ಸಾರಾಂಶ
ಕನ್ನಡಪ್ರಭ ವಾರ್ತೆ ಬಳ್ಳಾರಿ
ಲೋಕಸಭಾ ಚುನಾವಣೆಯಲ್ಲಿ ಎಲ್ಲ ನಾಗರಿಕರು ಮೇ 7ರಂದು ತಪ್ಪದೇ ಮತ ಚಲಾಯಿಸುವ ಮೂಲಕ ಸದೃಢ ದೇಶ ನಿರ್ಮಾಣಕ್ಕೆ ಕೈ ಜೋಡಿಸಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ವೈ. ರಮೇಶ್ ಬಾಬು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಮತ್ತು ಜಿಲ್ಲಾ ಆರೋಗ್ಯ ಮತ್ತು ಕಲ್ಯಾಣ ಇಲಾಖೆ ಹಾಗೂ ಮಹಾನಗರ ಪಾಲಿಕೆ, ಬಂಡಿಹಟ್ಟಿಯ ನಗರ ಆರೋಗ್ಯ ಕೇಂದ್ರ ಇವರ ಆಶ್ರಯದಲ್ಲಿ ನಗರದ ಬಂಡಿಹಟ್ಟಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಳಿ ಹಮ್ಮಿಕೊಂಡಿದ್ದ “ಮತದಾನ ಜಾಗೃತಿ” ಅಭಿಯಾನ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.
ಮತದಾನದಲ್ಲಿ ಭಾಗವಹಿಸುವುದು ಎಲ್ಲ ಮತದಾರರ ಸಾಮಾಜಿಕ ಹೊಣೆಗಾರಿಕೆಯಾಗಿದೆ. ಅರ್ಹ ಮತದಾರರು ಆಸೆ-ಆಮೀಷಗಳಿಗೆ ಒಳಗಾಗದೆ ನಿರ್ಭೀತಿಯಿಂದ ಮತ ಚಲಾವಣೆ ಮಾಡಿ ಸುಭದ್ರ ಸರ್ಕಾರ ನಿರ್ಮಿಸುವಲ್ಲಿ ಪ್ರಮುಖ ಪಾತ್ರವಹಿಸಿ ಎಂದು ತಿಳಿಸಿದರು.ಜಾಗೃತಿ ಜಾಥಾ ಕಳೆದ ಚುನಾವಣೆಯಲ್ಲಿ ಕಡಿಮೆ ಮತದಾನವಾದ ಸ್ಥಳಗಳಲ್ಲಿ ಸಂಚರಿಸಿ ಸಾರ್ವಜನಿಕರಿಗೆ ಮತದಾನ ಕುರಿತು ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ರೋಗವಾಹಕ ಅಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಆರ್. ಅಬ್ದುಲ್ಲಾ, ಆಡಳಿತ ವೈದ್ಯಾಧಿಕಾರಿ ಡಾ. ಯಾಸ್ಮೀನ್, ಡಾ. ಕಾಶಿಪ್ರಸಾದ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್. ದಾಸಪ್ಪನವರ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಮ್ಮ ಉಪ್ಪಾರ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮುಸ್ತಾಕ್ ಅಹಮ್ಮದ್, ಆರೋಗ್ಯ ನಿರೀಕ್ಷಣಾಧಿಕಾರಿ ಮಹಾಲಿಂಗ, ವಿಜಯಲಕ್ಷ್ಮೀ, ಪಾರ್ವತಿ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ದಾನಕುಮಾರಿ, ಶಾರದಾ, ರಾಧಿಕಾ, ಮಮತಾಜ್, ಸುನೀತಾ, ನಾಗರತ್ನಾ, ಯೋಗಾನಂದ, ಗವಿಸಿದ್ದಪ್ಪ ಸೇರಿದಂತೆ ಆಶಾ ಕಾರ್ಯಕರ್ತೆಯರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.ಮತ ಜಾಗೃತಿಗೆ “ಮಹಿಳಾ ಕ್ರಿಕೆಟ್ ಪಂದ್ಯಾವಳಿ”
ಕನ್ನಡಪ್ರಭ ವಾರ್ತೆ ಬಳ್ಳಾರಿಮತದಾರರು ಕಡ್ಡಾಯವಾಗಿ ಮತದಾನ ಮಾಡುವಂತೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಮತ್ತು ತಾಲೂಕು ಆಡಳಿತ, ತಾಲೂಕು ಸ್ವೀಪ್ ಸಮಿತಿ ವತಿಯಿಂದ ನಗರದ ಕೋಟೆ ಪ್ರದೇಶದ ಸಂತಜಾನರ ಕಾಲೇಜು ಮೈದಾನದಲ್ಲಿ ಮಂಗಳವಾರ ಮಹಿಳಾ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿತ್ತು.ಪಂದ್ಯಾವಳಿಗೆ ಚಾಲನೆ ನೀಡಿದ ತಾಲೂಕು ಸ್ವೀಪ್ ನೋಡೆಲ್ ಅಧಿಕಾರಿ ಹಾಗೂ ತಾಪಂ ಇಒ ಮಡಗಿನ ಬಸಪ್ಪ ಅವರು ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು, ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಇದ್ದಂತೆ. ಮತದಾರರು ಕಡ್ಡಾಯವಾಗಿ ಮತ ಚಲಾಯಿಸಿ ಪ್ರಜಾಪ್ರಭುತ್ವ ಸುಭದ್ರಗೊಳಿಸಬೇಕು. ಗ್ರಾಮೀಣ ಪ್ರದೇಶದಲ್ಲಿ ಕಡಿಮೆ ಪ್ರಮಾಣದ ಮತದಾನ ಆಗುತ್ತಿದ್ದು, ತಪ್ಪದೆ ಮತ ಚಲಾಯಿಸಬೇಕು. ಕ್ರಿಕೆಟ್ ಆಡುವ ಮೂಲಕ ವಿನೂತನವಾಗಿ ಮತ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ಮಹಮ್ಮದ್ ಗೌಸ್. ಆರ್ ಮಾತನಾಡಿ, ಎಲ್ಲ ಕ್ರೀಡಾಪಟುಗಳು ತಪ್ಪದೇ ಮತ ಚಲಾಯಿಸಬೇಕು ಹಾಗೂ ತಮ್ಮ ಸುತ್ತಮುತ್ತಲಿನ ಎಲ್ಲ ಮತದಾರರನ್ನು ಚುನಾವಣೆಯಲ್ಲಿ ಪಾಲ್ಗೊಂಡು ಮತ ಚಲಾಯಿಸುವಂತೆ ಪ್ರೇರೇಪಿಸಬೇಕೆಂದು ತಿಳಿಸಿದರು.ಈ ಸಂದರ್ಭದಲ್ಲಿ ತಾಪಂ ಸಹಾಯಕ ಲೆಕ್ಕಾಧಿಕಾರಿ ಶರಣಪ್ಪ, ತಾಪಂ ವ್ಯವಸ್ಥಾಪಕ ಬಚ್ಚಲಪ್ಪ ವಿ.ಕೆ. ಸೇರಿದಂತೆ ಬಳ್ಳಾರಿ ಮತ್ತು ಕುರುಗೋಡು ಪೂರ್ವ, ಪಶ್ಚಿಮ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಬಳ್ಳಾರಿ ತಾಲೂಕು ದೈಹಿಕ ಶಿಕ್ಷಣಾಧಿಕಾರಿಗಳು ಹಾಗೂ ದೈಹಿಕ ಶಿಕ್ಷಕರು ಉಪಸ್ಥಿತರಿದ್ದರು.ಮಹಿಳಾ ಕ್ರಿಕೆಟ್ ಪಂದ್ಯಾವಳಿಯಲ್ಲಿ ವಿವಿಧ ಗ್ರಾಮ ಪಂಚಾಯತಿಯ ಮಹಿಳಾ ಆಟಗಾರರು, ಸ್ಥಳೀಯ ಮಹಿಳೆಯರು ಭಾಗವಹಿಸಿದ್ದರು.