ನಗರ ಪೊಲೀಸ್ ಠಾಣೆಗೆ ಭೇಟಿ ನೀಡಿದ ತಂಡ, ಸರ್ಕಲ್ ಇನ್‌ಸ್ಪೆಕ್ಟರ್ ಅನಂತರಾಮ್ ಹಾಗೂ ಎಸ್‌ಐ ರತ್ನಮ್ಮ ಅವರೊಂದಿಗೆ ಚರ್ಚಿಸಿ, ಠಾಣೆಗೆ ಬರುವ ಮಕ್ಕಳಿಗೆ ಭಯಮುಕ್ತ ವಾತಾವರಣ ಕಲ್ಪಿಸಲಾಗುತ್ತಿದೆಯೇ, ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗದಂತೆ ನಿಯಮಗಳನ್ನು ಪಾಲಿಸಲಾಗುತ್ತಿದೆಯೇ ಎಂಬುದರ ಕುರಿತು ಮಾಹಿತಿ ಪಡೆದುಕೊಂಡರು. ಮಕ್ಕಳ ಸುರಕ್ಷತೆ ಹಾಗೂ ರಕ್ಷಣೆಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಕೈಗೊಂಡಿರುವ ಕ್ರಮಗಳ ಬಗ್ಗೆಯೂ ಪರಿಶೀಲಿಸಿದರು.
ಕನ್ನಡಪ್ರಭ ವಾರ್ತೆ ಕನಕಪುರ
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರು ನಗರದ ಪೊಲೀಸ್ ಠಾಣೆ, ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳು ಹಾಗೂ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ, ಮಕ್ಕಳ ಸುರಕ್ಷತೆ, ಶಿಕ್ಷಣ ಮತ್ತು ದೌರ್ಜನ್ಯ ತಡೆಗೆ ಕೈಗೊಳ್ಳಲಾಗಿರುವ ಕ್ರಮಗಳನ್ನು ಪರಿಶೀಲಿಸಿದರು.ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಜಗನ್ನಾಥ್ ಅಳಮಡಗಿ ಹಾಗೂ ಜಿಲ್ಲಾ ಮಕ್ಕಳ ಆಯೋಗದ ಅಧಿಕಾರಿಗಳು ನಗರದ ವಿವಿಧೆಡೆ ಭೇಟಿ ನೀಡಿ ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಕಾರ್ಯಗಳ ಕುರಿತು ಪರಿಶೀಲನೆ ನಡೆಸಿದರು.
ನಗರ ಪೊಲೀಸ್ ಠಾಣೆಗೆ ಭೇಟಿ ನೀಡಿದ ತಂಡ, ಸರ್ಕಲ್ ಇನ್‌ಸ್ಪೆಕ್ಟರ್ ಅನಂತರಾಮ್ ಹಾಗೂ ಎಸ್‌ಐ ರತ್ನಮ್ಮ ಅವರೊಂದಿಗೆ ಚರ್ಚಿಸಿ, ಠಾಣೆಗೆ ಬರುವ ಮಕ್ಕಳಿಗೆ ಭಯಮುಕ್ತ ವಾತಾವರಣ ಕಲ್ಪಿಸಲಾಗುತ್ತಿದೆಯೇ, ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗದಂತೆ ನಿಯಮಗಳನ್ನು ಪಾಲಿಸಲಾಗುತ್ತಿದೆಯೇ ಎಂಬುದರ ಕುರಿತು ಮಾಹಿತಿ ಪಡೆದುಕೊಂಡರು. ಮಕ್ಕಳ ಸುರಕ್ಷತೆ ಹಾಗೂ ರಕ್ಷಣೆಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಕೈಗೊಂಡಿರುವ ಕ್ರಮಗಳ ಬಗ್ಗೆಯೂ ಪರಿಶೀಲಿಸಿದರು.ನಂತರ ನಗರದ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯ, ಜಿಕೆಬಿಎಂಎಸ್ ಶಾಲೆ ಹಾಗೂ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಸೇರಿ ವಿವಿಧ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ, ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ದೊರೆಯುತ್ತಿರುವ ಸೌಲಭ್ಯಗಳು ಸಮರ್ಪಕವಾಗಿ ತಲುಪುತ್ತಿವೆಯೇ, ಆಹಾರ, ವಸತಿ, ಕುಡಿಯುವ ನೀರು, ಶೌಚಾಲಯ ಸೇರಿ ಅಗತ್ಯ ಮೂಲಸೌಕರ್ಯಗಳ ಸ್ಥಿತಿಗತಿ ಹೇಗಿದೆ ಎಂಬುದನ್ನು ಪರಿಶೀಲಿಸಿದರು. ವಿದ್ಯಾರ್ಥಿಗಳಿಂದ ಮಾಹಿತಿ ಪಡೆದು ಶಾಲೆಗಳಲ್ಲಿ ಮಕ್ಕಳ ಶಿಕ್ಷಣ, ಸುರಕ್ಷತೆ ಹಾಗೂ ದೌರ್ಜನ್ಯ ತಡೆಗೆ ಕೈಗೊಂಡಿರುವ ಸೂಕ್ತ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದರು.
ಜಿಲ್ಲಾ ಮಕ್ಕಳ ಆಯೋಗದ ಅಧಿಕಾರಿ ಲಕ್ಷ್ಮಣ್, ಸಮಾಜ ಕಲ್ಯಾಣ ಇಲಾಖೆಯ ವ್ಯವಸ್ಥಾಪಕ ವೇದಮೂರ್ತಿ, ಮೇಲ್ವಿಚಾರಕರಾದ ಸತೀಶ್, ವಸಂತಕುಮಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.