ಸಾರಾಂಶ
18 ವರ್ಷ ತುಂಬಿದ ಪ್ರತಿಯೊಬ್ಬರು ಮತದಾನದ ಪ್ರಕ್ರಿಯೆಯಲ್ಲಿ ಪಾಲ್ಗೊಂಡು, ಸುಭದ್ರ ಸಮಾಜ ನಿರ್ಮಾಣ ಮಾಡಲು ಮುಂದಾಗಬೇಕು ಎಂದು ತಹಸೀಲ್ದಾರ್ ಪ್ರಕಾಶ ಸಿಂದಗಿ ತಿಳಿಸಿದರು.
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ
18 ವರ್ಷ ತುಂಬಿದ ಪ್ರತಿಯೊಬ್ಬರು ಮತದಾನದ ಪ್ರಕ್ರಿಯೆಯಲ್ಲಿ ಪಾಲ್ಗೊಂಡು, ಸುಭದ್ರ ಸಮಾಜ ನಿರ್ಮಾಣ ಮಾಡಲು ಮುಂದಾಗಬೇಕು ಎಂದು ತಹಸೀಲ್ದಾರ್ ಪ್ರಕಾಶ ಸಿಂದಗಿ ತಿಳಿಸಿದರು.ಪಟ್ಟಣದ ಪ.ಪಂ ಆವರಣದಲ್ಲಿ ಶುಕ್ರವಾರ ತಾಲೂಕು ಆಡಳಿತ, ಪಪಂ ಹಾಗೂ ತಾಲೂಕು ಸ್ವೀಪ್ ಸಮಿತಿ ವತಿಯಿಂದ ನಡೆದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮತದಾನ ಪ್ರಕ್ರಿಯೆ ಕಡ್ಡಾಯವಾಗಿದೆ. ಸ್ವಯಂ ಪ್ರೇರಿತವಾಗಿ ಮತದಾನ ಮಾಡುವ ಮೂಲಕ ಉತ್ತಮ ವ್ಯಕ್ತಿಗಳನ್ನು ಆಯ್ಕೆ ಮಾಡಿ, ಉತ್ತಮ ಸಮಾಜ ನಿರ್ಮಾಣ ಮಾಡಬೇಕು. ಇತ್ತೀಚಿನ ದಿನಗಳಲ್ಲಿ ವಿದ್ಯಾವಂತ ಮತದಾರರೇ ಮತದಾನ ಪ್ರಕ್ರಿಯೆಯಿಂದ ದೂರವಿರುವುದು ವಿಷಾದನೀಯ ಸಂಗತಿಯಾಗಿದೆ ಎಂದು ಹೇಳಿದರು.
ತಾಪಂ ಇಒ ಸಂಜೀವಕುಮಾರ ಜುನ್ನೂರ ಅವರು ಮಾತನಾಡಿ, ನಿರ್ಭೀತಿ, ನಿರಾಂತಕವಾಗಿ ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೆ ಮತದಾನ ಮಾಡಬೇಕು. ಸುಭದ್ರ ಪ್ರಜಾಪ್ರಭುತ್ವಕ್ಕಾಗಿ ಚುನಾವಣಾ ಸಾಕ್ಷರತೆ ಅಗತ್ಯವಾಗಿದೆ. ಯುವ ಜನರು ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಭಾರತ ಒಂದು ಬೃಹತ್ ಪ್ರಜಾಪ್ರಭುತ್ವರಾಷ್ಟ್ರವಾಗಿದ್ದು, ದೇಶದಲ್ಲಿ ಅಧಿಕ ಯುವಕ,ಯುವತಿಯರಿಂದ ಯುವ ರಾಷ್ಟ್ರವೆಂದು ಪ್ರಸಿದ್ಧಿ ಪಡೆದುಕೊಳ್ಳುತ್ತಿರುವುದು ಸಂತಸದ ವಿಚಾರವಾಗಿದೆ. ಇದನ್ನರಿತು ಪ್ರತಿಯೊಬ್ಬರು ಮತದಾನದ ಪ್ರಕ್ರಿಯೆ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಲ್.ಡಿ ಮುಲ್ಲಾ ಅವರು ಮಾತನಾಡಿ, ಪಟ್ಟಣದ ಜನರು ಚುನಾವಣೆಯಲ್ಲಿ ಭಾಗವಹಿಸಿ ತಮ್ಮ ಹಕ್ಕು ಚಲಾಯಿಸಿ, ಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜೆಗಳಿಗೊಸ್ಕರ ರಚಿತವಾಗಿರುವ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸುವ ದೃಢ ನಿರ್ಧಾರ ಕೈಗೊಳ್ಳಬೇಕು ಎಂದರು.
ಪಟ್ಟಣ ಪಂಚಾಯಿತಿಯಿಂದ ಟಿಪ್ಪು ವೃತ್ತದವರೆಗೆ ಜಾಗೃತಿ ಅಭಿಯಾನದಲ್ಲಿ ಭಾಗವಹಿಸಿ ಎಲ್ಲಾ ಮತದಾನದ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು. ನಂತರ ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.