ಸಾರಾಂಶ
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಆಶ್ರಯದಲ್ಲಿ ಜಿಲ್ಲಾಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.
ಕನ್ನಡಪ್ರಭ ವಾರ್ತೆ ಮಣಿಪಾಲ
ಮಹರ್ಷಿ ವಾಲ್ಮೀಕಿ ನಾಗರಿಕ ಸಮಾಜದ ಮೊದಲ ಅಕ್ಷರ ಜ್ಞಾನಿ. ಅವರು ಬರೆದ ರಾಮಾಯಣ ಮಹಾಕಾವ್ಯದ ಸಂದೇಶಗಳು ಇಂದಿಗೂ ಪ್ರಸ್ತುತವಾಗಿವೆ. ಅವರ ವೈಚಾರಿಕತೆಯನ್ನು, ಅಕ್ಷರ ಸಂಸ್ಕೃತಿಯನ್ನು ಮೈಗೂಡಿಸಿಕೊಂಡು ಮಾನವೀಯ ನೆಲೆಯಲ್ಲಿ ಸ್ವಾಸ್ಥ್ಯ ಸಮಾಜವನ್ನು ಕಟ್ಟಲು ಬದ್ಧರಾಗೋಣ ಮತ್ತು ಮುಂದಿನ ಪೀಳಿಗೆಗೂ ಮಾದರಿಯಾಗೋಣ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದರು.ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಆಶ್ರಯದಲ್ಲಿ ಆಯೋಜಿಸಲಾದ ಜಿಲ್ಲಾಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು.ಉಪನ್ಯಾಸಕ ಚೇತನ್ ಶೆಟ್ಟಿ ಕೋವಾಡಿ ಮಹರ್ಷಿ ವಾಲ್ಮೀಕಿ ಅವರ ಕುರಿತು ಉಪನ್ಯಾಸ ನೀಡಿ, ಮಹರ್ಷಿ ವಾಲ್ಮೀಕಿ ರಾಮಾಯಣ ಮಹಾಕಾವ್ಯದ ಮೂಲಕ ನೀಡಿದ ಮಮತೆ, ಭ್ರಾತೃತ್ವ, ತ್ಯಾಗ, ದೇಶಪ್ರೇಮದ ಚಿಂತನೆಗಳು ಸಾರ್ವಕಾಲಿಕ ದಾರಿದೀಪವಾಗಿವೆ ಎಂದರು.ಇದೇ ಸಂದರ್ಭ 2023-24 ನೇ ಸಾಲಿನಲ್ಲಿ ಕೊರಗ, ಮರಾಟಿ ನಾಯ್ಕ್ ಹಾಗೂ ಮಲೈಕುಡಿ ಸಮುದಾಯದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೋಲೀಸ್ ವರಿಷ್ಟಾಧಿಕಾರಿ ಡಾ. ಕೆ. ಅರುಣ್, ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್., ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು, ಪರಿಶಿಷ್ಟ ಪಂಗಡಗಳ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.ಐ.ಟಿ.ಡಿ.ಪಿ. ಯೋಜನಾ ಸಮನ್ವಯಾಧಿಕಾರಿ ನಾರಾಯಾಣ ಸ್ವಾಮಿ ಎಂ. ಸ್ವಾಗತಿಸಿದರು. ಐ.ಟಿ.ಡಿ.ಪಿ. ಸಿಬ್ಬಂದಿ ಶ್ರೀದೇವಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.