ಸಾರಾಂಶ
ಬಳ್ಳಾರಿ: ಲೋಕಸಭಾ ಚುನಾವಣೆ ಕರ್ತವ್ಯ ನಿಮಿತ್ತ ಕರ್ತವ್ಯನಿರತ ಅಧಿಕಾರಿ, ಸಿಬ್ಬಂದಿಗೆ ಮೇ 1ರಿಂದ 6ರವರೆಗೆ ಬೆಳಗ್ಗೆ 9ರಿಂದ ಸಂಜೆ 5ರವರೆಗೆ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ. ಇದಕ್ಕಾಗಿ ನಗರದ ರೈಲ್ವೆ ನಿಲ್ದಾಣ ಎದುರಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಗಾಂಧಿ ಭವನದಲ್ಲಿ ಫೆಸಿಲಿಟೇಶನ್ ಸೆಂಟರ್ ಸ್ಥಾಪಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.
ಚುನಾವಣೆ ನಿಮಿತ್ತ ಮೇ 7ರಂದು ಮತದಾನ ನಡೆಯಲಿದೆ. ಅಂದು ಚುನಾವಣಾ ಕರ್ತವ್ಯನಿರತರಾಗುವ ಅಧಿಕಾರಿ, ಸಿಬ್ಬಂದಿ ಮತದಾನದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಚುನಾವಣಾ ಆಯೋಗವು ಮತದಾನ ಮಾಡಲು ವಿಶೇಷ ಅವಕಾಶ ಕಲ್ಪಿಸಿದೆ.ಮತದಾನ ದಿನದಂದು ಚುನಾವಣಾ ಕರ್ತವ್ಯದಲ್ಲಿ ನಿರತರಾಗುವ ಪೊಲೀಸ್, ಆರೋಗ್ಯ ಇಲಾಖೆಗಳ ಅಧಿಕಾರಿ, ಸಿಬ್ಬಂದಿ, ಸ್ವಚ್ಛತಾ ಕಾರ್ಯದಲ್ಲಿ ನಿರತರಾಗುವವರು, ಇಲಾಖಾ ವಾಹನ ಚಾಲಕರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ತಮ್ಮ ಮತವನ್ನು ಮೇ 1ರಿಂದ 6ರವರೆಗೆ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.
ಅಂತಹ ಮತದಾರರನ್ನು ಈಗಾಗಲೇ ಗುರುತಿಸಲಾಗಿದೆ. ಬೇರೆ ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಮತವಿದ್ದು, ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯದಲ್ಲಿ ನಿರತರಾಗಿರುವಂತಹ ಅಧಿಕಾರಿ, ಸಿಬ್ಬಂದಿಗೆ ಈ ವ್ಯವಸ್ಥೆ ಅನುಕೂಲಕರವಾಗಿದೆ. ಮತದಾನ ದಿನದಂದು ಕರ್ತವ್ಯ ನಿರತರಾಗುವ ಅಧಿಕಾರಿ, ಸಿಬ್ಬಂದಿ ತಮ್ಮ ಮತವನ್ನು ತರಬೇತಿ ನಡೆಯುವ ಸ್ಥಳದಲ್ಲಿಯೇ ಮತ ಚಲಾಯಿಸಲು ಕೂಡ ವ್ಯವಸ್ಥೆ ಮಾಡಿಕೊಡಲಾಗಿದೆ ಎಂದರು.ಪ್ರತಿಯೊಂದು ಮತವೂ ಅಮೂಲ್ಯ. ಮತದಾನ ದಿನದಂದು ಚುನಾವಣಾ ಕರ್ತವ್ಯದಲ್ಲಿ ನಿರತರಾಗುವ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ತಮ್ಮ ಮತ ಚಲಾಯಿಸಲು ಚುನಾವಣಾ ಆಯೋಗದಿಂದ ಮಾಡಲಾಗಿರುವ ವಿಶೇಷ ವ್ಯವಸ್ಥೆಯ ಸದುಪಯೋಗ ಪಡೆದುಕೊಂಡು, ಎಲ್ಲರೂ ತಪ್ಪದೆ ತಮ್ಮ ಮತ ಚಲಾಯಿಸುವಂತೆ ಜಿಲ್ಲಾ ಚುನಾವಣಾಧಿಕಾರಿ ಪ್ರಶಾಂತಕುಮಾರ್ ಮಿಶ್ರಾ ಮನವಿ ಮಾಡಿದ್ದಾರೆ.