ಕನ್ನಡಪ್ರಭ ವಾರ್ತೆ ತಿಪಟೂರು

ತಾಲೂಕಿನ ಮಡೆನೂರು ಭೋವಿ ಕಾಲೋನಿ ಅಯ್ಯನಬಾವಿ ಹತ್ತಿರ ರಾಷ್ಟ್ರೀಯ ಹೆದ್ದಾರಿ ತುಮಕೂರು-ಶಿವಮೊಗ್ಗ ಚತುಷ್ಪಥ ರಸ್ತೆ ಅವೈಜ್ಞಾನಿಕ ಕಾಮಗಾರಿ ನಡೆಯುತ್ತಿದ್ದು ಕೂಡಲೇ ಅಲ್ಲಿ ಅಂಡರ್‌ ಪಾಸ್‌ ನಿರ್ಮಾಣ ಮಾಡಬೇಕು ಎಂದು ಕೆಪಿಸಿಸಿ ಸದಸ್ಯವಿ. ಯೋಗೇಶ್ ಆಗ್ರಹಿಸಿದರು.

ಮಂಗಳವಾರ ಅಂಡರ್‌ ಪಾಸ್‌ ನಿರ್ಮಾಣಕ್ಕಾಗಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕಳೆದ ಹತ್ತು ವರ್ಷಗಳಿಂದ ಕಾಮಗಾರಿ ಆಮೆಗತಿಯಲ್ಲಿ ನಡೆಯುತ್ತಿರುವುದಲ್ಲದೆ ಬಹುತೇಕ ಕಳಪೆಯಿಂದಲೂ, ಅವೈಜ್ಞಾನಿಕತೆಯಿಂದಲೂ ನಡೆಯುತ್ತಿದೆ. ಅಯ್ಯನಬಾವಿ ಕಾಲೋನಿಯು ಮುಖ್ಯ ರಸ್ತೆಯನ್ನು ಇಬ್ಬಾಗ ಮಾಡಿಕೊಂಡಿದ್ದು ರಸ್ತೆಯ ಎರಡೂ ಕಡೆಗಳಲ್ಲಿ ಗ್ರಾಮವಿದೆ. ಅಲ್ಲದೇ ಈ ಎರಡೂ ಕಡೆಯ ಸಂಪರ್ಕ ಬಹುಮುಖ್ಯವಾಗಿದೆ. ಕಳೆದ ಹಲವಾರು ವರ್ಷಗಳಿಂದಲೂ ಇಲ್ಲಿ ಅಂಡರ್ ಪಾಸ್ ನಿರ್ಮಾಣಕ್ಕಾಗಿ ಹೋರಾಟ ನಡೆಯುತ್ತಿದೆ. ಆದರೂ ಸಹ ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ. ಅಧಿಕಾರಿಗಳು ತಮ್ಮ ಧೋರಣೆ ಬದಲಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.

ಇದೇ ಸಂದರ್ಭದಲ್ಲಿ ಧರಣಿ ಸ್ಥಳಕ್ಕೆ ಆಗಮಿಸಿದ ತಾಲೂಕು ಉಪವಿಭಾಗಧಿಕಾರಿ ಸಪ್ತಶ್ರೀಯವರೊಡನೆ ಚರ್ಚಿಸಿ ಹೆದ್ದಾರಿ ಅಧಿಕಾರಿಗಳು ಹಾಗೂ ತಾಲೂಕು ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಉಪವಿಭಾಗಾಧಿಕಾರಿಗಳು ಶೀಘ್ರದಲ್ಲಿ ಗ್ರಾಮಸ್ಥರ ಸಮಸ್ಯೆಗೆ ಪರಿಹಾರ ಒದಗಿಸಿ ಕೊಡಲು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು. ಕೂಡಲೆ ಪರಿಹಾರ ಒದಗಿಸದಿದ್ದರೆ ಉಗ್ರ ಹೋರಾಟ ಮಾಡಲಾಗುವುದೆಂದು ಯೋಗೇಶ್ ಹಾಗೂ ಗ್ರಾಮಸ್ಥರು ಎಚ್ಚರಿಕೆ ನೀಡಿದರು.