ಸಾರಾಂಶ
ಕನ್ನಡಪ್ರಭ ವಾರ್ತೆ ಬೆಂಗಳೂರು
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಖಾತೆಯಿಂದ ಬೇರೆ ಬ್ಯಾಂಕ್ ಖಾತೆಗಳಿಗೆ ಅಕ್ರಮವಾಗಿ 94.73 ಕೋಟಿ ರು. ಹಣ ವರ್ಗಾವಣೆ ಮಾಡಿದ ಆರೋಪದಡಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಸಿಇಓ ಸೇರಿ ಆರು ಮಂದಿ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ನಿಗಮದ ಪ್ರಧಾನ ವ್ಯವಸ್ಥಾಪಕ ಎ.ರಾಜಶೇಖರ್ ನೀಡಿದ ದೂರಿನ ಮೇರೆಗೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಪ್ರಧಾನ ವ್ಯವಸ್ಥಾಪಕಿ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮಣಿಮೇಖಲೈ, ಬ್ಯಾಂಕಿನ ಕಾರ್ಯ ನಿರ್ವಾಹಕ ನಿರ್ದೇಶಕರಾದ ನಿತೇಶ್ ರಂಜನ್, ರಾಮಸುಬ್ರಮಣ್ಯಂ, ಸಂಜಯ್ ರುದ್ರ, ಪಂಕಜ್ ದ್ವಿವೇದಿ ಹಾಗೂ ಬ್ಯಾಂಕಿನ ಮುಖ್ಯ ವ್ಯವಸ್ಥಾಪಕಿ ಸುಚಿಶಿತ ರೌಲ್ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೂರಿನಲ್ಲಿ ಏನಿದೆ?:ಬೆಂಗಳೂರಿನ ಎಂಜಿ ರಸ್ತೆ ಯೂನಿಯನ್ ಬ್ಯಾಂಕ್‌ನಲ್ಲಿ ನಿಗಮದ ಖಾತೆ ಇದೆ. ಚುನಾವಣೆ ನೀತಿ ಸಂಹಿತೆ ಕಾರಣ ಇತ್ತೀಚೆಗೆ ನಿಗಮವು ಯಾವುದೇ ಹಣಕಾಸು ವ್ಯವಹಾರವನ್ನು ನಡೆಸಿಲ್ಲ. ಈ ನಡುವೆ ಮೇ 22ರಂದು ನಿಗಮದ ಅಧಿಕಾರಿಗಳು ಬ್ಯಾಂಕ್‌ಗೆ ತೆರಳಿ ಚೆಕ್ ಬುಕ್, ಪಾಸ್ ಬುಕ್ ಮತ್ತು ನಿಗಮದ ಖಾತೆಗೆ ಸಂಬಂಧಿಸಿದ ದಾಖಲಾತಿಗಳ ಬಗ್ಗೆ ಕೇಳಿದ್ದಾರೆ. ಆಗ ನಿಗಮಕ್ಕೆ ಸಂಬಂಧಿಸಿದ ದಾಖಲಾತಿಗಳು, ಆರ್‌ಟಿಜಿಎಸ್ ಬೋರ್ಡ್ ರೆಸೊಲ್ಯೂಷನ್ ಜತೆಗೆ ಸಹಿಯನ್ನು ನಕಲು ಮಾಡಿ ಕಾನೂನು ಬಾಹಿರವಾಗಿ ಹಣ ವರ್ಗಾವಣೆ ಮಾಡಿರುವುದು ಕಂಡುಬಂದಿದೆ. 94.73 ಕೋಟಿ ರು. ಹಣ ನಿಗಮದ ಖಾತೆಯಿಂದ ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆಯಾಗಿದೆ. ಈ ಹಣ ವರ್ಗಾವಣೆ ಬಗ್ಗೆ ನಿಗಮಕ್ಕೆ ಬ್ಯಾಂಕು ಯಾವುದೇ ಮಾಹಿತಿ ನೀಡಿರುವುದಿಲ್ಲ. ಇದರಿಂದ ನಿಗಮಕ್ಕೆ ಭಾರೀ ಪ್ರಮಾಣದ ಆರ್ಥಿಕ ನಷ್ಟ ಉಂಟಾಗಿದೆ. ಹೀಗಾಗಿ ಈ ಬಗ್ಗೆ ಸಮಗ್ರ ತನಿಖೆ ಆಗಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ.