ಸಾರಾಂಶ
ಕನ್ನಡಪ್ರಭ ವಾರ್ತೆ ಕೊಪ್ಪಳ
ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯ ಪ್ರಜಾಪ್ರಭುತ್ವದ ಗೆಲುವಾಗಿದೆ. ಬಿಜೆಪಿಗೆ ದುಡಿದ ನನ್ನಂತ ನಿಷ್ಠಾವಂತರನ್ನು ಕಡೆಗಣಿಸಿದ್ದನ್ನು ಗಮನಿಸಿದ್ದ ಮತದಾರರು ಕಾಂಗ್ರೆಸ್ಸಿಗೆ ಮತದಾನ ಮಾಡುವ ಮೂಲಕ ಬಿಜೆಪಿಗೆ ತಿರುಗೇಟು ನೀಡಿದ್ದಾರೆ ಎಂದು ಮಾಜಿ ಸಂಸದ ಸಂಗಣ್ಣ ಕರಡಿ ಹೇಳಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ಮರ್ಮಾಘಾತವಾಗಿದೆ. ನಿಷ್ಠಾವಂತರನ್ನು ಕಡೆಗಣಿಸಿದರೆ ಏನಾಗುತ್ತದೆ ಎಂಬುದಕ್ಕೆ ಮತದಾರರು ತೀರ್ಪು ನೀಡಿದ್ದಾರೆ. ಕಾರ್ಯಕರ್ತರು, ಅಭಿಮಾನಿಗಳು ಮನೆ ಮನೆಗೆ ಕಾಂಗ್ರೆಸ್ ಗ್ಯಾರಂಟಿ ಮುಟ್ಟಿಸುವ ಮೂಲಕ ಹಗಲು-ರಾತ್ರಿಯೆನ್ನದೇ ಕೆಲಸ ಮಾಡಿದ್ದಾರೆ. ಹಿಂದೆ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಕೊಪ್ಪಳ ಮರಳಿ ಪಡೆದಿದೆ. ಕಳೆದ 10 ವರ್ಷದಿಂದ ನಾನು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಕೆ. ರಾಜಶೇಖರ ಹಿಟ್ನಾಳ್ ಮುಂದುವರಿಸಲಿ ಎಂದಿದ್ದಾರೆ.ಸಂಗಣ್ಣ ಮನೆಯಲ್ಲಿ ಕಾಂಗ್ರೆಸ್ ವಿಜಯೋತ್ಸವ:
ಕಾಂಗ್ರೆಸ್ ಅಭ್ಯರ್ಥಿ ಕೆ. ರಾಜಶೇಖರ ಹಿಟ್ನಾಳ್ ಗೆಲುವು ಸಾಧಿಸಿದ ಹಿನ್ನೆಲೆ ಮಾಜಿ ಸಂಸದ ಸಂಗಣ್ಣ ಕರಡಿ ಮನೆಗೆ ಕಾಂಗ್ರೆಸ್ ನಾಯಕರು ಭೇಟಿ ನೀಡಿ ವಿಜಯೋತ್ಸವ ಆಚರಿಸಿದರು.ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಖಚಿತವಾಗುತ್ತಿದ್ದಂತೆ ಸಚಿವ ಶಿವರಾಜ್ ತಂಗಡಗಿ, ಶಾಸಕ ಕೆ. ರಾಘವೇಂದ್ರ ಹಿಟ್ನಾಳ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಮರೇಗೌಡ ಪಾಟೀಲ್ ಬಯ್ಯಾಪುರ ಸೇರಿ ಕಾಂಗ್ರೆಸ್‌ನ ನಾಯಕರು ಹಾಗೂ ಮುಖಂಡರು ಮಾಜಿ ಸಂಸದ ಸಂಗಣ್ಣ ಕರಡಿ ಮನೆಗೆ ಭೇಟಿ ನೀಡಿ ಸಿಹಿ ಹಂಚಿ, ಪಟಾಕಿ ಸಿಡಿಸಿದರು.ಈ ಸಂದರ್ಭ ಮಾತನಾಡಿದ ಮಾಜಿ ಸಂಸದ ಸಂಗಣ್ಣ ಕರಡಿ, ಕೊಪ್ಪಳ ಲೋಕಸಭಾ ಕ್ಷೇತ್ರದ ಮೊದಲಿನಿಂದ ಕಾಂಗ್ರೆಸ್ ಭದ್ರಕೋಟೆಯಾಗಿತ್ತು. ಕಳೆದ ಎರಡು ಅವಧಿಯಲ್ಲಿ ಬಿಜೆಪಿಯಿಂದ ನಾನು ಸಂಸದನಾಗಿದ್ದೆ. ಬದಲಾದ ರಾಜಕೀಯ ಬೆಳವಣಿಗೆಯಿಂದ ಕಾಂಗ್ರೆಸ್ ಸೇರ್ಪಡೆಗೊಂಡು ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಿ, ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿದ್ದೇವೆ. ಕಾರ್ಯಕರ್ತರು ನಿತಂತರವಾಗಿ ಶ್ರಮಿಸಿದ್ದಾರೆ ಎಂದರು.
ಕಾಂಗ್ರೆಸ್ ಮುಖಂಡರಾದ ರಾಜಶೇಖರ ಆಡೂರು ಸೇರಿದಂತೆ ಹಲವಾರು ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.