ವಾಲ್ಮೀಕಿ: ರಾಜ್ಯಾದ್ಯಂತ ಡಿಸಿ ಕಚೇರಿಗೆ ಬಿಜೆಪಿ ಮುತ್ತಿಗೆ ಯತ್ನ

| Published : Jun 29 2024, 12:32 AM IST

ಸಾರಾಂಶ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಬೆಂಗಳೂರು

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಿದ್ದು, ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೂ ಮುತ್ತಿಗೆ ಹಾಕುವ ಪ್ರಯತ್ನ ನಡೆಸಲಾಯಿತು. ಈ ವೇಳೆ ಹಲವೆಡೆ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು, ಪ್ರತಿಭಟನೆ ನೇತೃತ್ವ ವಹಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿ ಹಲವು ನಾಯಕರನ್ನು ಬಂಧಿಸಿ ನಂತರ ಬಿಡುಗಡೆ ಮಾಡಲಾಯಿತು.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋಟಿ ಹಣ ವರ್ಗಾವಣೆ ಪ್ರಕರಣದಲ್ಲಿ ಭಾಗಿಯಾಗಿರುವವರ ವಿರುದ್ಧ ನ್ಯಾಯಸಮ್ಮತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆದರೆ, ಕೋಲಾರದಲ್ಲಿ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಮುತ್ತಿಗೆ ಕಾರ್ಯಕ್ರಮ ನಡೆಯಿತು.

ಬಳ್ಳಾರಿಯಲ್ಲಿ ಮಾಜಿ ಸಚಿವ ಶ್ರೀರಾಮುಲು, ಬೆಂಗಳೂರು ಗ್ರಾಮಾಂತರದಲ್ಲಿ ಶಾಸಕ ಧೀರಜ್‌ ಮುನಿರಾಜ್, ತುಮಕೂರಿನಲ್ಲಿ ಸುರೇಶ್‌ಗೌಡ, ಜ್ಯೋತಿ ಗಣೇಶ್‌, ಕೊಪ್ಪಳದಲ್ಲಿ ಜನಾರ್ದನರೆಡ್ಡಿ, ಕಲಬುರಗಿಯಲ್ಲಿ ಬಸವರಾಜ್‌ ಮತ್ತಿಮೂಡ್‌, ಬೀದರ್‌ನಲ್ಲಿ ಭಗವಂತ ಖೂಬಾ, ಬೆಳಗಾವಿಯಲ್ಲಿ ಅನಿಲ್‌ ಬೆನಕೆ, ಗದಗದಲ್ಲಿ ಎಸ್‌.ವಿ.ಸಂಕನೂರ್‌, ದಕ್ಷಿಣ ಕನ್ನಡದಲ್ಲಿ ಮಾಜಿ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಸೇರಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಆಯಾ ಜಿಲ್ಲಾ ಮುಖಂಡರು ಪ್ರತಿಭಟನೆ ನಡೆಸಿ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಹಲವು ಜಿಲ್ಲೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಗಿದ್ದು, ಜಿಲ್ಲಾಧಿಕಾರಿಗಳ ಕಚೇರಿವರೆಗೆ ಮೆರವಣಿಗೆ ಮೂಲಕ ಆಗಮಿಸಿ ಪ್ರಕರಣ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಅಕ್ರಮವಾಗಿ ವರ್ಗಾವಣೆಯಾಗಿರುವ ಎಲ್ಲಾ ಹಣವನ್ನು ವಾಪಸ್ ಖಾತೆಗೆ ತರಿಸಿಕೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಚಿತ್ರದುರ್ಗ, ತುಮಕೂರು ಸೇರಿ ಕೆಲವೆಡೆ ಪ್ರತಿಭಟನೆ ಸಂದರ್ಭದಲ್ಲಿ ರಸ್ತೆ ತಡೆ ನಡೆಸಿ, ಟೈರ್‌ ಸುಟ್ಟು, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಪ್ರತಿಕೃತಿ ದಹಿಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಲಾಯಿತು. ಕೋಲಾರದಲ್ಲಿ ಪ್ರತಿಭಟನೆ ನೇತೃತ್ವ ವಹಿಸಿದ್ದ ಪ್ರತಿಪಕ್ಷ ನಾಯಕ ಅವರು ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಭಾಗಿಯಾಗಿದ್ದು, ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಬ್ಯಾರಿಕೇಡ್ ಕೋಟೆ: ಚಿತ್ರದುರ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲುದ್ದೇಶಿಸಿದ್ದ ಹಿನ್ನೆಲೆಯಲ್ಲಿ ಮಧ್ಯಾಹ್ನ ವರೆಗೆ ಸಾರ್ವಜನಿಕರಿಗೆ ಡಿಸಿ ಕಚೇರಿ ಪ್ರವೇಶ ನಿರ್ಬಂಧಿಸಲಾಗಿತ್ತು. ಜಿಲ್ಲಾಧಿಕಾರಿ ಕಚೇರಿಗೆ ಹೋಗುವ ನಾಲ್ಕು ಮಾರ್ಗಗಳಿಗೆ ಬ್ಯಾರಿಕೇಡ್ ಇಟ್ಟು ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ಪ್ರತಿಭಟನೆಯಲ್ಲಿ ಎರಡು ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರು ಪಾಲ್ಗೊಂಡಿದ್ದ ಹಿನ್ನೆಲೆಯಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.