ಸಾರಾಂಶ
ಕನ್ನಡಪ್ರಭ ವಾರ್ತೆ ಪುತ್ತೂರು
ಪುತ್ತೂರು- ಪಾಣಾಜೆ ಸಂಪರ್ಕ ರಸ್ತೆಯಲ್ಲಿನ ಒಳಮೊಗ್ರು ಗ್ರಾಮದ ಚೆಲ್ಯಡ್ಕ ಎಂಬಲ್ಲಿರುವ ಚೆಲ್ಯಡ್ಕ ಮುಳುಗು ಸೇತುವೆಯು ಶೀಥಿಲಾವಸ್ಥೆಯಲ್ಲಿರುವ ಹಿನ್ನಲೆಯಲ್ಲಿ ಇಂದಿನಿಂದಲೇ ಜಾರಿಗೆ ಬರುವಂತೆ ರಾತ್ರಿ ವೇಳೆ ಎಲ್ಲ ವಾಹನಗಳ ಹಾಗೂ ಹಗಲು ವೇಳೆ ಘನವಾಹನಗಳ ಸಂಚಾರವನ್ನು ನಿಷೇಧಿಸುವಂತೆ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.ತೀರಾ ಶಿಥಿಲಾವಸ್ಥೆಯಲ್ಲಿರುವ ಬೆಟ್ಟಂಪಾಡಿ ಗ್ರಾಮದ ಚೆಲ್ಯಡ್ಕದಲ್ಲಿರುವ ಮುಳುಗು ಸೇತುವೆ ಸ್ಥಳಕ್ಕೆ ಶುಕ್ರವಾರ ಸಂಜೆ ಭೇಟಿ ನೀಡಿ ಸೇತುವೆಯ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿಗಳು ಬಳಿಕ ಮಾಧ್ಯಗಳಿಗೆ ಈ ಕುರಿತು ಮಾಹಿತಿ ನೀಡಿದರು.ಸೇತುವೆ ಸಂಪೂರ್ಣವಾಗಿ ಶಿಥಿಲಾವಸ್ಥೆಯಲ್ಲಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಮತ್ತು ಭದ್ರತೆಯ ದೃಷ್ಟಿಯಿಂದ ರಾತ್ರಿ ೮ ಗಂಟೆಯಿಂದ ಬೆಳಿಗ್ಗೆ ೬ ಗಂಟೆಯ ತನಕ ರಸ್ತೆ ಬಂದ್ ಮಾಡಿ ಸಂಪೂರ್ಣವಾಗಿ ಎಲ್ಲ ವಾಹನಗಳ ಸಂಚಾರ ನಿಷೇಧಿಸಲಾಗುವುದು. ಹಗಲು ವೇಳೆ ಬಸ್ಸು, ಲಾರಿ ಸೇರಿದಂತೆ ಘನ ವಾಹನಗಳ ಸಂಚಾರವನ್ನು ನಿಷೇಧಿಸಲಾಗುವುದು. ಮಳೆಗಾಲ ಮುಗಿಯುವ ತನಕ ಯಾವುದೇ ಅನಾಹುತ ಘಟನೆಗಳು ನಡೆಯದಂತೆ ಈ ಭದ್ರತಾ ಕ್ರಮ ಕೈಗೊಳ್ಳಲಾಗುವುದು ಅಗತ್ಯವಾಗಿದೆ ಎಂದು ತಿಳಿಸಿದರು.
ಉಪವಿಭಾಗಾಧಿಕಾರಿ ಮತ್ತು ಅವರ ತಂಡ ಗ್ರಾಮ ಪಂಚಾಯಿತಿ ಜತೆಗೆ ಸಮನ್ವಯತೆ ಸಾಧಿಸಿಕೊಂಡು ಪರ್ಯಾಯ ಮತ್ತು ರಕ್ಷಣಾ ವ್ಯವಸ್ಥೆಗಳನ್ನು ಮಾಡಬೇಕಿದೆ. ಹಗಲು ವೇಳೆ ಸೇತುವೆಯ ಬಳಿ ಪೊಲೀಸ್ ಇಲಾಖೆ, ಗ್ರಾಮ ಪಂಚಾಯಿತಿ ಹಾಗೂ ಕಂದಾಯ ಇಲಾಖೆಯ ವತಿಯಿಂದ ಪ್ರತಿ ದಿನವೂ ಒಬ್ಬರು ಸಿಬ್ಬಂದಿಯನ್ನು ನಿಯೋಜಜಿಸುವಂತೆ ಸೂಚಿಸಿದರು.ಟೆಂಡರ್ ಪ್ರಕ್ರಿಯೆ ಆಗಿದೆ: ಲೋಕೋಪಯೋಗಿ ಇಲಾಖೆಯ ವತಿಯಿಂದ ಚೆಲ್ಯಡ್ಕ ಸೇತುವೆಯ ಪುನರ್ ನಿರ್ಮಾಣಕ್ಕಾಗಿ ಟೆಂಡರ್ ಪ್ರಕ್ರಿಯೆ ಆಗಿದೆ. ಶಾಸಕರು ಕೂಡ ಫಾಲೋಪ್ ಮಾಡುತ್ತಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿಗೊಂಡಿದ್ದರಿಂದ ನಿರ್ಮಾಣ ಕಾಮಗಾರಿ ಆರಂಭಿಸಲು ಸಾಧ್ಯವಾಗಿಲ್ಲ. ಮಳೆಗಾಲ ಮುಗಿದ ಬಳಿಕವೇ ಕಾಮಗಾರಿ ಆರಂಭಿಸಬೇಕಾಗಿದೆ. ಹಾಗಾಗಿ ಈ ಮಳೆಗಾಲದಲ್ಲಿ ಇಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲೇ ಬೇಕಾದ ಅನಿವಾರ್ಯತೆ ಇದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದರು.
ಉಪವಿಭಾಗಾಧಿಕಾರಿ ಜುಬಿನ್ ಮೊಹಪಾತ್ರ, ತಹಸೀಲ್ದಾರ್ ಪುರಂದರ ಹೆಗ್ಡೆ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನವೀನ್‌ಕುಮಾರ್ ಭಂಡಾರಿ, ಬೆಟ್ಟಂಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿದ್ಯಾಶ್ರೀ ಸರಳಿಕಾನ, ಸದಸ್ಯ ಪ್ರಕಾಶ್ ರೈ ಬೈಲಾಡಿ, ಒಳಮೊಗ್ರು ಗ್ರಾಮ ಪಂಚಾಯಿತಿ ಸದಸ್ಯ ಮಹೇಶ್ ಕೇರಿ, ಪುತ್ತೂರು ತಾಲೂಕು ಭೂನ್ಯಾಯ ಮಂಡಳಿ ಸದಸ್ಯ ಕೃಷ್ಣಪ್ರಸಾದ್ ಆಳ್ವ ಮತ್ತಿತರರು ಇದ್ದರು.