ಸಾರಾಂಶ
ಕರ್ನಾಟಕ ವಿಧಾನಪರಿಷತ್ತಿನ ಪಶ್ಚಿಮ ಪದವೀಧರ ಮತಕ್ಷೇತ್ರಕ್ಕೆ 2026ರಲ್ಲಿ ಚುನಾವಣೆ ನಡೆಯಲಿದ್ದು, ಈ ಕುರಿತು ಮತದಾರರ ಪಟ್ಟಿ ತಯಾರಿಕೆಗೆ ಸಿದ್ಧತೆ ಪ್ರಾರಂಭವಾಗಿದೆ.
ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆಕನ್ನಡಪ್ರಭ ವಾರ್ತೆ ಕಾರವಾರ
ಕರ್ನಾಟಕ ವಿಧಾನಪರಿಷತ್ತಿನ ಪಶ್ಚಿಮ ಪದವೀಧರ ಮತಕ್ಷೇತ್ರಕ್ಕೆ 2026ರಲ್ಲಿ ಚುನಾವಣೆ ನಡೆಯಲಿದ್ದು, ಈ ಕುರಿತು ಮತದಾರರ ಪಟ್ಟಿ ತಯಾರಿಕೆಗೆ ಸಿದ್ಧತೆ ಪ್ರಾರಂಭವಾಗಿದ್ದು, ಅರ್ಹ ಮತದಾರರು ಸೇರ್ಪಡೆಗೆ ಇದೀಗ ಅವಕಾಶ ಕಲ್ಪಿಸಲಾಗಿದೆ. ಮತದಾರರ ಪಟ್ಟಿಯು ಕ್ರಮಬದ್ಧವಾಗಿ ಮತ್ತು ನ್ಯಾಯಬದ್ಧವಾಗಿ ತಯಾರಿಸಲು ರಾಜಕೀಯ ಪಕ್ಷಗಳು, ಸಾರ್ವಜನಿಕರು ಸಹಕಾರ ನೀಡಬೇಕೆಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ತಿಳಿಸಿದರು.ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮತದಾರರ ಪಟ್ಟಿ ತಯಾರಿಕೆ ಕುರಿತು ಸೂಚನೆಗಳ ಪ್ರತಿಯನ್ನು ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ನೀಡಲಾಗಿದೆ. ಈ ಕುರಿತು ಅರ್ಹ ಪದವೀಧರ ಮತದಾರರಲ್ಲಿ ಜಾಗೃತಿ ಮೂಡಿಸಿ ನಿಯಮಾನುಸಾರ ಮತದಾರರ ಪಟ್ಟಿಗೆ ಸೇರ್ಪಡೆ ಆಗುವಂತೆ ಮಾಹಿತಿ ನೀಡಬೇಕು, ಮತದಾರರ ಪಟ್ಟಿ ಸೇರ್ಪಡೆಗೆ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸುವ ನಮೂನೆಯನ್ನು ಜಿಲ್ಲೆಯ ಎಲ್ಲಾ ತಹಶೀಲ್ದಾರ ಕಚೇರಿಗಳಲ್ಲಿ ಲಭ್ಯವಿದೆ ಎಂದರು.ಮತದಾರರ ಪಟ್ಟಿಗೆ ಸೇರ್ಪಡೆಯಾಗುವ ನಮೂನೆ-18 ರ ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನ ನ. 6 ಆಗಿದ್ದು, ಕರಡು ಮತದಾರರ ಪಟ್ಟಿಯನ್ನು ನ. 25ರಂದು ಪ್ರಕಟಿಸಿಲಾಗುವುದು, ಡಿ. 10 ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದ್ದು, ಡಿ. 30ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದರು.
ಭಾರತದ ಪ್ರಜೆಯಾಗಿರುವ, ಆಯಾ ಮತ ಕ್ಷೇತ್ರದೊಳಗಡೆ ಸಾಮಾನ್ಯವಾಗಿ ವಾಸಿಸುತ್ತಿರುವ ಹಾಗೂ 1 ನೇ ನವಂಬರ್ 2025ಕ್ಕೆ ಮುಂಚೆ (ಅರ್ಹತಾ ದಿನಾಂಕ) ಕನಿಷ್ಠ 3 ವರ್ಷಗಳಷ್ಟು ಮೊದಲು ಭಾರತದಲ್ಲಿರುವ ಯಾವುದಾದರೊಂದು ವಿಶ್ವವಿದ್ಯಾಲಯದ ಪದವೀಧರನಾಗಿರುವ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವ ಪ್ರತಿಯೊಬ್ಬ ವ್ಯಕ್ತಿಯೂ ಮತದಾರರ ಪಟ್ಟಿಯಲ್ಲಿ ತನ್ನ ಹೆಸರನ್ನು ಸೇರಿಸಲು ಅರ್ಹರಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕುಗಳ ತಹಶೀಲ್ದಾರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಹಾಗೂ ಜಿಲ್ಲೆಯ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಇದ್ದರು.