ಸಾರಾಂಶ
ಬಳ್ಳಾರಿ: ಎಲ್ಲ ಅರ್ಹ ಮತದಾರರಿಗೂ ಮತದಾನ ಮಾಡಲು ಅವಕಾಶವಿದ್ದು, ಅದನ್ನು ಕಳೆದುಕೊಳ್ಳದೇ ಮೇ 7ರಂದು ಲೋಕಸಭಾ ಚುನಾವಣೆಗೆ ತಪ್ಪದೇ ಮತ ಚಲಾಯಿಸಿ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಆದ ಎಸ್.ಎಚ್. ಪುಷ್ಪಾಂಜಲಿದೇವಿ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಹಾಗೂ ಜಿಲ್ಲಾ ವಕೀಲರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಲೋಕಸಭಾ ಚುನಾವಣೆಯಲ್ಲಿ ನಿರ್ಭೀತರಾಗಿ ನೈತಿಕ ಮತದಾನ ಮಾಡುವ ಕುರಿತು ಗುರುವಾರ ನಗರದ ತಾಳೂರು ರಸ್ತೆಯ ಹೊಸ ಜಿಲ್ಲಾ ನ್ಯಾಯಾಲಯದ ಸಂಕೀರ್ಣದ ಆವರಣದಲ್ಲಿ ಏರ್ಪಡಿಸಿದ್ದ ಪ್ರತಿಜ್ಞಾವಿಧಿ ಬೋಧನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮತದಾನ ಮಾಡುವುದು ಸಂವಿಧಾನದ ಬಹುಮುಖ್ಯ ಹಕ್ಕಾಗಿದ್ದು, 18 ವರ್ಷ ತುಂಬಿದ ಪ್ರತಿಯೊಬ್ಬ ಅರ್ಹ ಮತದಾರರು ಅವಕಾಶ ವಂಚಿತರಾಗದೇ ತಪ್ಪದೇ ಮತದಾನ ಮಾಡಬೇಕು. ಪ್ರಜಾಪ್ರಭುತ್ವಕ್ಕೆ ಉತ್ತಮ ನಾಯಕರನ್ನೇ ಆಯ್ಕೆ ಮಾಡಬೇಕು ಎಂದರು.ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಮಾತನಾಡಿ, ಮೇ 7 ರಂದು ಎಲ್ಲಾ ನಾಗರಿಕರು ತಪ್ಪದೇ ಮತ ಚಲಾವಣೆ ಮಾಡಿ, ಇತರರನ್ನು ಮತ ಚಲಾಯಿಸಲು ತಪ್ಪದೇ ಮತಗಟ್ಟೆಗೆ ಕರೆತನ್ನಿ ಎಂದು ಹೇಳಿದರು.ಮತದಾನ ದಿನದಂದು ಮತಗಟ್ಟೆ ಕೇಂದ್ರಗಳ ಬಳಿ ಶ್ಯಾಮಿಯಾನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ನೆರಳಿನ ವ್ಯವಸ್ಥೆ, ಶೌಚಾಲಯ ಸೇರಿದಂತೆ ಗರ್ಭಿಣಿಯರಿಗೆ, ಹಿರಿಯ ನಾಗರಿಕರಿಗೆ ಮತ್ತು ಅಂಗವಿಕಲರಿಗೆ ಪ್ರತ್ಯೇಕ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಈ ಬಾರಿ ಶೇಕಡವಾರು ಮತದಾನ ಹೆಚ್ಚಳವಾಗಲು ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಚುನಾವಣಾ ರಾಯಭಾರಿಯಂತೆ ಪಾಲ್ಗೊಂಡು ಸಾರ್ವಜನಿಕರಲ್ಲಿ ಮತದಾನ ಅರಿವು ಮೂಡಿಸುವ ಮೂಲಕ ಮತದಾನ ಪ್ರಮಾಣ ಹೆಚ್ಚಳಕ್ಕೆ ಸಹಕರಿಸಬೇಕು ಎಂದು ಕರೆ ನೀಡಿದರು.ಬಳಿಕ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಆದ ಎಸ್.ಹೆಚ್.ಪುಷ್ಪಾಂಜಲಿ ದೇವಿ ಅವರು, ಮತದಾರರ ಪ್ರತಿಜ್ಞಾವಿಧಿ ಭೋದಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್‍ನ ಮುಖ್ಯ ಯೋಜನಾಧಿಕಾರಿ ವಾಗೇಶ್ ಶಿವಾಚಾರ್ಯ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆ.ಎರ್ರಿಸ್ವಾಮಿ, ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ವಿವಿಧ ನ್ಯಾಯಾಲಯಗಳ ನ್ಯಾಯಾಧೀಶರು, ವಕೀಲರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.