ವಿಕ್ರಂ ಗೌಡ ಎನ್‌ಕೌಂಟರ್ ನಕಲಿ ಅಲ್ಲ: ಲಕ್ಷ್ಮೀ ಹೆಬ್ಬಾಳ್ಕರ್‌

| Published : Dec 01 2024, 01:32 AM IST

ಸಾರಾಂಶ

ನಕ್ಸಲಿಸಂನ್ನು ಬೇರು ಸಮೇತ ಕಿತ್ತು ಹಾಕಬೇಕು. ಇದು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳ ನಿಲುವು. ಪರ ವಿರೋಧ ಚರ್ಚೆ ಎಲ್ಲ ಸಂದರ್ಭದಲ್ಲಿ ಇರುತ್ತದೆ. ನ್ಯಾಯಾಂಗ ತನಿಖೆ ಅವಶ್ಯಕತೆ ಇಲ್ಲ, ಬೇಕಿದ್ದರೆ ಗೃಹಸಚಿವರು ಮತ್ತು ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡುತ್ತೇನೆ ಎಂದು ಹೇಳಿದರು.

ಕನ್ನಡಪ್ರಭ ವಾರ್ತೆ ಉಡುಪಿ ಉಡುಪಿ ಜಿಲ್ಲೆಯಲ್ಲಿ ನಡೆದ ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್ ನಕಲಿ ಅಲ್ಲ. ಆದ್ದರಿಂದ ಎನ್‌ಕೌಂಟರ್‌ ಕುರಿತು ನ್ಯಾಯಾಂಗ ತನಿಖೆಯ ಅವಶ್ಯಕತೆ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸ್ಪಷ್ಟಪಡಿಸಿದ್ದಾರೆ.

ಉಡುಪಿಯ ಗೃಹ ಕಚೇರಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಎನ್‌ಕೌಂಟರ್‌ ಬಗ್ಗೆ ಪ್ರಗತಿಪರರ ಸಂಶಯಕ್ಕೆ ಪ್ರತಿಕ್ರಿಯಿಸಿದರು. ಕಾನೂನು ಚೌಕಟ್ಟಿನಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ವಿಕ್ರಂ ಗೌಡ ವಿರುದ್ಧ ಹಲವು ಪ್ರಕರಣಗಳು ಇದ್ದವು. ನಕ್ಸಲೀಯರ ವಿರುದ್ಧ ಕೂಂಬಿಂಗ್ ಮಾಡುವ ಸಂದರ್ಭದಲ್ಲಿ ಈ ಎನ್‌ಕೌಂಟರ್‌ ನಡೆದಿದೆ. ವಿಕ್ರಂ ಗೌಡ ಬಳಿ ಕೂಡ ಶಸ್ತ್ರಾಸ್ತ್ರಗಳು ಇದ್ದವು. ವಿಕ್ರಂ ಗೌಡ ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ, ಪೊಲೀಸರು ಪ್ರತಿದಾಳಿ ನಡೆಸಿದ್ದಾರೆ. ಇಲ್ಲದಿದ್ದರೆ ಪೊಲೀಸರ ಜೀವಕ್ಕೆ ಹಾನಿ ಆಗುತ್ತಿತ್ತು ಎಂದು ಹೇಳಿದರು.

ನಕ್ಸಲಿಸಂನ್ನು ಬೇರು ಸಮೇತ ಕಿತ್ತು ಹಾಕಬೇಕು. ಇದು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳ ನಿಲುವು. ಪರ ವಿರೋಧ ಚರ್ಚೆ ಎಲ್ಲ ಸಂದರ್ಭದಲ್ಲಿ ಇರುತ್ತದೆ. ನ್ಯಾಯಾಂಗ ತನಿಖೆ ಅವಶ್ಯಕತೆ ಇಲ್ಲ, ಬೇಕಿದ್ದರೆ ಗೃಹಸಚಿವರು ಮತ್ತು ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡುತ್ತೇನೆ ಎಂದು ಹೇಳಿದರು.

ವಿಕಲಚೇತನರ ಅನುದಾನ ಕಡಿತ ಇಲ್ಲ: ವಿಕಲಚೇತನ ಹಾಗೂ ಹಿರಿಯ ನಾಗರಿಕ ಇಲಾಖೆಯ ಅನುದಾನ ಕಡಿತ ಮಾಡಲಾಗಿದೆಯೇ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ನಮ್ಮ ಇಲಾಖೆ 32 ಸಾವಿರ ಕೋಟಿ ರು.ಗಿಂತ ಹೆಚ್ಚಿನ ಗಾತ್ರದ ಬಜೆಟ್ ಹೊಂದಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಾಂಗ ಚೇತನ ಯಾವುದೇ ಅನುದಾನವನ್ನು ನಾವು ಕಡಿತ ಮಾಡುವುದಿಲ್ಲ ಎಂದರು. ಬಿಜೆಪಿ ಗಲಾಟೆಯಿಂದ ನಮಗೇ ಲಾಭ!

ಕಾಂಗ್ರೆಸ್ ಪಕ್ಷನಲ್ಲಿ ಯಾವುದೇ ಭಿನ್ನಮತ ಇಲ್ಲ.‌ ನಮ್ಮಲ್ಲಿ ಭಿನ್ನಮತ ಇಲ್ಲ ಅನ್ನೋದಕ್ಕೆ 3 ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶವೇ ಉತ್ತರ. ಭಿನ್ನಮತ ಇರೋದು ಬಿಜೆಪಿಯಲ್ಲಿ ಮಾತ್ರ. ಬಿಜೆಪಿ ಭಿನ್ನಮತದ ಬಗ್ಗೆ ಮಾಧ್ಯಮಗಳೇ ದಿನಾ ತೋರಿಸುತ್ತಿವೆ. ಬಿಜೆಪಿಯೊಳಗಿನ ಗಲಾಟೆಯಿಂದ ನಮಗೇ ಲಾಭ ಎಂದು ಸಚಿವೆ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.