ಎಸ್‌ಸಿಪಿ-ಟಿಎಸ್‌ಪಿ ಅನುದಾನವನ್ನು ಅದೇ ಉದ್ದೇಶಕ್ಕೆ ಮಾತ್ರ ಬಳಸಿ: ನಲಿನ್ ಅತುಲ್

| Published : Jul 06 2024, 12:53 AM IST

ಎಸ್‌ಸಿಪಿ-ಟಿಎಸ್‌ಪಿ ಅನುದಾನವನ್ನು ಅದೇ ಉದ್ದೇಶಕ್ಕೆ ಮಾತ್ರ ಬಳಸಿ: ನಲಿನ್ ಅತುಲ್
Share this Article
  • FB
  • TW
  • Linkdin
  • Email

ಸಾರಾಂಶ

ತಳ ಸಮುದಾಯದ ಅಭಿವೃದ್ಧಿ ಎಸ್‌ಸಿಪಿ-ಟಿಎಸ್‌ಪಿ ಯೋಜನೆಯ ಮೂಲಧ್ಯೇಯವಾಗಿದೆ. ಆದ್ದರಿಂದ ಸಮುದಾಯಗಳ ಅಭಿವೃದ್ಧಿಗೆ ಪೂರಕವಾಗಿ ಯೋಜನೆಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿ ಎಂದು ಕೊಪ್ಪಳ ಜಿಲ್ಲಾಧಿಕಾರಿ ನಲಿನ್‌ ಅತುಲ್‌ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಕೊಪ್ಪಳ: ಸರ್ಕಾರದಿಂದ ಬಿಡುಗಡೆಯಾದ ಎಸ್‌ಸಿಪಿ-ಟಿಎಸ್‌ಪಿ ಅನುದಾನವನ್ನು ನಿಗದಿತ ಕಾಲವಧಿಯಲ್ಲಿ ಸಮರ್ಪಕವಾಗಿ ಹಾಗೂ ನಿರ್ದಿಷ್ಟ ಉದ್ದೇಶಕ್ಕೆ ಮಾತ್ರ ಬಳಸಿ. ಬೇರೆ ಕಾಮಗಾರಿ ಅಥವಾ ಕಾರ್ಯಕ್ರಮ ಅನುಷ್ಠಾನಕ್ಕೆ ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಎಸ್‌ಸಿಪಿ-ಟಿಎಸ್‌ಪಿ ಜಿಲ್ಲಾ ಮೇಲ್ವಿಚಾರಣಾ ಸಮಿತಿ ಅಧ್ಯಕ್ಷ ನಲಿನ್ ಅತುಲ್ ಹೇಳಿದರು.

ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ 2023-24ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಬುಡಕಟ್ಟು ಉಪಯೋಜನೆ ಅಧಿನಿಯಮ-2013ರನ್ವಯ ಅನುಸೂಚಿತ ಜಾತಿಗಳು ಉಪಯೋಜನೆ/ಬುಡಕಟ್ಟು ಉಪಯೋಜನೆಗಳ ಜಿಲ್ಲಾ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ, ಬುಡಕಟ್ಟು ಉಪಯೋಜನೆ ಅಧಿನಿಯಮ-2013ರನ್ವಯ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿ ಮಾಡಿ, ಅವುಗಳ ಸಮರ್ಪಕ ಅನುಷ್ಠಾನಕ್ಕೆ ಅಗತ್ಯವಿರುವಷ್ಟು ಅನುದಾನವನ್ನು ಸಹ ಬಿಡುಗಡೆ ಮಾಡುತ್ತದೆ. ತಳ ಸಮುದಾಯದ ಅಭಿವೃದ್ಧಿ ಯೋಜನೆಯ ಮೂಲ ಧ್ಯೇಯವಾಗಿದೆ. ಆದ್ದರಿಂದ ಸಮುದಾಯಗಳ ಅಭಿವೃದ್ಧಿಗೆ ಪೂರಕವಾಗಿ ಯೋಜನೆಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿ. ಬಿಡುಗಡೆಯಾದ ಅನುದಾನವನ್ನು ಅರ್ಹ ಫಲಾನುಭವಿಗಳು, ಯೋಜನೆಗಳ ಜಾರಿಗೆ ಬಳಸಿ. ನಿಗದಿಪಡಿಸಿದ ಕಾಲವಧಿಯನ್ನು ಮೀರದಂತೆ ಕಾರ್ಯನಿರ್ವಹಿಸಿ. ಯಾವುದೇ ಕಾರಣಕ್ಕೂ ಎಸ್‌ಸಿಪಿ-ಟಿಎಸ್‌ಪಿ ಅನುದಾನವನ್ನು ಬೇರೆ ಕಾಮಗಾರಿ ಅಥವಾ ಕಾರ್ಯಕ್ರಮಕ್ಕೆ ಬಳಸಲು ಅವಕಾಶವಿಲ್ಲದ ಕಾರಣ ನಿರ್ದಿಷ್ಟ ಉದ್ದೇಶಕ್ಕೆ ಮಾತ್ರ ಅನುದಾನವನ್ನು ಬಳಕೆ ಮಾಡಿ. ನಿಗದಿತ ಕಾಲವಧಿಯಲ್ಲಿ ಅರ್ಹ ಫಲಾನುಭವಿಗೆ ಯೋಜನೆ ಲಾಭ ತಲುಪಿಸಿ, ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಿ ಎಂದು ಅವರು ಹೇಳಿದರು.

ಎಸ್‌ಸಿಪಿ-ಟಿಎಸ್‌ಪಿ ಯೋಜನೆಯಡಿ ಬಾಕಿ ಉಳಿದಿರುವ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ಶೀಘ್ರವೇ ಮುಕ್ತಾಯಗೊಳಿಸಿ. ಕಾಲನಿಗಳ ಅಭಿವೃದ್ಧಿಗೆ ಅನುದಾನ ಮೀಸಲಿಟ್ಟು, ಅಭಿವೃದ್ಧಿಗೆ ಕ್ರಮ ಕೈಗೊಳ್ಳಿ. ಎಲ್ಲ ರೀತಿಯ ಮೂಲಭೂತ ಸೌಕರ್ಯಗಳನ್ನು ಕಾಲನಿಗಳಿಗೆ ಒದಗಿಸಿ. ಫಲಾನುಭವಿ ಆಧಾರಿತ ಯೋಜನೆಗಳಲ್ಲಿ ಅರ್ಹ ಫಲಾನುಭವಿಗೆ ಯೋಜನೆ ತಲುಪಬೇಕು. ಫಲಾನುಭವಿ ಗುರುತಿಸುವಿಕೆ, ಆಯ್ಕೆಯಲ್ಲಿ ಎಚ್ಚರ ವಹಿಸಿ. ಬೇಡಿಕೆಯನುಸಾರ ಅಗತ್ಯವಿರುವ ಅನುದಾನ ಬಿಡುಗಡೆ ಮಾಡುವಂತೆ ಸಂಬಂಧಿಸಿದ ಇಲಾಖಾ ಮುಖ್ಯಸ್ಥರಿಗೆ ಪ್ರಸ್ತಾವನೆ ಸಲ್ಲಿಸಿ ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ತಿಳಿಸಿದರು.

ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆ, ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಕಾವ್ಯಾರಾಣಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ರಾಜು ತಳವಾರ, ತಹಸೀಲ್ದಾರ ವಿಠ್ಠಲ್ ಚೌಗಲಾ, ಕೊಪ್ಪಳ ನಗರಸಭೆ ಪೌರಾಯುಕ್ತರಾದ ಗಣಪತಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.