ಎಸ್‌ಸಿಪಿ-ಟಿಎಸ್‌ಪಿ ಅನುದಾನವು ದುರ್ಬಲ ವರ್ಗಗಳ ಅಭಿವೃದ್ಧಿಗಾಗಿ ಮೀಸಲಾಗಿದ್ದು, ಅರ್ಹ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸುವ ಮೂಲಕ ಅನುದಾನ ಸಮರ್ಪಕವಾಗಿ ಬಳಕೆ ಮಾಡಬೇಕು ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಟಿ. ರಘುಮೂರ್ತಿ ಅಧಿಕಾರಿಗಳಿಗೆ ಸೂಚಿಸಿದರು.
ಕೊಪ್ಪಳ: ಎಸ್‌ಸಿಪಿ-ಟಿಎಸ್‌ಪಿ ಅನುದಾನವು ದುರ್ಬಲ ವರ್ಗಗಳ ಅಭಿವೃದ್ಧಿಗಾಗಿ ಮೀಸಲಾಗಿದ್ದು, ಅರ್ಹ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸುವ ಮೂಲಕ ಅನುದಾನ ಸಮರ್ಪಕವಾಗಿ ಬಳಕೆ ಮಾಡಬೇಕು ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಟಿ. ರಘುಮೂರ್ತಿ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಪಂ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಶುಕ್ರವಾರ ನಡೆದ ಎಸ್‌ಸಿಪಿ-ಟಿಎಸ್‌ಪಿ ಹಾಗೂ ಪರಿಶಿಷ್ಟ ಜಾತಿ, ವರ್ಗಗಳ ಅಭಿವೃದ್ಧಿ ಕಾರ್ಯಕ್ರಮಗಳ ಅಕ್ಟೋಬರ್ ತಿಂಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರತಿ ಇಲಾಖೆಗೆ ಸರ್ಕಾರ ನಿರ್ದಿಷ್ಟ ಅನುದಾನ ಮೀಸಲಿಡುತ್ತದೆ. ಅಧಿಕಾರಿಗಳು ಕ್ರಿಯಾಯೋಜನೆ ರೂಪಿಸಿ, ಕಳೆದ ಸಾಲಿನ ಫಲಾನುಭವಿಗಳ ಪಟ್ಟಿಯೊಂದಿಗೆ ಪರಿಶೀಲಿಸಿ, ಈ ವರೆಗೆ ಸೌಲಭ್ಯ ವಂಚಿತರಾದವರಿಗೆ ಆದ್ಯತೆ ನೀಡಬೇಕು. ಒಬ್ಬರಿಗೇ ಪದೇ ಪದೇ ಸೌಲಭ್ಯ ನೀಡದೆ ಹೊಸ ಫಲಾನುಭವಿಗಳಿಗೂ ಅವಕಾಶ ಕಲ್ಪಿಸಬೇಕು ಎಂದರು.ವಿದ್ಯಾರ್ಥಿ ನಿಲಯಗಳಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳಿದ್ದರೆ ಹೆಚ್ಚುವರಿ ಬಾಡಿಗೆ ಕಟ್ಟಡಗಳನ್ನು ಪಡೆದು ಸ್ವಚ್ಛತೆ, ಶುದ್ಧ ಆಹಾರ, ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯ ಒದಗಿಸಬೇಕು ಎಂದು ಸೂಚಿಸಿದರು.
2023ರಿಂದ ಇದುವರೆಗೆ ಅನುಷ್ಠಾನಗೊಂಡ ಎಸ್‌ಸಿಪಿ-ಟಿಎಸ್‌ಪಿ ಯೋಜನೆಗಳ ಪ್ರಗತಿ ಹಾಗೂ ಕಾಮಗಾರಿಗಳ ಮಾಹಿತಿಯನ್ನು ಛಾಯಾಚಿತ್ರಗಳ ಸಹಿತ ಇಲಾಖೆಗಳ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿ, ಪಾರದರ್ಶಕತೆ ಕಾಯ್ದುಕೊಳ್ಳಬೇಕು ಎಂದರು.ಶಾಸಕ ಕೆ. ರಾಘವೇಂದ್ರ ಹಿಟ್ನಾಳ, ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ, ಜಿಪಂ ಸಿಇಒ ವರ್ಣಿತ್ ನೇಗಿ, ಡಿಎಫ್‌ಒ ನಿರ್ಮಲಾ ಉಪಸ್ಥಿತರಿದ್ದರು.