿತ್ಯ, ಕವಿತೆ, ಕಥೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಬೇಕು. ಕನ್ನಡ ರಾಜ್ಯೋತ್ಸವ ಕೇವಲ ಆಚರಣೆಯಾಗದೆ ಭಾಷಾಭಿಮಾನ ಬೆಳೆಸುವ ವೇದಿಕೆಯಾಗಬೇಕು ಎಂದು ತಿಳಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ಮಕ್ಕಳಲ್ಲಿ ಬಾಲ್ಯದಿಂದಲೇ ಕನ್ನಡದ ಬಗ್ಗೆ ಅಭಿಮಾನ ಮತ್ತು ಆಸಕ್ತಿ ಮೂಡಿಸುವ ಮೂಲಕ ನಾಡಿನ ಶ್ರೀಮಂತ ಪರಂಪರೆಯನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕು ಎಂದು ಗಣ್ಯರು ಅಭಿಪ್ರಾಯಪಟ್ಟರು.

ನಗರದ ಅರಳೀಕಟ್ಟೆ ವೃತ್ತದಲ್ಲಿರುವ ಸಂಸ್ಕೃತ ಭವನದಲ್ಲಿ ಮಾಣಿಕ್ಯ ಪ್ರಕಾಶನದ ವತಿಯಿಂದ ಭಾನುವಾರ ಆಯೋಜಿಸಿದ್ದ ಹೊಯ್ಸಳ ಕನ್ನಡ ರಾಜ್ಯೋತ್ಸವ-೨೦೨೬ ಹಾಗೂ ದಿವಂಗತ ದಾಸಪ್ಪ ಸ್ಮರಣಾರ್ಥ ದತ್ತಿ ಛಂದೋಮಾಣಿಕ್ಯ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿದ ಪಿ. ಆರ್‌. ಕೇಶವಮೂರ್ತಿ ಮಾತನಾಡಿ, ಕನ್ನಡದ ಬೆಳವಣಿಗೆಗಾಗಿ ಸಂಘ-ಸಂಸ್ಥೆಗಳು ನಿರಂತರವಾಗಿ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ. ಇಂಗ್ಲಿಷ್ ಮಾಧ್ಯಮದ ಪ್ರಭಾವದಿಂದ ಮಕ್ಕಳಲ್ಲಿ ಕನ್ನಡದ ಬಳಕೆ ಕಡಿಮೆಯಾಗುತ್ತಿರುವುದು ಆತಂಕಕಾರಿ. ಶಾಲೆಗಳ ಜತೆಗೆ ಮನೆಗಳಲ್ಲಿಯೂ ಕನ್ನಡ ಮಾತನಾಡುವ ವಾತಾವರಣ ನಿರ್ಮಿಸಬೇಕು. ಮಕ್ಕಳಿಗೆ ಕನ್ನಡ ಸಾಹಿತ್ಯ, ಕವಿತೆ, ಕಥೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಬೇಕು. ಕನ್ನಡ ರಾಜ್ಯೋತ್ಸವ ಕೇವಲ ಆಚರಣೆಯಾಗದೆ ಭಾಷಾಭಿಮಾನ ಬೆಳೆಸುವ ವೇದಿಕೆಯಾಗಬೇಕು ಎಂದು ತಿಳಿಸಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಗೌರವಾಧ್ಯಕ್ಷ ರವಿ ನಾಕಲಗೂಡು ಮಾತನಾಡಿ, ಕನ್ನಡ ಭಾಷೆ ಕೇವಲ ಸಂವಹನದ ಭಾಷೆಯಾಗದೆ ಕನ್ನಡಿಗರ ಬದುಕಿಗೆ ಅನ್ನ ನೀಡುವ ಭಾಷೆಯಾಗಬೇಕು. ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳಿಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇ. ೨೫ರಷ್ಟು ಮೀಸಲಾತಿ ಕಲ್ಪಿಸುವ ಬೇಡಿಕೆಗೆ ಸರ್ಕಾರ ಸ್ಪಂದಿಸಬೇಕು. ಇದರಿಂದ ಕನ್ನಡ ಶಾಲೆಗಳ ಉಳಿವು ಹಾಗೂ ಭಾಷೆಯ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಕೆ. ಎಂ. ಶ್ರೀನಿವಾಸ್ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿ, ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಸೇವೆ ಒಂದು ದಿನದ ಆಚರಣೆಗೆ ಸೀಮಿತವಾಗಬಾರದು. ಯಾವುದೇ ಪ್ರತಿಫಲದ ನಿರೀಕ್ಷೆಯಿಲ್ಲದೆ ಕನ್ನಡ ಕಟ್ಟುವ ಕಾರ್ಯದಲ್ಲಿ ತೊಡಗಿರುವವರ ಸೇವೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದರು. ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಕೊಟ್ರೇಶ್ ಎಸ್. ಉಪ್ಪಾರ್‌ ಪ್ರಾಸ್ತಾವಿಕವಾಗಿ ಮಾತನಾಡಿ, ಸಾಹಿತ್ಯ, ಕಲೆ, ಸಂಸ್ಕೃತಿ, ಶಿಕ್ಷಣ, ಕ್ರೀಡೆ, ಆರೋಗ್ಯ ಮತ್ತು ಮಾಧ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಸಾಧಕರನ್ನು ಗುರುತಿಸಿ ಗೌರವಿಸುವುದು ಸಮಾಜದ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಕವಿಗಳು ಕವಿಗೋಷ್ಠಿಯಲ್ಲಿ ಭಾಗವಹಿಸಿ ಕನ್ನಡ ಸಾಹಿತ್ಯದ ಸೊಗಡನ್ನು ಪಸರಿಸಿದರು. ಸಾಮಾಜಿಕ, ಸಂಘಟನಾ, ವೈದ್ಯಕೀಯ, ಸ್ವಯಂಸೇವಾ, ರಂಗಭೂಮಿ, ಮಾಧ್ಯಮ, ಸಾಹಿತ್ಯ, ಸಂಗೀತ, ನೃತ್ಯ, ಯೋಗ, ಶಿಕ್ಷಣ, ಹರಿಕಥೆ ಹಾಗೂ ಜಾನಪದ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಹೊಯ್ಸಳ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಾಹಿತಿ ಸುಜಲಾದೇವಿ ಅಧ್ಯಕ್ಷತೆ ವಹಿಸಿದ್ದರು. ದಿವಂಗತ ದಾಸಪ್ಪ ಸ್ಮರಣಾರ್ಥದ ದತ್ತಿ ಛಂದೋಮಾಣಿಕ್ಯ ಪ್ರಶಸ್ತಿಯನ್ನು ಸಾಹಿತಿ ಹಾಗೂ ದತ್ತಿದಾನಿ ಲಕ್ಷ್ಮೀದೇವಿ ದಾಸಪ್ಪ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ದತ್ತಿದಾನಿ ಲಕ್ಷ್ಮೀದೇವಿ ದಾಸಪ್ಪ, ಹಿರಿಯ ಕವಿ ಇ.ಎ. ದರ್ಗಾ, ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಉಪಾಧ್ಯಕ್ಷೆ ಎಚ್. ಎಸ್. ಭಾನುಮತಿ, ರಾಜ್ಯ ಸರ್ಕಾರಿ ನೌಕರರ ಸಂಘದ ಆಲೂರು ತಾಲೂಕು ಅಧ್ಯಕ್ಷ ಡಿ.ಎಂ. ವರದರಾಜು, ಅಧ್ಯಕ್ಷೆ ಕೆ.ಸಿ. ಗೀತಾ ಉಪಸ್ಥಿತರಿದ್ದರು. ಭಾಷಾ ಶಿಕ್ಷಕಿ ಆರ್‌. ಧನಲಕ್ಷ್ಮಿ ನಿರೂಪಿಸಿದರು. ಕಾರ್ಯದರ್ಶಿ ಸಿ.ಎನ್. ನೀಲಾವತಿ ಸ್ವಾಗತಿಸಿದರು. ಉಪಾಧ್ಯಕ್ಷ ವಿ. ಮೋಹನ್ ವಂದಿಸಿದರು.