2002ರಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ನಡೆದಿದ್ದು, ಇದೀಗ ಮತ್ತೊಮ್ಮೆ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿದೆ.
ಕಂಪ್ಲಿ: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕವಾಗಿದ್ದು, ಅರ್ಹ ಮತದಾರರೆಲ್ಲರಿಗೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಳ್ಳಲು ಅವಕಾಶ ಕಲ್ಪಿಸುವ ಉದ್ದೇಶದಿಂದ ಈ ಕಾರ್ಯ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ. ನಾಗೇಂದ್ರಪ್ರಸಾದ್ ಹೇಳಿದರು.
ಪಟ್ಟಣದ ಡಿಪ್ಲೊಮಾ ಕಾಲೇಜಿನಲ್ಲಿ ಗುರುವಾರ ಆಯೋಜಿಸಿದ್ದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಕುರಿತು ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು. 2002ರಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ನಡೆದಿದ್ದು, ಇದೀಗ ಮತ್ತೊಮ್ಮೆ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿದೆ. 2025ರ ಮತದಾರರ ಪಟ್ಟಿಯಲ್ಲಿರುವ ಪ್ರತಿಯೊಬ್ಬ ಮತದಾರರ ಮಾಹಿತಿಯನ್ನು ಪರಿಶೀಲಿಸಲಾಗುವುದು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಮನೆ ಮನೆಗೆ ತೆರಳಿ ಸರಳ ಮಾಹಿತಿ ಸಂಗ್ರಹಿಸಲಿದ್ದು, ಅಗತ್ಯ ದಾಖಲೆಗಳನ್ನು ಪಡೆದು ಪರಿಶೀಲನೆ ನಡೆಸಲಿದ್ದಾರೆ ಎಂದು ಹೇಳಿದರು.2002ರ ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೂ ಅರ್ಹರಾಗಿರುವ ನಾಗರಿಕರ ಹೆಸರನ್ನು ಕರಡು ಪಟ್ಟಿಯಲ್ಲಿ ಸೇರಿಸಲು ಅವಕಾಶ ನೀಡಲಾಗುತ್ತದೆ. ಈ ಹಿಂದೆ ಮ್ಯಾಪಿಂಗ್ ಆಗದ ಮತದಾರರಿಗೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಯಾವುದೇ ಅರ್ಹ ಮತದಾರ ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಕರಡು ಪಟ್ಟಿಯಲ್ಲಿ ಹೆಸರು ಪ್ರಕಟವಾಗದಿದ್ದರೂ ಮತದಾರರು ಅರ್ಜಿ ಸಲ್ಲಿಸಲು ಹಾಗೂ ಆಕ್ಷೇಪಣೆ ದಾಖಲಿಸಲು ಮತ್ತೊಂದು ಅವಕಾಶ ದೊರೆಯಲಿದೆ. 2026ರ ಅಕ್ಟೋಬರ್ 1ರೊಳಗೆ 18 ವರ್ಷ ಪೂರ್ಣಗೊಳಿಸಿರುವ ಹೊಸ ಮತದಾರರು ಸೇರ್ಪಡೆಗಾಗಿ ಅರ್ಜಿ ಸಲ್ಲಿಸಬಹುದು. ಅಲ್ಲದೇ ಸ್ಥಳಾಂತರ, ವಿಳಾಸ ಬದಲಾವಣೆ, ಹೆಸರು ತಿದ್ದುಪಡಿ ಅಥವಾ ಹೆಸರು ಕೈಬಿಡುವಂತಹ ಪ್ರಕ್ರಿಯೆಗಳಿಗೂ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ವಿವರಿಸಿದರು.ಯಾವುದೇ ಕಾರಣದಿಂದ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಲ್ಲಿ ಮೊದಲ ಮೇಲ್ಮನವಿಯನ್ನು ಜಿಲ್ಲಾ ಚುನಾವಣಾಧಿಕಾರಿಗೆ ಹಾಗೂ ಎರಡನೇ ಮೇಲ್ಮನವಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ (ಸಿಇಒ) ಸಲ್ಲಿಸಲು ಅವಕಾಶವಿದೆ. ಆದ್ದರಿಂದ ಮತದಾರರು ಯಾವುದೇ ಆತಂಕಕ್ಕೆ ಒಳಗಾಗಬಾರದು ಎಂದರು.
ಕೆಎಂಇಆರ್‌ಸಿ ಅನುದಾನದ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ, ಕಂಪ್ಲಿ, ಕುರುಗೋಡು ಹಾಗೂ ಸಿರುಗುಪ್ಪ ತಾಲೂಕುಗಳಿಗೆ ಮೂಲಸೌಕರ್ಯ ಅಭಿವೃದ್ಧಿಗಾಗಿ ವಿಶೇಷ ಅವಕಾಶ ದೊರೆತಿದೆ ಎಂದು ಹೇಳಿದರು.ಶಾಲೆಗಳು, ಅಂಗನವಾಡಿಗಳು, ಸರ್ಕಾರಿ ಆಸ್ಪತ್ರೆಗಳು, ಗ್ರಂಥಾಲಯಗಳ ದುರಸ್ತಿ ಹಾಗೂ ಹೊಸ ಕಟ್ಟಡಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಮೂಲಕ ₹250ರಿಂದ ₹300 ಕೋಟಿಗಳ ಪ್ರಸ್ತಾವನೆಗಳನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕ್ಷೇತ್ರ ಚುನಾವಣಾ ನೋಂದಣಾಧಿಕಾರಿ ಕೆ.ಆರ್. ದೇವರಾಜ್, ತಹಸೀಲ್ದಾರ್ ಜೂಗಲ ಮಂಜುನಾಯಕ, ತಾಲೂಕು ತರಬೇತಿದಾರ ಮುದುಕಪ್ಪ ನೆಲಜೇರಿ, ಮುಖ್ಯಾಧಿಕಾರಿ ಬಿ. ಮಲ್ಲಿಕಾರ್ಜುನ, ಪ್ರಶಾಂತ್, ಆರ್‌ಐ ವೈ.ಎಂ. ಜಗದೀಶ ಉಪಸ್ಥಿತರಿದ್ದರು.