ಮತದಾರರ ದಿನಾಚರಣೆ: ನೂರರಷ್ಟು ಮತದಾನ- ಉಡುಪಿ ಜಿಲ್ಲೆಯ ವಾಗ್ದಾನ

| Published : Jan 26 2024, 01:49 AM IST

ಮತದಾರರ ದಿನಾಚರಣೆ: ನೂರರಷ್ಟು ಮತದಾನ- ಉಡುಪಿ ಜಿಲ್ಲೆಯ ವಾಗ್ದಾನ
Share this Article
  • FB
  • TW
  • Linkdin
  • Email

ಸಾರಾಂಶ

ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಈ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ಉದ್ಘಾಟಿಸಿದರು. ಬಳಿಕ ಮಾತನಾಡಿ ಮತದಾನದ ಬಗ್ಗೆ ಮಾಹಿತಿ ನೀಡಿದರು.

ಕನ್ನಡಪ್ರಭ ವಾರ್ತೆ ಉಡುಪಿ

ನೂರರಷ್ಟು ಮತದಾನ, ಉಡುಪಿ ಜಿಲ್ಲೆಯ ವಾಗ್ದಾನ - ಇದು ನಗರದ ಅಜ್ಜರಕಾಡಿನ ಪುರಭವನದಲ್ಲಿ ಗುರುವಾರ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾಡಲಾದ ಘೋಷಣೆ.

ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಈ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ಉದ್ಘಾಟಿಸಿದರು.

ಮತದಾರರು ವಿವೇಚನೆಯಿಂದ ಯಾವುದೇ ಆಮಿಷಗಳಿಗೆ ಒಳಗಾಗದೆ, ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದರೆ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಯಾಗಿ ತಳವೂರಲು ಚುನಾವಣೆ ಅತ್ಯಗತ್ಯ. ಅರ್ಥಪೂರ್ಣವಾದ ಪಾರದರ್ಶಕ ಸರ್ಕಾರ ಜಾರಿಗೆ ತರುವ ಜವಾಬ್ದಾರಿ ನಮ್ಮ ಕೈಯಲ್ಲಿದೆ ಎಂದರು. ನೂತನ ಮತದಾರರಿಗೆ ಸಾಂಕೇತಿಕವಾಗಿ ಮತದಾರರ ಚೀಟಿಯನ್ನು ಹಸ್ತಾಂತರಿಸಲಾಯಿತು.

ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ., ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್., ಎಎಸ್‌ಪಿ ಸಿದ್ಧಲಿಂಗಪ್ಪ ಉಪಸ್ಥಿತರಿದ್ದರು.

ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಜಿಲ್ಲಾ ವತಿಯಿಂದ ನೇಮಿಸಲಾದ ರಾಯಭಾರಿಗಳಾದ ರಾಷ್ಟ್ರೀಯ ಕ್ರೀಡಾಪಟು ರೋಹಿತ್ ಕುಮಾರ್ ಶೆಟ್ಟಿ, ಭರತನಾಟ್ಯ ಮಾನಸಿ ಸುಧೀರ್, ಆರ್.ಜೆ. ಕಾಜಲ್, ಕ್ರಿಕೆಟ್ ಆಟಗಾರ ಪೃಥ್ವಿರಾಜ್ ಶೆಟ್ಟಿ ಹುಂಚಣಿ ಅವರು ಉಪಸ್ಥಿತರಿದ್ದರು.

ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್ .ಸ್ವಾಗತಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ನಿರೂಪಿಸಿದರು.

ಸಭಾ ಕಾರ್ಯಕ್ರಮಕ್ಕೆ ಮುನ್ನ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಸರ್ವೀಸ್ ಬಸ್ ನಿಲ್ದಾಣದಿಂದ ನಗರದ ಪ್ರಮುಖ ಬೀದಿಗಳ ಮೂಲಕ ಪುರಭವನದವರೆಗೆ 2000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಜಾಥಾ ನಡೆಸಿದರು.