ಸಾರಾಂಶ
ಚಿತ್ರದುರ್ಗ : ಜಿಲ್ಲೆಯಲ್ಲಿ ಮಳೆ ಪ್ರಾರಂಭವಾಗಿದ್ದು, ಡೆಂಘೀ ಮತ್ತು ಇತರೆ ಕೀಟಜನ್ಯ ರೋಗಗಳ ನಿಯಂತ್ರಣಕ್ಕಾಗಿ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಡೆಂಘೀ ಮತ್ತು ಚಿಕೂನ್ ಗುನ್ಯಾ ನಿಯಂತ್ರಣ ಮತ್ತು ರಾಷ್ಟ್ರೀಯ ಡೆಂಘೀ ದಿನಾಚರಣೆ ಬಗ್ಗೆ ಜಿಲ್ಲಾಮಟ್ಟದ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಬಾರಿ ಹೆಚ್ಚಿನ ಮಳೆಯಾಗುವ ಸಂಭವವಿದ್ದು, ಮಳೆಗಾಲದಲ್ಲಿ ಡೆಂಘೀ ಹಾಗೂ ಚಿಕೂನ್ ಗುನ್ಯಾದಂತಹ ಕೀಟಜನ್ಯ ರೋಗಗಳ ಸಂಖ್ಯೆ ಬಾಧಿಸುವ ಸಾಧ್ಯತೆ ಇದೆ. ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಹೆಚ್ಚಿನ ಗಮನಹರಿಸಿ ಶಿಕ್ಷಕರ ಮೂಲಕ ಶಾಲಾ ಮಕ್ಕಳಿಗೆ ಹೆಚ್ಚಿನ ಅರಿವು ಮೂಡಿಸಬೇಕು. ಸಮುದಾಯದ ನಾಗರೀಕರು ಕೂಡ ತಮ್ಮ ಜವಾಬ್ದಾರಿ ಅರಿತು ತಮ್ಮ ಮನೆ ಹಾಗೂ ಸುತ್ತಮುತ್ತಲಿನ ಸ್ಥಳಗಳು ಶುಭ್ರವಾಗಿರಿಸಿಕೊಂಡು ಸೊಳ್ಳೆಗಳ ಉತ್ಪತ್ತಿ ತಡೆಗಟ್ಟಬೇಕು. ಆ ಮೂಲಕ ಕೀಟಜನ್ಯ ರೋಗಗಳ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಸಲಹೆ ನೀಡಿದರು.
ಡೆಂಘೀ ನಿಯಂತ್ರಣಕ್ಕಾಗಿ ವಿಶೇಷವಾಗಿ ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವ ಕಡೆ ಹಾಗೂ ಸ್ಲಂ ಏರಿಯಾಗಳಲ್ಲಿ ಜಾಗೃತಿ ಮೂಡಿಸಬೇಕು. ರೋಗ ಬಂದ ನಂತರ ಚಿಕಿತ್ಸೆ ಪಡೆ ಯುವುದಕ್ಕಿಂತ ರೋಗ ಬಾರದಂತೆ ಮುನ್ನೆಚ್ಚರಿಕೆ ಹಾಗೂ ಸಿದ್ಧತೆ ಕೈಗೊಳ್ಳುವುದು ಅತ್ಯುತ್ತಮ. ಹಾಗಾಗಿ ನಗರ ಪ್ರದೇಶಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಮೂಲಕ ಕಸ ವಿಲೇವಾರಿ ವಾಹನಗಳ ಮೂಲಕ ಜಾಗೃತಿ ಮೂಡಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಸಂಬಂಧಪಟ್ಟ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಚರಂಡಿಗಳ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಶುದ್ಧ ಕುಡಿಯುವ ನೀರು ಹಾಗೂ ಶುಚಿತ್ವಕ್ಕೆ ಹೆಚ್ಚಿನ ಗಮನಹರಿಸಬೇಕು ಅಧಿಕಾರಿಗಳಿಗೆ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಕಾಶೀ ಮಾತನಾಡಿ, ಜಿಲ್ಲೆಯಲ್ಲಿ 2019ರಲ್ಲಿ 438 ಡೆಂಘೀ ಪ್ರಕರಣಗಳು ವರದಿಯಾಗಿದ್ದವು. 2020ರಲ್ಲಿ 153 , 2021ರಲ್ಲಿ 241 , 2022ರಲ್ಲಿ 442 , 2023ರಲ್ಲಿ 377 ಪ್ರಕರಣಗಳು, 2023ರ ಮೇ 15 ರವರೆಗೆ 91, ಹಾಗೂ 2024ರ ಮೇ 15 ರವರೆಗೆ 192 ಪ್ರಕರಣಗಳು ಕಂಡು ಬಂದಿವೆ. ಡೆಂಗ್ಯೂ ನಿಯಂತ್ರಣಕ್ಕಾಗಿ ಮನೆ ಮನೆ ಲಾರ್ವಾ ಸಮೀಕ್ಷೆ ಮಾಡಲಾಗುತ್ತಿದೆ. ಪ್ರತಿ ಮನೆ-ಶಾಲೆಗಳಲ್ಲಿ ಈ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಹೈರಿಸ್ಕ್ ಪ್ರದೇಶಗಳಲ್ಲಿ ಲಾರ್ವಾಹಾರಿ ಮೀನು ಮರಿಗಳನ್ನು ಬಿಡುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ನಾಗಸಮುದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಭಾರತಿ ಆರ್ ಬಣಕಾರ್, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣ ನಾಯ್ಕ್, ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗೀರೀಶ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.