ತಾಯಿ, ಶಿಶು ಮರಣ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಿ: ವಿಜಯನಗರ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸೂಚನೆ

| Published : Oct 27 2025, 12:30 AM IST

ತಾಯಿ, ಶಿಶು ಮರಣ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಿ: ವಿಜಯನಗರ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸೂಚನೆ
Share this Article
  • FB
  • TW
  • Linkdin
  • Email

ಸಾರಾಂಶ

ವೈದ್ಯರು ಸಮಯಕ್ಕೆ ಸರಿಯಾಗಿ ಆರೋಗ್ಯ ಕೇಂದ್ರದಲ್ಲಿದ್ದು, ರೋಗಿಗಳ ತಪಾಸಣೆಗೆ ಹೆಚ್ಚಿನ ಆದ್ಯತೆ ನೀಡಬೇಕು.

ಹೊಸಪೇಟೆ: ಜಿಲ್ಲಾ ವ್ಯಾಪ್ತಿಯ ಎಲ್ಲ ಆಸ್ಪತ್ರೆಗಳಲ್ಲಿ ತಾಯಿ ಮತ್ತು ಶಿಶು ಮರಣ ಪ್ರಕರಣಗಳು ಹೆಚ್ಚಳವಾಗದಂತೆ ವೈದ್ಯಾಧಿಕಾರಿಗಳು ಸೂಕ್ತ ಕ್ರಮ ವಹಿಸಿ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ ತಾಯಂದಿರ, ಶಿಶು ಮತ್ತು ಮಕ್ಕಳ ಮರಣ ಲೆಕ್ಕಪರಿಶೋಧನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಲ್ಲ ಆಸ್ಪತ್ರೆಗಳಲ್ಲಿ ಗುಣಮಟ್ಟದ ಆರೋಗ್ಯ ಸೇವೆ ನೀಡುವಲ್ಲಿ ವೈದ್ಯರು ಸಮಯಕ್ಕೆ ಸರಿಯಾಗಿ ಆರೋಗ್ಯ ಕೇಂದ್ರದಲ್ಲಿದ್ದು, ರೋಗಿಗಳ ತಪಾಸಣೆಗೆ ಹೆಚ್ಚಿನ ಆದ್ಯತೆ ನೀಡಬೇಕು. ತಾಯಂದಿರು ಮತ್ತು ಶಿಶು, ಮಕ್ಕಳ ಸಾವು ಪ್ರಕರಣಗಳು ಹೆಚ್ಚಾಗದಂತೆ ಸೂಕ್ತ ಕ್ರಮ ವಹಿಸಬೇಕು. ಜಿಲ್ಲಾ ಕೇಂದ್ರದಲ್ಲಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಎಲ್ಲಾ ವೈದ್ಯಾಧಿಕಾರಿಗಳು, ಜಿಲ್ಲಾ ಮತ್ತು ತಾಲೂಕು ಮಟ್ಟದ ಸಭೆಗಳನ್ನು ಪ್ರತಿ ಶನಿವಾರ ಆಯೋಜಿಸಿ ಕುಂದು ಕೊರತೆಗಳಿಗೆ ಪರಿಹಾರ ಕಂಡುಕೊಳ್ಳಲು ಸೂಚಿಸಿದರು. ಈ ವಿಚಾರದಲ್ಲಿ ವೈದ್ಯರು ನಿರ್ಲಕ್ಷ್ಯ ವಹಿಸಿದರೆ, ಕಾನೂನು ಕ್ರಮಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.

ಗರ್ಭಿಣಿಯರಿಗೆ ತುರ್ತು ಸೇವೆ ಅಗತ್ಯವಿದ್ದಲ್ಲಿ ಅಂಥವರ ಮನೆಗಳಿಗೆ ತಾಲೂಕು ವೈದ್ಯಾಧಿಕಾರಿಗಳು ಮತ್ತು ಮೇಲ್ವಿಚಾರಣಾ ಸಿಬ್ಬಂದಿ ಭೇಟಿ ನೀಡಿ ಅಗತ್ಯ ಚಿಕಿತ್ಸೆ ನೀಡಲು ಮುಂದಾಗಬೇಕು. ಗುಣಮಟ್ಟದ ಸೇವೆ ಒದಗಿಸಲು ಲಭ್ಯವಿರುವ ನಿಧಿ ಬಳಕೆ ಮಾಡಿಕೊಳ್ಳಬೇಕು. ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ವೇಳೆ ಗರ್ಭಿಣಿಯರಿಗೆ ಉತ್ತಮ ಆರೋಗ್ಯ ಸಲಹೆಗಳು ಸೇರಿದಂತೆ ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ವಿವರಿಸಬೇಕು. ಆಯುಷ್ ಇಲಾಖೆಯಿಂದ ಗರ್ಭಿಣಿ ಮತ್ತು ಬಾಣಂತಿಯರ ತಪಾಸಣೆ, ಸುರಕ್ಷಿತ ಹೆರಿಗೆ ಹಾಗೂ ಪೌಷ್ಟಿಕಾಂಶದ ಬಗ್ಗೆ ಆಪ್ತ ಸಮಲೋಚನೆ ನಡೆಸಬೇಕು. ಸಾಮಾನ್ಯವಾಗಿ ರಕ್ತಹೀನತೆ, ರಕ್ತಸ್ರಾವ, ತಾಯಿ ಮರಣ ಪ್ರಮಾಣಕ್ಕೆ ಪ್ರಮುಖ ಅಂಶವಾಗಿದೆ. ಇದರ ಬಗ್ಗೆ ಆರೋಗ್ಯ ಇಲಾಖೆ ಹೆಚ್ಚು ಆದ್ಯತೆ ನೀಡಬೇಕು ಎಂದರು.

ಜಿಪಂ ಉಪಕಾರ್ಯದರ್ಶಿ ಕೆ.ತಿಮ್ಮಪ್ಪ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಲ್.ಆರ್. ಶಂಕರ ನಾಯ್ಕ, ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ಜಂಬಯ್ಯ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಷಣ್ಮುಖ ನಾಯ್ಕ, ಜಿಲ್ಲಾ ವೈದ್ಯಾಧಿಕಾರಿ ಡಾ.ಹರಿಪ್ರಸಾದ್, ಡಾ.ಭಾಸ್ಕರ್, ಡಾ.ರಾಧಿಕಾ ಸೇರಿದಂತೆ ತಾಲೂಕು ವೈದ್ಯಾಧಿಕಾರಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.