ಮತದಾನ ಮಾಡಿ, ಬಲಿಷ್ಠ ದೇಶ ಕಟ್ಟಲು ಕೈಜೋಡಿಸಿ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ

| Published : Apr 30 2024, 02:12 AM IST

ಮತದಾನ ಮಾಡಿ, ಬಲಿಷ್ಠ ದೇಶ ಕಟ್ಟಲು ಕೈಜೋಡಿಸಿ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ
Share this Article
  • FB
  • TW
  • Linkdin
  • Email

ಸಾರಾಂಶ

ಮತದಾನದಲ್ಲಿ ಜನರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ಮೂಲಕ ಮತದಾನ ಪ್ರಮಾಣ ಹೆಚ್ಚಿಸುವ ಗುರಿಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ‘ನಮ್ಮ ನಡೆ ಮತಗಟ್ಟೆಯ ಕಡೆ’ ವಿನೂತನ ಕಾರ್ಯಕ್ರಮವಾಗಿದೆ.

ಬಳ್ಳಾರಿ: ಪ್ರತಿಯೊಬ್ಬರೂ ತಮ್ಮ ಮತದ ಮೌಲ್ಯ ಅರಿತು ಪ್ರಜಾಪ್ರಭುತ್ವದ ಹಬ್ಬದಲ್ಲಿ ಪಾಲ್ಗೊಂಡು ಮತದಾನ ಮಾಡುವ ಮೂಲಕ ಸದೃಢ ಹಾಗೂ ಬಲಿಷ್ಠ ದೇಶ ಕಟ್ಟುವಲ್ಲಿ ಕೈಜೋಡಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಕರೆ ನೀಡಿದರು.

ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಸಂಯುಕ್ತಾಶ್ರಯದಲ್ಲಿ ಮತದಾನ ಜಾಗೃತಿ ಅಂಗವಾಗಿ ‘ನಮ್ಮ ನಡೆ ಮತಗಟ್ಟೆ ಕಡೆ’ ಕಾರ್ಯಕ್ರಮದಡಿ ನಗರದ ಶ್ರೀಮತಿ ಸರಳಾದೇವಿ ಸತಿಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆಯ ಕಾಲೇಜು ಆವರಣದಲ್ಲಿ ಧ್ವಜಾರೋಹಣ ಮೂಲಕ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮತದಾನದಲ್ಲಿ ಜನರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ಮೂಲಕ ಮತದಾನ ಪ್ರಮಾಣ ಹೆಚ್ಚಿಸುವ ಗುರಿಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ‘ನಮ್ಮ ನಡೆ ಮತಗಟ್ಟೆಯ ಕಡೆ’ ವಿನೂತನ ಕಾರ್ಯಕ್ರಮವಾಗಿದೆ ಎಂದರು.

ಭಾರತ ಚುನಾವಣಾ ಆಯೋಗವು ನೈತಿಕ ಚುನಾವಣೆ ನಡೆಸಲು ಮತದಾರರಿಗಾಗಿ ಹೊರ ತಂದಿರುವ ಸಿವಿಜಿಲ್, ಕೆವೈಸಿ, ಚುನಾವಣಾ, ಸಕ್ಷಮ್ ಆಪ್‍ಗಳು ಸೇರಿದಂತೆ ಸಹಾಯವಾಣಿ 1950 ಬಗ್ಗೆ ಜಾಗೃತಿ ಹೊಂದಬೇಕು ಎಂದರು.

ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಮಾತನಾಡಿ, ಬಳ್ಳಾರಿ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಮೇ 7 ರಂದು ಮತದಾನ ನಡೆಯಲಿದ್ದು, ‘ನಮ್ಮ ನಡೆ ಮತಗಟ್ಟೆಯ ಕಡೆ’ಯ ಮೂಲಕ ಪ್ರತಿ ಮತಗಟ್ಟೆಯನ್ನು ಜನರಿಗೆ ಪರಿಚಯಿಸುವುದು ಕಾರ್ಯಕ್ರಮದ ಉದ್ದೇಶವಾಗಿದ್ದು, ಮತದಾರರನ್ನು ಸೆಳೆಯಲು ಜಿಲ್ಲಾ ಸ್ವೀಪ್ ಸಮಿತಿಯು ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಹೇಳಿದರು.

ನೈತಿಕ ಚುನಾವಣೆಯ ಕುರಿತು ಸ್ವೀಪ್ ಚಟುವಟಿಕೆಗಳ ಮೂಲಕ ಜಾಗೃತಿ ಅಭಿಯಾನ, ಮತದಾರರಿಗೆ ಭಿತ್ತಿಪತ್ರಗಳ ವಿತರಣೆ, ಎಲ್.ಇ.ಡಿ ವಾಹನಗಳ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲೆಯ ಎಲ್ಲಾ ತಾಲೂಕು ಮತ್ತು ಗ್ರಾಪಂ ವ್ಯಾಪ್ತಿಯಲ್ಲಿ ‘ನಮ್ಮ ನಡೆ ಮತಗಟ್ಟೆಯ ಕಡೆ’ ಕಾರ್ಯಕ್ರಮವು ಮತಗಟ್ಟೆ ಹಂತದಲ್ಲಿ ಮತಗಟ್ಟೆ ಅಧಿಕಾರಿಗಳ ನೇತೃತ್ವದಲ್ಲಿ, ಗ್ರಾಮ ಪಂಚಾಯತ್ ಮಟ್ಟದಲ್ಲಿ ಪಿಡಿಓ ನೇತೃತ್ವದಲ್ಲಿ, ತಾಲ್ಲೂಕು ಮಟ್ಟದಲ್ಲಿ ಆಯಾ ಕ್ಷೇತ್ರ ಚುನಾವಣಾಧಿಕಾರಿಗಳ ನೇತೃತ್ವದಲ್ಲಿ ಏಕಕಾಲದಲ್ಲಿ ನಡೆಸಲಾಗುತ್ತಿದೆ ಎಂದು ಹೇಳಿದರು.

ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಗ್ರಾಪಂ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಸ್ವ-ಸಹಾಯ ಸಂಘಗಳ ಸದಸ್ಯರು ಹಾಜರಿದ್ದರು.