ನಾಗೂರಲ್ಲಿ ಗ್ರಾಮ ಮಟ್ಟದ ಜನಸ್ಪಂದನ ಕಾರ್ಯಕ್ರಮ

| Published : Aug 01 2024, 12:16 AM IST / Updated: Aug 01 2024, 12:17 AM IST

ನಾಗೂರಲ್ಲಿ ಗ್ರಾಮ ಮಟ್ಟದ ಜನಸ್ಪಂದನ ಕಾರ್ಯಕ್ರಮ
Share this Article
  • FB
  • TW
  • Linkdin
  • Email

ಸಾರಾಂಶ

ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿ, ಗ್ರಾಮೀಣ ಭಾಗದ ಜನರ ಸಮಸ್ಯೆ ಆಲಿಸಲು ಅಧಿಕಾರಿಗಳು ಮನೆ ಬಾಗಿಲಿಗೆ ಬಂದಿದ್ದು, ಇದರ ಲಾಭ ಪಡೆಯಬೇಕು ಎಂದರು. ಗ್ರಾಮಸ್ಥರು ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿನಿಯರ ಸಂಖ್ಯೆ ಹೆಚ್ಚಾಗಿದ್ದು, ಪದವಿ ಪೂರ್ವ ಕಾಲೇಜು ಪ್ರಾರಂಭಿಸಲು ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ಕಲಬುರಗಿ

ಕಮಲಾಪುರ ತಾಲೂಕಿನ ನಾಗೂರ ಗ್ರಾಮದಲ್ಲಿ ಗ್ರಾಮ ಪಂಚಾಯ್ತಿ ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಕಲಬುರಗಿ ಜಿಪಂ ಸಿಇಓ ಭಂವರ್ ಸಿಂಗ್ ಮೀನಾ ಉದ್ಘಾಟಿಸಿದರು.

ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿ, ಗ್ರಾಮೀಣ ಭಾಗದ ಜನರ ಸಮಸ್ಯೆ ಆಲಿಸಲು ಅಧಿಕಾರಿಗಳು ಮನೆ ಬಾಗಿಲಿಗೆ ಬಂದಿದ್ದು, ಇದರ ಲಾಭ ಪಡೆಯಬೇಕು ಎಂದರು. ಗ್ರಾಮಸ್ಥರು ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿನಿಯರ ಸಂಖ್ಯೆ ಹೆಚ್ಚಾಗಿದ್ದು, ಪದವಿ ಪೂರ್ವ ಕಾಲೇಜು ಪ್ರಾರಂಭಿಸಲು ಮನವಿ ಮಾಡಿದರು. ಮನವಿಗೆ ಸ್ಪಂದಿಸಿ ಕಾಲೇಜು ಸ್ಥಾಪನೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.

ಗ್ರಾಮದಲ್ಲಿ ಚರಂಡಿ ಸುಧಾರಣೆ ಮಾಡಲು, ರೈತರ ಜಮೀನುಗಳಿಗೆ ರಸ್ತೆ ನಿರ್ಮಾಣ ಮಾಡಲು, ವಿದ್ಯುತ್ ಸಮಸ್ಯೆ ಬಗೆಹರಿಸಲು ಮನವಿ ಮಾಡಿದರು. ವಿದ್ಯುತ್ ಸಮಸ್ಯೆ ಕುರಿತಂತೆ ಸ್ಥಳದಲ್ಲಿದ್ದ ಜೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಸೂಚಿಸಿದರು. ವಿದ್ಯುತ್ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಜೆಸ್ಕಾಂ ಎಂಡಿ ಅವರ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಆರೋಗ್ಯ ತಪಾಸಣೆ ಶಿಬಿರಕ್ಕೆ ಚಾಲನೆ ನೀಡಿದರು.

ಸರ್ಕಾರದ ವಿವಿಧ ಇಲಾಖೆಗಳ ಯೋಜನೆಗಳ ಸೌಲಭ್ಯಗಳನ್ನು ಸಮರ್ಪಕವಾಗಿ ಸದುಪಯೋಗಪಡಿಸಿಕೊಳ್ಳಲು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.

ಜಿ.ಪಂ. ಸಿಇಓ ಅವರು ಪ್ರೌಢ ಶಾಲೆ ಹಾಗೂ ಅಂಗನವಾಡಿ ಭೇಟಿ: ನಾಗೂರ ಗ್ರಾಮದ ಸರಕಾರಿ ಪ್ರೌಢ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಬೋಧಿಸಿ ಅವರೊಂದಿಗೆ ಸಂವಾದ ನಡೆಸಿದರು. ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಜವಾಬ್ದಾರಿ ತಮ್ಮ ಮೇಲಿದೆ ಎಂದು ಸ್ಥಳದಲ್ಲಿದ್ದ ಮುಖ್ಯ ಗುರುಗಳಿಗೆ ಹಾಗೂ ಶಿಕ್ಷಕರಿಗೆ ಸೂಚಿಸಿದರು. ಶಾಲಾ ಆವರಣದಲ್ಲಿ ಕಿಚನ್ ಗಾರ್ಡನ್ ನಿರ್ಮಾಣ ಮಾಡಲು ಸೂಚಿಸಿದರು. ನಂತರ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿ ಮಕ್ಕಳಿಗೆ ಉತ್ತಮ ಶಿಕ್ಷಣ ಹಾಗೂ ಪೌಷ್ಟಿಕ ಆಹಾರ ನೀಡಬೇಕು ಎಂದು ಸ್ಥಳದಲ್ಲಿದ್ದ ಸಿಡಿಪಿಓ ಅವರಿಗೆ ಸೂಚಿಸಿದರು.

ಈ ಗ್ರಾಮ ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಗ್ರಾಮದ ಗಣ್ಯರು ಉಪಸ್ಥಿತರಿದ್ದರು.