ಪ್ರಜಾಪ್ರಭುತ್ವ ಗೆಲುವಿಗೆ ಮತ ಹಾಕಿ: ಟಿ.ವೈ. ದಾಸನಕೊಪ್ಪ

| Published : Apr 27 2024, 01:16 AM IST

ಸಾರಾಂಶ

ಲೋಕಸಭಾ ಚುನಾವಣೆಯ ಮತದಾನ ಜಾಗೃತಿ ಅಂಗವಾಗಿ “ಸ್ವೀಪ್ ಕಪ್” ತಾಲೂಕು ಮಟ್ಟದ ಮಹಿಳೆಯರ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಲಾಯಿತು.

ಮುಂಡಗೋಡ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಅತ್ಯಂತ ಮಹತ್ವದ್ದಾಗಿದೆ. ಲೋಕಸಭೆ ಚುನಾವಣೆಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರರು ತಪ್ಪದೇ ಮತ ಚಲಾಯಿಸಬೇಕು ಎಂದು ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ತಾಪಂ ಕಾರ್ಯನಿರ್ವಹಣಾಧಿಕಾರಿ ಟಿ.ವೈ. ದಾಸನಕೊಪ್ಪ ಮನವಿ ಮಾಡಿದರು.

ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲೂಕು ಆಡಳಿತ ಮತ್ತು ತಾಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ, ತಾಲೂಕು ಸ್ವೀಪ್ ಸಮಿತಿ ಮತ್ತು ಸರ್ಕಾರಿ ಪ್ರಥಮದರ್ಜೆ ಮಹಾವಿದ್ಯಾಲಯದ ಆಶ್ರಯದಲ್ಲಿ ಲೋಕಸಭಾ ಚುನಾವಣೆಯ ಮತದಾನ ಜಾಗೃತಿ ಅಂಗವಾಗಿ “ಸ್ವೀಪ್ ಕಪ್” ತಾಲೂಕು ಮಟ್ಟದ ಮಹಿಳೆಯರ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು.

ಮುಂಡಗೋಡ ಪಟ್ಟಣ ಹಾಗೂ ಗ್ರಾಮೀಣ ಭಾಗಗಳಲ್ಲಿ ಹಲವಾರು ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಅದೇ ರೀತಿ ಇಂದು ಸಾರ್ವಜನಿಕರಲ್ಲಿ ಅದರಲ್ಲೂ ವಿಶೇಷವಾಗಿ ಯುವತಿಯರಲ್ಲಿ, ಮಹಿಳೆಯರಲ್ಲಿ ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸಲು ಮಹಿಳೆಯರ ಕ್ರಿಕೆಟ್ ಪಂದ್ಯಾವಳಿಯನ್ನು ವಿನೂತನ ಕಾರ್ಯಕ್ರಮ ಆಯೋಜಿಸಲಾಗಿದೆ. ಎಲ್ಲರೂ ಕ್ರೀಡಾಸ್ಫೂರ್ತಿಯಿಂದ ಭಾಗವಹಿಸಿ ಪಂದ್ಯಾವಳಿಯನ್ನು ಯಶಸ್ವಿಗೊಳಿಸಿ ಮೇ ೭ರಂದು ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದರು.

ಪಂದ್ಯಾವಳಿಯಲ್ಲಿ ವಿಜೇತರಾದ “ಪ್ರಥಮದರ್ಜೆ ಮಹಾವಿದ್ಯಾಲಯದ ವಿದ್ಯಾರ್ಥಿನಿಯರ ತಂಡ” ಹಾಗೂ ರನ್ನರ್ ಅಪ್ ಆಗಿ “ತಾಲೂಕು ಪಂಚಾಯತಿಯ ಮಹಿಳೆಯರ ತಂಡ”ಗಳಿಗೆ ಆಕರ್ಷಕ ಟ್ರೋಫಿಗಳನ್ನು ನೀಡಲಾಯಿತು. ಅತ್ಯುತ್ತಮ ಬ್ಯಾಟುಗಾರ್ತಿ- ಮಮತಾ, ಅತ್ಯುತ್ತಮ ಬೌಲರ್- ಅಕ್ಷತಾ, ಮತ್ತು ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಭಾಗೀರತಿ ಅವರು ಪಡೆದುಕೊಂಡರು.

ಮಹಾವಿದ್ಯಾಲಯದ ಪ್ರಾಚಾರ್ಯ ಪ್ರಸನ್ನ ಸಿಂಗ್ ಹಜೇರಿ ಅವರು ಮತದಾರರ ಪ್ರತಿಜ್ಞಾವಿಧಿ ಬೋಧಿಸಿದರು, ಅಧ್ಯಾಪಕರಾದ ನಿಸಾರ ಖಾನ್ ಕಾರ್ಯಕ್ರಮ ನಿರೂಪಿಸಿದರು.

ಪಂದ್ಯಾವಳಿಯಲ್ಲಿ ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕರಾದ ಕೃಷ್ಣ ಕುಳ್ಳೂರ, ಪಂಚಾಯತ ರಾಜ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಪ್ರದೀಪ ಭಟ್ಟ, ಅಕ್ಷರ ದಾಸೋಹ ನಿರ್ದೇಶಕ ರಫೀಕ ಮೀರಾನಾಯಕ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ರಾಜೇಶ್ವರಿ ಕದಂ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕ ಕರಿಯಪ್ಪ, ಸಹಾಯಕ(ಗ್ರಾ.ಉ.) ಸೋಮನಿಂಗಪ್ಪ ಛಬ್ಬಿ, ಪಟ್ಟಣ ಪಂಚಾಯಿತಿ ಅಧಿಕಾರಿ ಕುಮಾರ ನಾಯಕ ಮುಂತಾದವರು ಇದ್ದರು.