ಮಕ್ಕಳಿಗೆ ಲಸಿಕೆ ಹಾಕಿಸಿ ಮಾರಕ ರೋಗಗಳಿಂದ ರಕ್ಷಿಸಿ: ಅಬೀದ್‌ ಗದ್ಯಾಳ

| Published : Apr 25 2025, 11:53 PM IST

ಮಕ್ಕಳಿಗೆ ಲಸಿಕೆ ಹಾಕಿಸಿ ಮಾರಕ ರೋಗಗಳಿಂದ ರಕ್ಷಿಸಿ: ಅಬೀದ್‌ ಗದ್ಯಾಳ
Share this Article
  • FB
  • TW
  • Linkdin
  • Email

ಸಾರಾಂಶ

ಉಡುಪಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಡಳಿತ ವತಿಯಿಂದ ನಡೆದ ವಿಶ್ವ ಲಸಿಕಾ ವಾರವನ್ನು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಹಾಗೂ ಮಾರಕ ರೋಗಗಳಿಂದ ಅವರನ್ನು ರಕ್ಷಿಸಲು ಅಗತ್ಯವಿರುವ ಲಸಿಕೆಗಳನ್ನು ಕಾಲಕಾಲಕ್ಕೆ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಕರೆ ನೀಡಿದರು.

ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಡಳಿತ ವತಿಯಿಂದ ನಡೆದ ವಿಶ್ವ ಲಸಿಕಾ ವಾರ ಉದ್ಘಾಟಿಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿರುವ ಶೂನ್ಯ ಡೋಸ್ ಮಕ್ಕಳು, ದಡಾರ ರುಬೆಲ್ಲಾ ಲಸಿಕೆ ತಪ್ಪಿ ಹೋದ ಮಕ್ಕಳು ಅಥವಾ ಲಸಿಕೆ ವಂಚಿತರಾದ ಎಲ್ಲಾ ಮಕ್ಕಳು ಈ ಲಸಿಕಾ ಸಪ್ತಾಹದ ಪ್ರಯೋಜನ ಪಡೆದುಕೊಂಡು ಲಸಿಕೆ ಹಾಕಿಸಿಕೊಳ್ಳಬೇಕು ಹಾಗೂ ಇಲಾಖೆಯ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಜವಾಬ್ದಾರಿಯಿಂದ ಲಸಿಕಾ ಕಾರ್ಯ ನಿರ್ವಹಿಸುವ ಮೂಲಕ ಯಾವುದೇ ಒಂದು ಮಗುವೂ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದರು.

ಜಿಲ್ಲೆಯಲ್ಲಿರುವ ವಲಸೆ ಕಾರ್ಮಿಕರ ಮಕ್ಕಳನ್ನು ಗುರುತಿಸಿ ಲಸಿಕೆ ನೀಡಬೇಕು. ಪೋಷಕರು ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸುವ ಮೂಲಕ ದಡಾರ ರುಬೆಲ್ಲಾ ನಿರ್ಮೂಲನೆ ಸಾಧಿಸಲು ನೆರವಾಗಬೇಕು ಎಂದರು.

ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಾಧಿಕಾರಿ ಡಾ.ಬಸವರಾಜ ಜಿ. ಹುಬ್ಬಳಿ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ ಉಪಾಧ್ಯಾಯ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸಾತ್ವಿಕ್, ಆರೋಗ್ಯ ಇಲಾಖೆಯ ಸಿಬ್ಬಂದಿ, ಮಕ್ಕಳು ಮತ್ತು ಪೋಷಕರು ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ.ಜೋತ್ಸ್ನಾ ಬಿ.ಕೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಎಚ್. ಸ್ವಾಗತಿಸಿ, ನಿರೂಪಿಸಿದರು. ಹಿರಿಯ ಆರೋಗ್ಯಾ ನಿರೀಕ್ಷಣಾಧಿಕಾರಿ ಸತೀಶ್ ರಾವ್ ವಂದಿಸಿದರು.