ಇತಿಹಾಸ ಪ್ರಸಿದ್ದ ಸಿದ್ದಗಂಗಾ ಮಠದ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಯವರ 7ನೇ ವರ್ಷದ ಪುಣ್ಯ ಸಂಸ್ಮರಣೋತ್ಸವದಲ್ಲಿ ಭಾಗಿಯಾಗಲು ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಜ. 21 ರಂದು ಸಿದ್ದಗಂಗಾ ಮಠಕ್ಕೆ ಆಗಮಿಸಲಿದ್ದಾರೆ.
ಕನ್ನಡಪ್ರಭ ವಾರ್ತೆ, ತುಮಕೂರು
ಇತಿಹಾಸ ಪ್ರಸಿದ್ದ ಸಿದ್ದಗಂಗಾ ಮಠದ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಯವರ 7ನೇ ವರ್ಷದ ಪುಣ್ಯ ಸಂಸ್ಮರಣೋತ್ಸವದಲ್ಲಿ ಭಾಗಿಯಾಗಲು ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಜ. 21 ರಂದು ಸಿದ್ದಗಂಗಾ ಮಠಕ್ಕೆ ಆಗಮಿಸಲಿದ್ದಾರೆ.ಸಿದ್ದಗಂಗಾ ಮಠದಲ್ಲಿ ಮಠಾಧ್ಯಕ್ಷರಾದ ಸಿದ್ದಲಿಂಗ ಸ್ವಾಮೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಅವರು ಮಾತನಾಡಿ, ಜ. 21 ರಂದು ನಡೆಯಲಿರುವ ಶ್ರೀಗಳ ಪುಣ್ಯ ಸಂಸ್ಮರಣೋತ್ಸವದಲ್ಲಿ ದೇಶದ ಉಪರಾಷ್ಟ್ರಪತಿಗಳು ಭಾಗವಹಿಸಿ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಇದೇ ಮೊದಲ ಬಾರಿಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಶ್ರೀಮಠಕ್ಕೆ ಭೇಟಿ ನೀಡುತ್ತಿದ್ದಾರೆ. ಇವರು ಲೋಕಸಭಾ ಸದಸ್ಯರಾಗಿ, ರಾಜ್ಯಪಾಲರಾಗಿ ಅಪಾರ ಅನುಭವ ಹೊಂದಿದ್ದಾರೆ ಎಂದರು.
ಜ. 21 ರಂದು ಬೆಳಿಗ್ಗೆ 11 ಗಂಟೆಗೆ ಶ್ರೀಮಠದ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ನಡೆಯಲಿರುವ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಯವರ 7ನೇ ವರ್ಷದ ಸಂಸ್ಮರಣೋತ್ಸವ ಸಮಾರಂಭದ ಅಧ್ಯಕ್ಷತೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಹಿಸುವರು. ಸಮಾರಂಭದ ನೇತೃತ್ವವನ್ನು ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ವಹಿಸುವರು. ದಿವ್ಯ ಸಾನ್ನಿಧ್ಯವನ್ನು ಸದ್ಗುರು ಮಧುಸೂದನ ಸಾಯಿ ಹಾಗೂ ಶ್ರೀಮಠದ ಕಿರಿಯಶ್ರೀಗಳಾದ ಶಿವಸಿದ್ದೇಶ್ವರ ಸ್ವಾಮೀಜಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವ ವಿ. ಸೋಮಣ್ಣ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸೇರಿದಂತೆ ವಿವಿಧ ಮಠಾಧೀಶರು, ಜಿಲ್ಲೆಯ ಸಂಸದರು, ಶಾಸಕರುಗಳು, ವಿಧಾನ ಪರಿಷತ್ ಸದಸ್ಯರು, ಗಣ್ಯರು ಭಾಗವಹಿಸಲಿದ್ದಾರೆ. ಶ್ರೀಗಳ 7ನೇ ವರ್ಷದ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮಕ್ಕೆ ಭದ್ರತೆ, ದಾಸೋಹ ವ್ಯವಸ್ಥೆ ಸೇರಿದಂತೆ ಅಗತ್ಯ ಸಿದ್ದತೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.ಸಭೆಯಲ್ಲಿ ಶಾಸಕರಾದ ಬಿ. ಸುರೇಶ್‌ಗೌಡ, ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಸೇರಿದಂತೆ ಶ್ರೀಮಠದ ಆಡಳಿತ ಮಂಡಳಿ ಸದಸ್ಯರು ಭಾಗವಹಿಸಿದ್ದರು.
