ಗ್ರಾಮ ಆರೋಗ್ಯ ಒಂದು ಮಹತ್ವದ ಯೋಜನೆ

| Published : Aug 30 2024, 01:11 AM IST

ಸಾರಾಂಶ

ಗ್ರಾಮೀಣ ಭಾಗದ ಜನರ ದೃಷ್ಟಿಯಿಂದ ಇಟ್ಟುಕೊಂಡು ರೂಪಿಸಲಾದ ಗ್ರಾಮ ಆರೋಗ್ಯ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಮುಂದಾಗಬೇಕೆಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ತಿಳಿಸಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಗ್ರಾಮೀಣ ಭಾಗದ ಜನರ ದೃಷ್ಟಿಯಿಂದ ಇಟ್ಟುಕೊಂಡು ರೂಪಿಸಲಾದ ಗ್ರಾಮ ಆರೋಗ್ಯ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಮುಂದಾಗಬೇಕೆಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ತಿಳಿಸಿದರು.

ಜಿಪಂ ನೂತನ ಸಭಾಭವನದಲ್ಲಿ ಗ್ರಾಮ ಆರೋಗ್ಯ ಕಾರ್ಯಕ್ರಮ ಅನುಷ್ಠಾನ ಹಿನ್ನೆಲೆಯಲ್ಲಿ ಹಮ್ಮಿಕೊಂಡ ಜಿಲ್ಲಾಮಟ್ಟದ ಎರಡು ದಿನಗಳ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಗ್ರಾಮ ಆರೋಗ್ಯ ಒಂದು ಮಹತ್ವದ ಯೋಜನೆಯಾಗಿದ್ದು, ವಿವಿಧ ಇಲಾಖೆಗಳ ಜೊತೆಗೂಡಿ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ. ಕಾರ್ಯಕ್ರಮದ ಉಸ್ತುವಾರಿ ಗ್ರಾ.ಪಂ ಟಾಸ್ಕ್‌ಪೋರ್ಸ್‌ ಸದಸ್ಯರ ಹಾಗೂ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಪಾತ್ರ ಮುಖ್ಯವಾಗಿದೆ ಎಂದರು.

ಗ್ರಾಪಂ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಗ್ರಾಮೀಣ ಜನರ ಆರೋಗ್ಯ ತಪಾಸಣೆ ಮಾಡುವುದರ ಮುಖಾಂತರ ಗ್ರಾಮೀಣ ಜನರ ಆರೋಗ್ಯ ವಿಶೇಷವಾಗಿ ಮಹಿಳೆಯರ ಆರೋಗ್ಯಕ್ಕೆ ಈ ಯೋಜನೆ ಸಹಕಾರಿಯಾಗಿದೆ. ಇಂತಹ ವಿನೂತನ ಯೋಜನೆಯನ್ನು ಕೆ.ಎಚ್.ಪಿ.ಟಿ ಸಂಸ್ಥೆಯವರು ಯೋಜನೆ ಅನುಷ್ಠಾನಗೊಳಿಸಿ ತಾಂತ್ರಿಕ ಬೆಂಬಲ ನೀಡುತ್ತಿದ್ದಾರೆ ಎಂದು ತಿಳಿಸಿದರು.

ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆ ಹಾಗೂ ಕ್ಷಯ ರೋಗ ನಿರ್ಮೂಲನೆ, ಬಾಲ್ಯ ವಿವಾಹ ತಡೆಗಟ್ಟುವಿಕೆ, ರಕ್ತಹೀನತೆ, ಮಾನಸಿಕ ಆರೋಗ್ಯ ಹೀಗೆ ವಿವಿಧ ಇಲಾಖೆಗಳ ಜೊತೆಗೂಡಿ ಗ್ರಾಮ ಆರೋಗ್ಯ ಕಾರ್ಯಕ್ರಮ ಅನುಷ್ಠಾನಗೊಳಿಸಬೇಕಿದೆ. ಆದ್ದರಿಂದ ಜಿಲ್ಲಾ ಮಟ್ಟದಲ್ಲಿ ಎರಡು ದಿನಗಳವರೆಗೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಇದರ ಸದುಪಯೋಗವನ್ನು ಪಡೆದುಕೊಂಡು ಪಂಚಾಯಿತಿ ಮಟ್ಟದಲ್ಲಿ ತರಬೇತಿ ನೀಡಲು ಸಜ್ಜಾಗಬೇಕಿದೆ ಎಂದರು.

ಜಿಪಂ ಉಪ ಕಾರ್ಯದರ್ಶಿ ಎನ್.ವೈ.ಬಸರಿಗಿಡದ ಮಾತನಾಡಿ, ಗ್ರಾಮ ಆರೋಗ್ಯ ಕಾರ್ಯಕ್ರಮದ ಯಶಸ್ವಿ ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿ ಸಿಬ್ಬಂದಿ, ಆರೋಗ್ಯ ಇಲಾಖೆಯ ಸಿಬ್ಬಂದಿ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿಯ ಒಗ್ಗೂಡುವಿಕೆ ಪ್ರಮುಖವಾಗಿದೆ. ಯೋಜನೆಯ ರೂಪಿಸುವಲ್ಲಿ ಪಂಚಾಯಿತಿ ಮಟ್ಟದಲ್ಲಿ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಂದು ವರ್ಗಕ್ಕೆ ಒಂದು ಬಾರಿಯಾದರೂ ಆರೋಗ್ಯ ತಪಾಸಣೆಯ ಮಾಡಿಸಿಕೊಳ್ಳುವಂತೆ ಅರಿವು ಕಾರ್ಯಕ್ರಮಗಳನ್ನು ನೀಡಿ ಜನರನ್ನು ತಪಾಸಣೆಗೆ ಒಳಪಡಿಸುವುದು ಪ್ರಮುಖ ಜವಾಬ್ದಾರಿಯಾಗಿದೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೆ.ಎಚ್.ಪಿಟಿ ಸಂಸ್ಥೆಯ ಬೆಳಗಾವಿ ವಲಯ ಸಂಯೋಜಕ ಡಾ.ಭಾರತಿ ತರಬೇತಿ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸಂಪನ್ಮೂಲ ವ್ಯಕ್ತಿಗಳು, ಎಸ್.ಐ.ಆರ್.ಡಿ ಕೇಂದ್ರೀಕೃತ ತರಬೇತಿ ಸಂಯೋಜಕರು, ಕೆ.ಎಚ್.ಪಿ.ಟಿ ಸಂಸ್ಥೆಯ ಸಿಬ್ಬಂದಿ ಹಾಗೂ ಜಿಪಂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.