ದಾಖಲಾದ ಪ್ರಕರಣಗಳ ಪೈಕಿ ಭಟ್ಕಳ ಶಹರ ಹಾಗೂ ಭಟ್ಕಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತಿ ಹೆಚ್ಚು 45 ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳಲ್ಲಿ ನ್ಯಾಯಾಲಯವು ಒಟ್ಟು ₹5,38,500 ದಂಡ ವಿಧಿಸಿದೆ.

ಕಾರವಾರ: ಜಿಲ್ಲಾದ್ಯಂತ ಅಪ್ರಾಪ್ತ ವಯಸ್ಕರು ವಾಹನ ಚಾಲನೆ ಮಾಡುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಜಿಲ್ಲಾ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕಾನೂನು ಕ್ರಮಕ್ಕೆ ಮುಂದಾಗಿದೆ. ಅಪ್ರಾಪ್ತರಿಗೆ ವಾಹನ ಚಾಲನೆ ಮಾಡಲು ಅವಕಾಶ ನೀಡಿದ ಪೋಷಕರು ಹಾಗೂ ವಾಹನ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿ, ನ್ಯಾಯಾಲಯದ ಮೂಲಕ ಭಾರಿ ದಂಡ ವಿಧಿಸಲಾಗುತ್ತಿದೆ.2026ರ ಜನವರಿಯಿಂದ ಸೆಪ್ಟೆಂಬರ್‌ವರೆಗೆ ಅಪ್ರಾಪ್ತ ವಯಸ್ಕರು ವಾಹನ ಚಾಲನೆ ಮಾಡಿದ ಹಾಗೂ ಅವರಿಗೆ ವಾಹನ ನೀಡಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೋಟಾರು ವಾಹನ ಕಾಯ್ದೆ 1988ರ ಕಲಂ 199(ಎ) ಅಡಿಯಲ್ಲಿ ಜಿಲ್ಲಾದ್ಯಂತ ಒಟ್ಟು 131 ಪ್ರಕರಣಗಳು ದಾಖಲಾಗಿವೆ. ಈ ಎಲ್ಲ ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾಯಾಲಯವು ಅಪ್ರಾಪ್ತರ ಪೋಷಕರು ಹಾಗೂ ವಾಹನ ಮಾಲೀಕರಿಗೆ ಒಟ್ಟು ₹13,09,000 ದಂಡ ವಿಧಿಸಿದೆ.ದಾಖಲಾದ ಪ್ರಕರಣಗಳ ಪೈಕಿ ಭಟ್ಕಳ ಶಹರ ಹಾಗೂ ಭಟ್ಕಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತಿ ಹೆಚ್ಚು 45 ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳಲ್ಲಿ ನ್ಯಾಯಾಲಯವು ಒಟ್ಟು ₹5,38,500 ದಂಡ ವಿಧಿಸಿದೆ.ಅಪ್ರಾಪ್ತ ವಯಸ್ಕರಿಗೆ ವಾಹನ ಚಾಲನೆ ಮಾಡಲು ಅವಕಾಶ ನೀಡುವುದರಿಂದ ಅವರ ಜೀವಕ್ಕೆ ಮಾತ್ರವಲ್ಲದೆ, ರಸ್ತೆಯಲ್ಲಿ ಸಂಚರಿಸುವ ಇತರ ವಾಹನ ಸವಾರರು ಹಾಗೂ ಸಾರ್ವಜನಿಕರ ಸುರಕ್ಷತೆಗೂ ಅಪಾಯ ಉಂಟಾಗಬಹುದು ಎಂದು ಪೊಲೀಸರು ಎಚ್ಚರಿಸಿದ್ದಾರೆ. ಹೀಗಾಗಿ ಪೋಷಕರು ಯಾವುದೇ ಕಾರಣಕ್ಕೂ ಅಪ್ರಾಪ್ತ ಮಕ್ಕಳಿಗೆ ದ್ವಿಚಕ್ರ ವಾಹನ, ಕಾರು ಅಥವಾ ಇತರ ಮೋಟಾರು ವಾಹನಗಳನ್ನು ಚಾಲನೆ ಮಾಡಲು ನೀಡಬಾರದು ಎಂದು ಸೂಚಿಸಿದ್ದಾರೆ.ವಾಹನ ಮಾಲೀಕರು ಕೂಡ ಅಪ್ರಾಪ್ತರಿಗೆ ತಮ್ಮ ವಾಹನಗಳನ್ನು ನೀಡದಂತೆ ಎಚ್ಚರಿಕೆ ವಹಿಸಬೇಕು. ಅಪ್ರಾಪ್ತರಿಗೆ ವಾಹನ ನೀಡಿದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ.ಅಪ್ರಾಪ್ತರಿಗೆ ವಾಹನ ನೀಡಬೇಡಿ, ಅವರ ಸುರಕ್ಷಿತ ಭವಿಷ್ಯವನ್ನು ಕಾಪಾಡಿ ಎಂಬ ಸಂದೇಶದೊಂದಿಗೆ ಜಿಲ್ಲಾದ್ಯಂತ ವಿಶೇಷ ತಪಾಸಣೆ ಹಾಗೂ ಕಾನೂನು ಕ್ರಮ ಮುಂದುವರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ರಸ್ತೆ ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ ಪೋಷಕರು ಹಾಗೂ ವಾಹನ ಮಾಲೀಕರು ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.