ಜಿಲ್ಲೆಯಲ್ಲಿ ಒಟ್ಟು 891 ಪಲ್ಸ್ ಪೋಲಿಯೋ ಕೇಂದ್ರ ಸ್ಥಾಪಿಸಿದ್ದು ಈ ಕೇಂದ್ರಗಳಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ಲಭ್ಯವಿದ್ದು, ಮಕ್ಕಳಿಗೆ ಲಸಿಕೆ ಹಾಕಲಿದ್ದಾರೆ ಎಂದ ಅವರು, ಯಾವುದೇ ಮಗು ಲಸಿಕೆಯಿಂದ ವಂಚಿತವಾಗಬಾರದೆಂಬ ಉದ್ದೇಶದಿಂದ ಆರೋಗ್ಯ ಇಲಾಖೆ ಮನೆ-ಮನೆಗೆ ತೆರಳಿ ಲಸಿಕೆ ಹಾಕುವ ಅಭಿಯಾನ ಹಮ್ಮಿಕೊಂಡಿದೆ.

ಧಾರವಾಡ:

ಪೋಲಿಯೋ ಮುಕ್ತ ಸಮಾಜ ರೂಪಿಸಲು ಎಲ್ಲ ಪಾಲಕರು ತಮ್ಮ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಶಾಸಕ ಎನ್.ಎಚ್. ಕೋನರಡ್ಡಿ ಹೇಳಿದರು.

ನಗರದ ಮಹಾನಗರ ಪಾಲಿಕೆ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಪಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಹಾನಗರ ಪಾಲಿಕೆ ಆಶ್ರಯದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಜಿಲ್ಲೆಯಲ್ಲಿ ಒಟ್ಟು 891 ಪಲ್ಸ್ ಪೋಲಿಯೋ ಕೇಂದ್ರ ಸ್ಥಾಪಿಸಿದ್ದು ಈ ಕೇಂದ್ರಗಳಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ಲಭ್ಯವಿದ್ದು, ಮಕ್ಕಳಿಗೆ ಲಸಿಕೆ ಹಾಕಲಿದ್ದಾರೆ ಎಂದ ಅವರು, ಯಾವುದೇ ಮಗು ಲಸಿಕೆಯಿಂದ ವಂಚಿತವಾಗಬಾರದೆಂಬ ಉದ್ದೇಶದಿಂದ ಆರೋಗ್ಯ ಇಲಾಖೆ ಮನೆ-ಮನೆಗೆ ತೆರಳಿ ಲಸಿಕೆ ಹಾಕುವ ಅಭಿಯಾನ ಹಮ್ಮಿಕೊಂಡಿದೆ ಎಂದರು.

ಮೇಯರ್‌ ಜ್ಯೋತಿ ಪಾಟೀಲ ಮಾತನಾಡಿ, ಈ ಬಾರಿಯ ಅಭಿಯಾನದಲ್ಲಿ ಕೇವಲ 3 ದಿನಗಳ ಅವಧಿಯಲ್ಲಿ ಒಟ್ಟು 2.7 ಲಕ್ಷ ಮಕ್ಕಳನ್ನು ತಲುಪಿ, ಪೋಲಿಯೋ ಲಸಿಕೆ ನೀಡುವ ಬೃಹತ್ ಗುರಿ ಹೊಂದಲಾಗಿದೆ ಎಂದು ಹೇಳಿದರು.

ಜಿಪಂ ಸಿಇಒ ಭುವನೇಶ ಪಾಟೀಲ ಮಾತನಾಡಿ, ವಿಶ್ವ ಆರೋಗ್ಯ ಸಂಸ್ಥೆಯು 2014ರ ಭಾರತವನ್ನು ಅಧಿಕೃತವಾಗಿ ಪೋಲಿಯೋ ಮುಕ್ತ ದೇಶ ಎಂದು ಘೋಷಿಸಿತು. 3 ವರ್ಷ ದೇಶದಲ್ಲಿ ಯಾವುದೇ ಹೊಸ ಪೋಲಿಯೋ ಪ್ರಕರಣ ವರದಿಯಾಗದ ಕಾರಣ, ವಿಶ್ವ ಆರೋಗ್ಯ ಸಂಸ್ಥೆಯು ಭಾರತವನ್ನು ಅಧಿಕೃತವಾಗಿ ಪೋಲಿಯೋ ಮುಕ್ತ ದೇಶ ಎಂದು ಘೋಷಿಸಿತು. ಆದರೂ ಅಪಾಯದ ಭೀತಿ ಮಾತ್ರ ಇನ್ನೂ ಪೂರ್ಣವಾಗಿ ಕಡಿಮೆಯಾಗಿಲ್ಲ ಎಂದರು.

ಹಿರಿಯ ಮಕ್ಕಳ ತಜ್ಞ ವೈದ್ಯ ಡಾ. ರಾಜನ್ ದೇಶಪಾಂಡೆ ಮಾತನಾಡಿ, ಪೋಲಿಯೋ ಮುಕ್ತ ಸ್ಥಿತಿಯನ್ನು ಕಾಯ್ದುಕೊಳ್ಳುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಇದು ಪ್ರತಿ ಪೋಷಕರ ಕರ್ತವ್ಯ. ಪೋಲಿಯೋ ಬರುವ ಮುನ್ನವೇ ಲಸಿಕೆಯ ಮೂಲಕ ಬೇಲಿ ಹಾಕೋಣ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಸ್.ಎಂ. ಹೊನಕೇರಿ ಪ್ರಾಸ್ತಾವಿಕ ಮಾತನಾಡಿದರು. ಆರ್‌ಸಿಎಚ್‌ಒ ಅಧಿಕಾರಿ ಡಾ. ಸುಜಾತಾ ಹಸವಿಮಠ ವಂದಿಸಿದರು. ಆರೋಗ್ಯ ಇಲಾಖೆಯ ರೇಖಾ ಬಾಡಗಿ ಕಾರ್ಯಕ್ರಮ ನಿರೂಪಿಸಿದರು. ಪಾಲಿಕೆ ಸಭಾ ನಾಯಕ ಈರೇಶ ಅಂಚಟಗೇರಿ, ಪಾಲಿಕೆ ಸದಸ್ಯ ಸುರೇಶ ಬೇಂದ್ರೆ, ಆರೋಗ್ಯ ಇಲಾಖೆ ಬೆಳಗಾವಿ ವಿಭಾಗದ ಜಂಟಿ ನಿರ್ದೇಶಕಿ ಡಾ. ಎಚ್.ಆರ್. ಪುಷ್ಪಾ, ರಾಜ್ಯ ನೋಡಲ್ ಅಧಿಕಾರಿ ಡಾ. ಉಮಾ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಸಂಗಪ್ಪ ಗಾಬಿ, ಮಹಾನಗರ ಪಾಲಿಕೆ ಮುಖ್ಯ ವೈದ್ಯಾಧಿಕಾರಿ ಡಾ. ಶ್ರೀಧರ ದಂಡೆಪ್ಪನವರ, ಧಾರವಾಡ ತಾಲೂಕು ವೈದ್ಯಾಧಿಕಾರಿ ಡಾ. ಕೆ.ಎನ್. ತನುಜಾ, ಮಹಾನಗರ ಪಾಲಿಕೆ ಧಾರವಾಡ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಅಶ್ವಿನಿ, ಆರೋಗ್ಯ ಇಲಾಖೆಯ ಕಾರ್ಯಕ್ರಮ ಅಧಿಕಾರಿ ಡಾ. ಶಶಿಧರ ಕಳಸೂರಮಠ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ರೋಟರಿ ಕ್ಲಬ್ ಪದಾಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಭಾಗವಹಿಸಿದ್ದರು.