ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಮಹಿಳೆಯರ ಮೇಲಿನ ಯಾವುದೇ ರೀತಿಯ ದೌರ್ಜನ್ಯ, ಲೈಂಗಿಕ ಕಿರುಕುಳ ಮತ್ತು ತಾರತಮ್ಯಕ್ಕೆ ಸಮಾಜದಲ್ಲಿ ಅವಕಾಶ ಇರಬಾರದು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿದರು.

ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಗುರುವಾರ ಜಿಲ್ಲಾಡಳಿತ, ಜಿಪಂ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಸ್ಥಳೀಯ ಮತ್ತು ಆಂತರಿಕ ದೂರು ನಿರ್ವಹಣಾ ಸಮಿತಿ ಅಧ್ಯಕ್ಷರಿಗೆ ಹಮ್ಮಿಕೊಂಡ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ಕಾಯ್ದೆ 2013ರ ಕುರಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆಯರ ಘನತೆ ಮತ್ತು ಹಕ್ಕುಗಳನ್ನು ರಕ್ಷಿಸುವ ಉದ್ದೇಶದಿಂದ ಈ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಸರ್ಕಾರಿ, ಖಾಸಗಿ, ಶೈಕ್ಷಣಿಕ ಹಾಗೂ ಇತರೆ ಉದ್ಯೋಗ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಸುರಕ್ಷಿತ ಕೆಲಸದ ವಾತಾವರಣ ಕಲ್ಪಿಸುವುದು ಕಡ್ಡಾಯವಾಗಿದೆ. ಪ್ರತಿಯೊಂದು ಸಂಸ್ಥೆಯಲ್ಲೂ ಆಂತರಿಕ ದೂರು ಸಮಿತಿ ರಚಿಸಿ, ದೂರುಗಳನ್ನು ಗೌಪ್ಯವಾಗಿ ಹಾಗೂ ನ್ಯಾಯಯುತವಾಗಿ ಪರಿಶೀಲಿಸಬೇಕು. ನಮ್ಮ ದೇಶದಲ್ಲಿ ಹೆಣ್ಣನ್ನು ಪೂಜ್ಯ ಭಾವನೆಯಿಂದ ನೋಡುತ್ತಿದ್ದರೂ ಸಹ ಅವರ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ. ಇದು ನಿಲ್ಲಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಸಂಗಪ್ಪ ಮಾತನಾಡಿ, ಮಹಿಳೆಯರನ್ನು ಗೌರವಿಸುವುದು ಕೇವಲ ಕಾನೂನಿನ ಪಾಲನೆಯಲ್ಲ, ಅದು ನಮ್ಮ ಸಂಸ್ಕಾರ, ನಮ್ಮ ಮಾನವೀಯತೆ ಮತ್ತು ನಮ್ಮ ಸಾಮಾಜಿಕ ಜವಾಬ್ದಾರಿಯಾಗಿದೆ. ಪೋಶ್ ಅಧಿನಿಯಮದ ಮೂಲ ಆಶಯಗಳು ಮುಖ್ಯವಾಗಿ ತಡೆಗಟ್ಟುವಿಕೆ, ನಿಷೇಧ ಹಾಗೂ ಪರಿಹಾರ ಒಳಗೊಂಡಿದೆ. ಮಹಿಳೆಯರು ಆತ್ಮವಿಶ್ವಾಸದಿಂದ ಕೆಲಸ ಮಾಡಬೇಕು. ಮಹಿಳೆಯರಿಗೆ ಸುರಕ್ಷಿತ, ಗೌರವಯುತ ಮತ್ತು ಸಮಾನ ಅವಕಾಶಗಳನ್ನು ಒದಗಿಸುವ ಜಿಲ್ಲೆಯಾಗಿ ರೂಪಿಸುವ ಪ್ರಯತ್ನಕ್ಕೆ ಎಲ್ಲರೂ ಕೈಜೋಡಿಸಬೇಕಿದೆ ಎಂದರು.


ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ ಮಾತನಾಡಿ, ಮಹಿಳೆಯರಿಗೆ ಉಚಿತವಾಗಿ ಕಾನೂನು ಸೇವೆ ಒದಗಿಸಲಾಗುತ್ತಿದೆ. ಪೋಶ್-2013ರ ಕಾಯ್ದೆಯು ಮಹಿಳೆಯರಿಗೆ ಸುರಕ್ಷಿತ ಹಾಗೂ ಗೌರವಯುತ ಕೆಲಸದ ವಾತಾವರಣ ಕಲ್ಪಿಸುವ ಮಹತ್ವದ ಕಾನೂನಾಗಿದ್ದು, ಮಹಿಳೆಯರು ಲೈಂಗಿಕ ಕಿರುಕುಳಕ್ಕೆ ಒಳಗಾದರೆ ಭಯಪಡದೆ ಕಾನೂನಿನ ನೆರವು ಪಡೆಯಬೇಕು ಎಂದರು. ಜಿಪಂ ಸಿಇಒ ಗಜಾನನ ಬಾಲೆ ಮಾತನಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ ಗೋಯಲ್, ಜಿಪಂ ಉಪ ಕಾರ್ಯದರ್ಶಿ ಎನ್.ವೈ.ಬಸರಿಗಿಡದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಪ್ರಭಾಕರ.ಕೆ, ಸಂಪನ್ಮೂಲ ವ್ಯಕ್ತಿ ಟಿ.ಎಸ್.ಚಂದ್ರಿಕ, ಜಿಲ್ಲಾ ನಿರೂಪಣಾಧಿಕಾರಿ ಮಂಜುನಾಥ ಪರಸನ್ನವರ ಸೇರಿ ಇತರರು ಉಪಸ್ಥಿತರಿದ್ದರು.

ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳೆಯರು ಧೈರ್ಯದಿಂದ ದೂರು ಸಲ್ಲಿಸಬೇಕು. ಮಹಿಳೆಯರ ವಿರುದ್ಧ ನಡೆಯುವ ಯಾವುದೇ ರೀತಿಯ ದೌರ್ಜನ್ಯವನ್ನು ಸಮಾಜ ಸಹಿಸಬಾರದು. ಮಹಿಳೆಯರ ಗೌರವ ಮತ್ತು ಸಮಾನತೆ ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ಮಹಿಳೆಯರ ಸುರಕ್ಷತೆ ತಮ್ಮ ಕೈಯಲ್ಲಿದೆ. ಇದನ್ನು ಅರಿತು ತಮ್ಮ ರಕ್ಷಣೆ ಮಾಡಿಕೊಳ್ಳಲು ಮುಂದಾಗಬೇಕು. ಪೋಶ್ ಎಂಬ ಕಾಯ್ದೆ ಜಾರಿಗೆ ಬರಲು ಕಾರಣರಾದವರ ಹೋರಾಟದ ಬಗೆ.

-ನಾಗಲಕ್ಷ್ಮೀ ಚೌಧರಿ, ಅಧ್ಯಕ್ಷೆ, ರಾಜ್ಯ ಮಹಿಳಾ ಆಯೋಗ