ಸಾರಾಂಶ
ಹದಗೆಟ್ಟಿರುವ ರಸ್ತೆಯ ಹೊಂಡ ಗುಂಡಿಗಳಿಂದ ಬೇಸತ್ತಿರುವ ಗ್ರಾಮಸ್ಥರು ಆಡಳಿತ ವ್ಯವಸ್ಥೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಮಡಿಕೇರಿ
ಚೇರಂಬಾಣೆ-ಬೇಂಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಕ-ಕೊಳಗದಾಳು ಗ್ರಾಮದ ಜನರು ಕಳೆದ 10 ದಿನಗಳಿಂದ ವಿದ್ಯುತ್ ಇಲ್ಲದೆ ಪರದಾಡುತ್ತಿದ್ದಾರೆ. ಹದಗೆಟ್ಟಿರುವ ರಸ್ತೆಯ ಹೊಂಡಗುಂಡಿಗಳಿಂದ ಬೇಸತ್ತಿರುವ ಗ್ರಾಮಸ್ಥರು ಆಡಳಿತ ವ್ಯವಸ್ಥೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಪಂಚಾಯಿತಿ ಸದಸ್ಯರಿಗೆ ಮನವಿ ಪತ್ರ ಸಲ್ಲಿಸಿದ ಗ್ರಾಮಸ್ಥರು ರಸ್ತೆ ಅವ್ಯವಸ್ಥೆ ಮತ್ತು ವಿದ್ಯುತ್ ಕಡಿತದಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಗಮನ ಸೆಳೆದರು.
ಪಾಕ-ಕೊಳಗದಾಳು ಗ್ರಾಮದ ರಸ್ತೆಗಳು ಗುಂಡಿಮಯವಾಗಿದ್ದು, ಮಳೆ ನೀರು ನಿಂತು ವಾಹನಗಳ ಸಂಚಾರ ಹಾಗೂ ಸಾರ್ವಜನಿಕರ ಓಡಾಟ ಅಸಾಧ್ಯವಾಗಿದೆ. ಹೊಂಡಗುಂಡಿಗಳಲ್ಲಿ ರಸ್ತೆಯನ್ನು ಹುಡುಕಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ ಕಳೆದ ಹತ್ತು ದಿನಗಳಿಂದ ವಿದ್ಯುತ್ ಸಂಪರ್ಕ ಕಡಿತಗೊಂಡು ಗ್ರಾಮಸ್ಥರು ಕತ್ತಲಲ್ಲಿ ಕಾಲ ಕಳೆಯುವಂತಾಗಿದೆ. ವಯೋವೃದ್ಧರು ಕಷ್ಟ ಪಡುವಂತಾಗಿದ್ದು, ವಿದ್ಯಾರ್ಥಿಗಳ ವಿದ್ಯಾರ್ಜನೆಗೂ ಅಡಚಣೆಯಾಗಿದೆ.ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಈ ಬಗ್ಗೆ ಗಮನ ಹರಿಸಿ ಕ್ರಮ ಕೈಗೊಳ್ಳಬೇಕು. ಮನವಿಗೆ ಯಾವುದೇ ಸ್ಪಂದನೆ ದೊರೆಯದೇ ಇದ್ದಲ್ಲಿ ಮುಂಬರುವ ಎಲ್ಲಾ ಚುನಾವಣೆಗಳನ್ನು ಬಹಿಷ್ಕರಿಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದರು.