ಸಾರಾಂಶ
ಬೆಂಗಳೂರಿನಲ್ಲಿ ನಾರಾಯಣಪುರ ಜಲಾಶಯದಿಂದ ಕೃಷ್ಣ ನದಿಗೆ ನೀರು ಹರಿಸುವಂತೆ ಜಲಸಂಪನ್ಮೂಲ ಇಲಾಖೆಯ ಅಪರ ಕಾರ್ಯದರ್ಶಿ ರಾಕೇಶ ಸಿಂಗ್‌ಗೆ ಮುಖಂಡ ರಾಜಾ ವೇಣುಗೋಪಾಲ ನಾಯಕ ಮನವಿ ಸಲ್ಲಿಸಿದರು.
ಕನ್ನಡಪ್ರಭ ವಾರ್ತೆ ಸುರಪುರ
ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ ಅವರನ್ನು ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ್ ಅವರ ಪುತ್ರ ರಾಜಾ ವೇಣುಗೋಪಾಲ ನಾಯಕ ದೂರವಾಣಿ ಮೂಲಕ ಸಂಪರ್ಕಿಸಿ ಜನರಿಗೆ ಮತ್ತು ಜಾನುವಾರುಗಳಿಗೆ ನೀರಿನ ಸಮಸ್ಯೆ ಹೆಚ್ಚಾಗಿದ್ದು, ನಾರಾಯಣಪುರ ಜಲಾಶಯದಿಂದ ಕುಡಿಯುವ ನೀರಿಗಾಗಿ ನದಿಗೆ ಹರಿಸುವಂತೆ ಮನವಿ ಮಾಡಿದ್ದಾರೆ.ಇದಕ್ಕೆ ಸ್ಪಂದಿಸಿದ ಉಪಮುಖ್ಯಮಂತ್ರಿಗಳು ಮನವಿ ಪತ್ರವನ್ನು ಜಲಸಂಪನ್ಮೂಲ ಇಲಾಖೆಯ ಅಪರ ಕಾರ್ಯದರ್ಶಿ ರಾಕೇಶ ಸಿಂಗ್‌ಗೆ ನೀಡುವಂತೆ ತಿಳಿಸಿ, ಸಮಸ್ಯೆಗೆ ತಕ್ಷಣವೇ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದ್ದಾರೆ.
ಜಲಸಂಪನ್ಮೂಲ ಇಲಾಖೆಯ ಅಪರ ಕಾರ್ಯದರ್ಶಿಗೆ ಸಲ್ಲಿಸಿದ ಮನವಿಯಲ್ಲಿ, ಸುರಪುರ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಕೃಷ್ಣಾ ನದಿ ಅಚ್ಚುಕಟ್ಟು ಪ್ರದೇಶದ ನಾರಾಯಣಪುರ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಮತ್ತು ಕೃಷ್ಣಾ ನದಿಯ ಎಸ್ಕೆಪ್ ಗೇಟ್ ಮುಖಾಂತರ ಸುರಪುರ ಮತಕ್ಷೇತ್ರದ ಹಳ್ಳಿಗಳಿಗೆ ಕುಡಿಯುವ ನೀರಿನ ಅಭಾವನ್ನು ಹೋಗಲಾಡಿಸಲು ಈ ಕೂಡಲೇ ನೀರು ಬಿಡುಗಡೆ ಮಾಡಬೇಕು ಎಂದು ತಿಳಿಸಿದ್ದಾರೆ.ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಸುರಪುರ ಮತ್ತು ಹುಣಸಗಿ ತಾಲೂಕುಗಳನ್ನು ಪ್ರಸಕ್ತ ಸಾಲಿನಲ್ಲಿ ಬರಗಾಲ ಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದೆ. ಸುರಪುರ ನಗರ ಹಾಗೂ ಸುತ್ತಲಿನ ಪ್ರದೇಶಗಳಿಗೆ ಕುಡಿಯುವ ನೀರಿನ ಅಭಾವವನ್ನು ನೀಗಿಸಲು ನಾರಾಯಣಪುರ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಯ ಎಡದಂಡೆ ಕಾಲುವೆಯ ಮೂಲಕ ಸುರಪುರ ಮತಕ್ಷೇತ್ರದ ಹಳ್ಳಿಗಳಿಗೆ ನೀರು ಹರಿಸಬೇಕು ಎಂದು ಮನವಿ ಮಾಡಿದ್ದಾರೆ. ಜಿಪಂ ಮಾಜಿ ಅಧ್ಯಕ್ಷ ರಾಜಶೇಖರ ವಜ್ಜಲ್, ಮುಖಂಡ ವೆಂಕೋಬ ಯಾದವ ಸೇರಿದಂತೆ ಇತರರಿದ್ದರು.