ಧಾರವಾಡ:
ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಸುಸಜ್ಜಿತ ಆರೋಗ್ಯ ಕೇಂದ್ರ ಒದಗಿಸುತ್ತಿದ್ದು ಜನಪರ ಯೋಜನೆಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಜಾರಿಗೆ ತರಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ ಗುಂಡೂರಾವ್ ಹೇಳಿದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದಲ್ಲಿರುವ ಲಸಿಕಾ ಕೇಂದ್ರ ಮತ್ತು ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಜಿಲ್ಲಾ ಸಂಯೋಜಿತ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ ಉದ್ಘಾಟಿಸಿದ ಅವರು, ಸಾರ್ವಜನಿಕರಿಗೆ ಅಗತ್ಯವಿರುವ ಔಷಧಿ ದಾಸ್ತಾನಿದೆ. ಯಾವುದೇ ಆರೋಗ್ಯ ಕೇಂದ್ರಗಳಲ್ಲಿ ಔಷಧಿ ಕೊರತೆ ಉಂಟಾಗದಂತೆ ಕ್ರಮವಹಿಸಿದೆ ಎಂದರು.
ಆರೋಗ್ಯ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇದ್ದು ಅಗತ್ಯವಿರುವಲ್ಲಿ ಪಾಳೆಯ ಮುಖಾಂತರ ಕಾರ್ಯ ನಿರ್ವಹಿಸಲು ವ್ಯವಸ್ಥೆ ಮಾಡಲಾಗಿದೆ ಎಂದರು.ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾತನಾಡಿ, ದೇಶದಲ್ಲಿ ಸಾರ್ವಜನಿಕ ಆರೋಗ್ಯ ಅಭಿವೃದ್ಧಿಪಡಿಸಲು ಮತ್ತು ಆರೋಗ್ಯ ಕ್ಷೇತ್ರದಲ್ಲಿ ಹೊಸ ಉಪಕರಣ, ಸಂಶೋಧನೆ ಮತ್ತು ಜನ ಸಾಮಾನ್ಯರಿಗೆ ಅಗತ್ಯವಿರುವ ಔಷಧಿ ಪೂರೈಸಲು ಕೇಂದ್ರ ಸರ್ಕಾರ ಹೆಚ್ಚು ಆದ್ಯತೆ ನೀಡಿದೆ. ಲಸಿಕಾ ದಾಸ್ತಾನು ಸೌಲಭ್ಯಗಳ ಕಟ್ಟಡಗಳನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಟ್ಟಲಾಗುತ್ತಿದೆ ಎಂದ ಅವರು, ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಮಿಷನ್ ಅಡಿಯಲ್ಲಿ ರಾಜ್ಯಕ್ಕೆ ಕಳೆದ 5 ವರ್ಷದಲ್ಲಿ ₹ 1,928 ಕೋಟಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಹೇಳಿದರು. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್, ಶಾಸಕರಾದ ಅರವಿಂದ ಬೆಲ್ಲದ, ಎನ್.ಎಚ್. ಕೋನರಡ್ಡಿ, ಎಫ್.ಎಚ್. ಜಕ್ಕಪ್ಪನವರ, ಮೇಯರ್ ಜ್ಯೋತಿ ಪಾಟೀಲ, ಜಿಲ್ಲಾಧಿಕಾರಿ ಸ್ನೇಹಲ್ ಆರ್., ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಎಸ್.ಎಂ. ಹೊನಕೇರಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎನ್. ಗಾಬಿ, ಡಾ. ಸುಜಾತ ಹಸುವಿಮಠ, ಡಾ. ಕೆ.ಎನ್. ತನುಜಾ ಇದ್ದರು.