ಜಿಲ್ಲೆಯ 91 ಅಪೌಷ್ಟಿಕ ಮಕ್ಕಳನ್ನು ಗುರುತಿಸಿ ಪಾಳಿ ವ್ಯವಸ್ಥೆಯಲ್ಲಿ ಚಿಕಿತ್ಸೆ ನೀಡಿ

| Published : Nov 07 2025, 01:15 AM IST

ಜಿಲ್ಲೆಯ 91 ಅಪೌಷ್ಟಿಕ ಮಕ್ಕಳನ್ನು ಗುರುತಿಸಿ ಪಾಳಿ ವ್ಯವಸ್ಥೆಯಲ್ಲಿ ಚಿಕಿತ್ಸೆ ನೀಡಿ
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲೆಯಲ್ಲಿ 91 ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಆದರೆ, ಆಸ್ಪತ್ರೆಯಲ್ಲಿರುವ ವಾರ್ಡ್ ಗಳಲ್ಲಿ ಒಂದು ಮಕ್ಕಳು ಕೂಡ ದಾಖಲಾಗಿಲ್ಲ.

ಕನ್ನಡಪ್ರಭ ವಾರ್ತೆ ಮೈಸೂರುಜಿಲ್ಲೆಯಲ್ಲಿರುವ 91 ಅಪೌಷ್ಟಿಕ ಮಕ್ಕಳನ್ನು ಗುರುತಿಸಿ ಪಾಳಿ ವ್ಯವಸ್ಥೆಯಲ್ಲಿ ಚಿಕಿತ್ಸೆ ನೀಡಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ಶಶಿಧರ್ ಕೂಸುಂಬೆ ಸೂಚಿಸಿದರು.ನಗರದ ಕೆ.ಆರ್. ಆಸ್ಪತ್ರೆ ಆವರಣದಲ್ಲಿರುವ ಚೆಲುವಾಂಬ ಮಕ್ಕಳ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಅಪೌಷ್ಟಿಕ ಮಕ್ಕಳ ಸಂಖ್ಯೆ ಕಡಿಮೆಯಾಗಬೇಕು ಹಾಗೂ ಗುರುತಿಸಲಾಗುವ ಅಪೌಷ್ಟಿಕ ಮಕ್ಕಳಿಗೆ ಸರಿಯಾದ ಆರೈಕೆ ಒದಗಿಸಿ ಅವರನ್ನು ಗುಣಮುಖರಾಗುವಂತೆ ನೋಡಿಕೊಳ್ಳಬೇಕು ಎಂದರು.ಜಿಲ್ಲೆಯಲ್ಲಿ 91 ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಆದರೆ, ಆಸ್ಪತ್ರೆಯಲ್ಲಿರುವ ವಾರ್ಡ್ ಗಳಲ್ಲಿ ಒಂದು ಮಕ್ಕಳು ಕೂಡ ದಾಖಲಾಗಿಲ್ಲ. ಸರ್ಕಾರ ನೀಡುತ್ತಿರುವ ಸವಲತ್ತು ಆ ಮಕ್ಕಳಿಗೆ ತಲುಪುತ್ತಿಲ್ಲ. ಇನ್ನೂ 3 ದಿನಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸಭೆ ನಡೆಸಿ, 91 ಮಕ್ಕಳನ್ನು ಗುರುತಿಸಿ ಪಾಳಿ ವ್ಯವಸ್ಥೆಯಲ್ಲಿ ಚಿಕಿತ್ಸೆ ನೀಡಿ, ನಮಗೆ ವರದಿ ನೀಡಬೇಕು. ಇಲ್ಲದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ವಹಿಸಲಾಗುವುದು ಎಂದು ಅವರು ಎಚ್ಚರಿಸಿದರು.ಚೆಲುವಾಂಬ ಆಸ್ಪತ್ರೆಯಲ್ಲಿ ಅಳವಡಿಸಲಾಗಿರುವ ಮಕ್ಕಳ ಅಪೌಷ್ಟಿಕ ಪುನರ್ವಸತಿ ಕೇಂದ್ರ ಎಂಬ ಫಲಕವನ್ನು ತೆಗೆದು ಮಕ್ಕಳ ಅಪೌಷ್ಟಿಕ ಪುನರ್ ಚೇತನ ಘಟಕ ಎಂದು ನಾಮಫಲಕವನ್ನು ಅಳವಡಿಸುವಂತೆ ಅವರು ಅಧಿಕಾರಿಗಳಿಗೆ ತಿಳಿಸಿದರು.ರಾಜ್ಯ ಸರ್ಕಾರವು ಅಪೌಷ್ಟಿಕ ಮಕ್ಕಳ ಆರೈಕೆಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಸರ್ಕಾರದ ಸವಲತ್ತು ಅರ್ಹ ಅಪೌಷ್ಟಿಕ ಮಕ್ಕಳಿಗೆ ತಲುಪುವಂತೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಅವರು ಹೇಳಿದರು.ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಪಿ.ಸಿ. ಕುಮಾರಸ್ವಾಮಿ ಮೊದಲಾದವರು ಇದ್ದರು.