ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯು ಮೇ.4ರಂದು ಅತ್ಯಂತ ಸುಗಮವಾಗಿ, ಪಾರದರ್ಶಕವಾಗಿ ಹಾಗೂ ಅತ್ಯಂತ ಸುರಕ್ಷಿತವಾಗಿ ನಡೆಸಲು ಎಲ್ಲಾ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕ್ರಮ ವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚಿಸಿದರ.

ಕನ್ನಡಪ್ರಭ ವಾರ್ತೆ ದಾವಣಗೆರೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯು ಮೇ.4ರಂದು ಅತ್ಯಂತ ಸುಗಮವಾಗಿ, ಪಾರದರ್ಶಕವಾಗಿ ಹಾಗೂ ಅತ್ಯಂತ ಸುರಕ್ಷಿತವಾಗಿ ನಡೆಸಲು ಎಲ್ಲಾ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕ್ರಮ ವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚಿಸಿದರ.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಗುರುವಾರ ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಕುರಿತಂತೆ ನಡೆದ ಅಧಿಕಾರಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮೇ.4ರಂದು ನಡೆಯುವ ಮತ ಎಣಿಕೆ ಕಾರ್ಯವು ಸುಗಮ, ಪಾರದರ್ಶಕ, ಸುರಕ್ಷಿತವಾಗಿ ನಡೆಯಲು ಎಲ್ಲಾ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದರು.

ಮತ ಎಣಿಕೆ ಕೇಂದ್ರದ ಸುತ್ತಮುತ್ತಲಿನ 100 ಮೀಟರ್ ಪ್ರದೇಶವನ್ನು ವಾಹನ ಮುಕ್ತ ವಲಯವಾಗಿ ಘೋಷಣೆ ಮಾಡಲಾಗಿದೆ. ಎಣಿಕೆ ಕೇಂದ್ರದ ಗೇಟ್‌ನಿಂದ 100 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಅಲ್ಲಿ ಸಿಆರ್‌ಪಿಸಿ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಕೇಂದ್ರದ ಸುತ್ತಲೂ ಮೂರು ಹಂತದ ಸಮನ್ವಯ ಭದ್ರತಾ ವ್ಯವಸ್ಥೆ ಅಳವಡಿಸಲಾಗುವುದು ಎಂದು ತಿಳಿಸಿದರು.

ಮುಂದಿನ ಕೆಲ ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಮತ ಎಣಿಕೆ ಕಾರ್ಯಕ್ಕೆ ಯಾವುದೇ ಅಡ್ಡಿಯಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಮತ ಎಣಿಕೆ ಕೇಂದ್ರದ ಮೇಲ್ಚಾವಣಿ ಮತ್ತು ವಿದ್ಯುತ್ ಸಂಪರ್ಕ ವ್ಯವಸ್ಥೆಯನ್ನು ಲೋಕೋಪಯೋಗಿ ಇಲಾಖೆ, ಬೆಸ್ಕಾಂ ಇಲಾಖೆ ಕಾರ್ಯ ಪಾಲಕ ಅಭಿಯಂತರರು ತಕ್ಷಣ ಮರು ಪರಿಶೀಲಿಸಬೇಕು. ಮಳೆಯಿಂದಾಗಿ ಎಣಿಕೆ ಕೇಂದ್ರದ ಒಳಗೆ ನೀರು ಸೋರದಂತೆ, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಪಿಡಬ್ಲ್ಯುಡಿ, ಬೆಸ್ಕಾಂನವರು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ, ಸುಸ್ಥಿತಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಿ ಎಂದರು.

ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಎಚ್.ಟಿ.ಶೇಖರ್, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ, ಉಪ ವಿಭಾಗಾಧಿಕಾರಿ, ದಕ್ಷಿಣ ಕ್ಷೇತ್ರದ ಚುನಾವಣಾಧಿಕಾರಿ ಸಂತೋಷಕುಮಾರ, ಪಾಲಿಕೆ ಆಯುಕ್ತೆ, ಜಿಪಂ ಉಪ ಕಾರ್ಯದರ್ಶಿ ಮಮತಾ ಹೊಸಗೌಡರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ, ಪಾಲಿಕೆ ಇಇ ಉದಯ್, ಬೆಸ್ಕಾಂ, ಕೆಎಸ್ಸಾರ್ಟಿಸಿ, ಅಗ್ನಿಶಾಮಕ ದಳ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

ಸಿಸಿ ಕ್ಯಾಮೆರಾ ಬ್ಲೈಂಡ್ ಸ್ಪಾಟ್ ಇಲ್ಲದಂತೆ ಕವರೇಜ್ ಇರಲಿ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯವು ಪಾರಕರ್ಶಕತೆ ಮತ್ತು ಭದ್ರತೆ ದೃಷ್ಟಿಯಿಂದ ಕೇಂದ್ರಾದ್ಯಂತ ಅಳವಡಿಸಲಾದ ಸಿಸಿ ಕ್ಯಾಮೆರಾಗಳ ಕಾರ್ಯಕ್ಷಮತೆ ಹಾಗೂ ದೃಶ್ಯೀಕರಣ ವ್ಯಾಪ್ತಿಯನ್ನು ಅಧಿಕಾರಿಗಳು ಪರಿಶೀಲಿಸಿಕೊಂಡು, ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಹೇಳಿದರು.

ಮತ ಎಣಿಕೆ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿ ಹಾಗೂ ಅಭ್ಯರ್ಥಿಗಳ ಏಜೆಂಟರ ಆರೋಗ್ಯ ದೃಷ್ಟಿಯಿಂದ ಆರೋಗ್ಯ ಇಲಾಖೆಯಿಂದ ಒಬ್ಬ ನುರಿತ ವೈದ್ಯರನ್ನೊಳಗೊಂಡ ವೈದ್ಯಕೀಯ ತಂಡ ನಿಯೋಜಿಸಬೇಕು ಎಂದರು.

ಮತ ಎಣಿಕೆಗೆ ಕೇಂದ್ರಕ್ಕೆ ಪೊಲೀಸ್ ಸರ್ಪಗಾವಲು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತ ಎಣಿಕಾ ಕೇಂದ್ರದ ಒಳಗೆ ಮತ್ತು ಹೊರಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ವ್ಯಾಪಕ ಭದ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಎಚ್.ಟಿ.ಶೇಖರ್ ಹೇಳಿದರು.

ಎಣಿಕಾ ಕೇಂದ್ರದ ಸುತ್ತಮುತ್ತ ಸಶಸ್ತ್ರ ಮೀಸಲು ಪಡೆ ಹಾಗೂ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಸಿಸಿ ಟಿವಿ ಕ್ಯಾಮೆರಾಗಳ ಮೂಲಕ ನಿರಂತರ ನಿಗಾ ವಹಿಸಲಾಗಿದೆ ಎಂದರು.