ಜನರ ಸಮಸ್ಯೆಗಳನ್ನು ಅವರ ಮನೆಬಾಗಿಲಿಗೆ ತೆರಳಿ ಆಲಿಸಿ, ಸ್ಥಳದಲ್ಲೇ ಪರಿಹಾರ ಒದಗಿಸುವ ಪ್ರಾಮಾಣಿಕ ಪ್ರಯತ್ನವನ್ನು ಪ್ರಜಾಸೇವೆ ಕಾರ್ಯಕ್ರಮದ ಮೂಲಕ ಮಾಡಲಾಗುತ್ತಿದೆ ಎಂದು ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರು ಹೇಳಿದರು.

ಕನ್ನಡಪ್ರಭ ವಾರ್ತೆ ರಾಯಚೂರು

ಜನರ ಸಮಸ್ಯೆಗಳನ್ನು ಅವರ ಮನೆಬಾಗಿಲಿಗೆ ತೆರಳಿ ಆಲಿಸಿ, ಸ್ಥಳದಲ್ಲೇ ಪರಿಹಾರ ಒದಗಿಸುವ ಪ್ರಾಮಾಣಿಕ ಪ್ರಯತ್ನವನ್ನು ಪ್ರಜಾಸೇವೆ ಕಾರ್ಯಕ್ರಮದ ಮೂಲಕ ಮಾಡಲಾಗುತ್ತಿದೆ ಎಂದು ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರು ಹೇಳಿದರು.

ತಾಲೂಕಿನ ಯರಗೇರಾ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ರಾಯಚೂರು ತಾಲೂಕಾಡಳಿತ, ತಾಪಂ ಹಾಗೂ ವಿವಿಧ ಇಲಾಖೆಯಗಳ ಸಹಯೋಗ ದೊಂದಿಗೆ ಹಮ್ಮಿಕೊಂಡಿದ್ದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶನಿವಾರ ಮಾತನಾಡಿದ ಅವರು, ರಾಜ್ಯ ಸರ್ಕಾರದ ಮಹತ್ವಾ ಕಾಂಕ್ಷೆಯ ‘ಪ್ರಜಾ ಸೇವೆ ಆಂದೋಲನ’ ಕಾರ್ಯಕ್ರಮವನ್ನು ಯರಗೇರಾ ಹೋಬಳಿ ಮಟ್ಟದಲ್ಲಿ ಆಯೋಜಿಸಲಾಗಿದ್ದು, ಸರ್ಕಾರದ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಒಂದೇ ಸೂರಿನಡಿ ಸೇರಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸುತ್ತಿದ್ದಾರೆ. ಸಾರ್ವಜನಿಕರು ಸಲ್ಲಿಸುವ ಅರ್ಜಿಗಳಿಗೆ ಸ್ಥಳದಲ್ಲೇ ಇತ್ಯರ್ಥಪಡಿಸಲಾಗುತ್ತಿದೆ. ಹೆಚ್ಚುವರಿ ಪರಿಶೀಲನೆ ಅಗತ್ಯವಿರುವ ಅರ್ಜಿಗಳನ್ನು ಸಂಬಂಧಪಟ್ಟ ಕಚೇರಿಗಳಿಗೆ ರವಾನಿಸಿ, ಕೇವಲ 15 ದಿನಗಳ ಒಳಗಾಗಿ ಕಡ್ಡಾಯವಾಗಿ ಪರಿಹಾರ ಒದಗಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೋಪಾಲ ಗೆಣ್ಣೂರ ಮಾತನಾಡಿದರು. ಈ ವೇಳೆ ಯರಗೇರಾ ಗ್ರಾಮದ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಯಶೋಧ ಅವರಿಂದ ಭರತ ನಾಟ್ಯ ನೃತ್ಯದ ಪ್ರದರ್ಶನ ಮಾಡಿದರು. ಇದಕ್ಕೂ ಮುಂಚೆ ಶಾಲೆ ಆವರಣದಲ್ಲಿ ವಿವಿಧ ಇಲಾಖೆಗಳಿಂದ ಹಮ್ಮಿ ಕೊಳ್ಳಲಾಗಿದ್ದ ಮಳಿಗೆಗಳಿಗೆ ಶಾಸಕರು ಚಾಲನೆ ನೀಡಿ, ಮಳಿಗೆಗಳನ್ನು ವೀಕ್ಷಣೆ ಮಾಡಿದರು.

ನಂತರ ಅರಣ್ಯ ಇಲಾಖೆಯಿಂದ ಸಸಿ ನೆಡುವ ಕಾರ್ಯಕ್ರಮಕ್ಕೆ ಶಾಸಕರು ಶಾಲೆಯ ಆವರಣದಲ್ಲಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ಆಮವಾ ವಿವಿ ಸಿಂಡಿಕೇಟ್ ಸದಸ್ಯ ಚನ್ನಬಸವ ನಾಯಕ, ಜಿಪಂ ಯೋಜನಾ ನಿರ್ದೇಶಕ ಶರಣಬಸವ, ತಹಸೀಲ್ದಾರ್ ಸುರೇಶ್ ವರ್ಮಾ, ತಾಪಂ ಇಒ ಚಂದ್ರಶೇಖರ ಪವರ್ ಸೇರಿ ವಿವಿಧ ಇಲಾಖೆಯ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿ - ಸಿಬ್ಬಂದಿ ವರ್ಗದವರು, ಮುಖಂಡರು, ಯರಗೇರಾ ಹಾಗೂ ಸುತ್ತಮುತ್ತಲಿನ ಹಳ್ಳಿಯ ಗ್ರಾಮಸ್ಥರು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಜಿಲ್ಲಾಡಳಿತದಿಂದ 40 ಪ್ರಜಾ ಸೇವಾ ಕಾರ್ಯಕ್ರಮ:ಜಿಲ್ಲಾ ಆಡಳಿತದ ವತಿಯಿಂದ ಇದುವರೆಗೆ ಒಟ್ಟು 40 ‘ಪ್ರಜಾ ಸೇವಾ’ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಲಾಗಿದ್ದು, ಈವರೆಗೆ ಸ್ವೀಕೃತವಾದ ಅರ್ಜಿಗಳ ಪೈಕಿ ಸುಮಾರು 1,881 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದ್ದು, ವಿವಿಧ ಇಲಾಖೆಗಳಿಗೆ ಸಂಬಂಧಿಸಿದ 289 ಅರ್ಜಿಗಳನ್ನು ಆಯಾ ಇಲಾಖೆಗಳಿಗೆ ಕಳುಹಿಸಿ ಶೀಘ್ರ ಪರಿಹಾರಕ್ಕೆ ಸೂಚಿಸಲಾಗಿದೆ. ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಒಟ್ಟು 1,593 ಅರ್ಜಿಗಳು ಸ್ವೀಕೃತವಾಗಿದ್ದು, ಅದರಲ್ಲಿ 1,407 ಅರ್ಜಿಗಳನ್ನು ಈಗಾಗಲೇ ವಿಲೇವಾರಿ ಮಾಡಲಾಗಿದೆ. ಬಾಕಿ ಉಳಿದಿರುವ ಸುಮಾರು 186 ಅರ್ಜಿಗಳನ್ನು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ ಮಾಡಿ ಸಾರ್ವಜನಿಕರಿಗೆ ಸ್ಪಂದಿಸುವಂತೆ ತಹಸೀಲ್ದಾರ್ ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಸೂಚನೆ.