ಇಂದಿನಿಂದ 18ರವರೆಗೆ ಮನೆಯಲ್ಲೇ ಮತದಾನಕ್ಕೆ ಅವಕಾಶ

| Published : Apr 13 2024, 01:02 AM IST

ಸಾರಾಂಶ

ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕ ಮತದಾರರು ಹಾಗೂ ವಿಶೇಷಚೇತನ ಮತದಾರರಿಗೆ ಏ.12ರಿಂದ 18ರವರೆಗೆ ಅಂಚೆ ಮತಪತ್ರದ ಮೂಲಕ ಮನೆಯಲ್ಲಿಯೇ ಮತದಾನ ಮಾಡುವ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಶಿಲ್ಪಾನಾಗ್ ತಿಳಿಸಿದರು.

ಕನ್ನಡಪ್ರಭವಾರ್ತೆ ಚಾಮರಾಜನಗರ

ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕ ಮತದಾರರು ಹಾಗೂ ವಿಶೇಷಚೇತನ ಮತದಾರರಿಗೆ ಏ.12ರಿಂದ 18ರವರೆಗೆ ಅಂಚೆ ಮತಪತ್ರದ ಮೂಲಕ ಮನೆಯಲ್ಲಿಯೇ ಮತದಾನ ಮಾಡುವ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಶಿಲ್ಪಾನಾಗ್ ತಿಳಿಸಿದರು.ಜಿಲ್ಲಾಡಳಿತ ಭವನದಲ್ಲಿರುವ ಕೆಸ್ವಾನ್ ಕಚೇರಿ ಸಭಾಂಗಣದಲ್ಲಿ ಹಿರಿಯ ನಾಗರಿಕರು ಹಾಗೂ ವಿಶೇಷಚೇತನರಿಗೆ ಮನೆಯಲ್ಲಿಯೇ ಮತದಾನ ಮಾಡುವ ಸಂಬಂಧ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಎಲ್ಲಾ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳು ಹಾಗೂ ವಿವಿಧ ರಾಜಕೀಯ ಪಕ್ಷದ ಅಭ್ಯರ್ಥಿಗಳು, ಪ್ರತಿನಿಧಿಗಳೊಂದಿಗೆ ನಡೆದ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ವಿಶೇಷಚೇತನರಿಗೆ ಅನುಕೂಲವಾಗುವಂತೆ ಏ.13ರಿಂದ 18ರವರೆಗೆ ದಿನಾಂಕ ನಿಗದಿಪಡಿಸಿ, ಮನೆಯಲ್ಲಿಯೇ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಸಂಬಂಧ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಹಿರಿಯ ನಾಗರಿಕರು, ವಿಶೇಷಚೇತನ ಮತದಾರರ ಮಾಹಿತಿಯನ್ನು ಸಂಗ್ರಹಿಸಿ ಎಲೆಕ್ಟೋನ್ ತಂತ್ರಾಂಶದಲ್ಲಿ ದಾಖಲಿಸಲಾಗಿದೆ. ಸದರಿ ಮತದಾರರಿಗೆ ಅಂಚೆ ಮತಪತ್ರದ ಮೂಲಕ ಮತದಾನ ಮಾಡಲು ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಹೆಚ್.ಡಿ. ಕೋಟೆ, ನಂಜನಗೂಡು, ವರುಣ, ಟಿ. ನರಸೀಪುರ, ಹನೂರು, ಕೊಳ್ಳೇಗಾಲ, ಚಾಮರಾಜನಗರ, ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 26019 ಮಂದಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, 25589 ವಿಶೇಷಚೇತನರನ್ನು ಗುರುತಿಸಲಾಗಿದೆ. ಈ ಪೈಕಿ 982 ಹಿರಿಯ ನಾಗರಿಕರು ಹಾಗೂ 445 ವಿಶೇಷಚೇತನ ಮತದಾರರು ಮನೆಯಲ್ಲಿ ಮತದಾನ ವ್ಯವಸ್ಥೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಉಳಿದವರು ಮತಗಟ್ಟೆಗೆ ಬಂದು ಮತ ಚಲಾಯಿಸಲಿದ್ದಾರೆ ಎಂದು ತಿಳಿಸಿದರು.

ಎಲ್ಲ ಮತದಾರರಿಗೂ ಸಂಬಂಧಪಟ್ಟ ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಕ್ಷೇತ್ರ ಮತಗಟ್ಟೆ ಅಧಿಕಾರಿಗಳು ಪ್ರಮಾಣೀಕರಿಸಿರುವ ‘ನಮೂನೆ-12ಡಿ’ ಯನ್ನು ಈಗಾಗಲೇ ವಿತರಿಸಲಾಗಿದೆ. ಮನೆಯಲ್ಲಿ ಮತದಾನ ಮಾಡಲು ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 96 ತಂಡಗಳನ್ನು ರಚಿಸಲಾಗಿದ್ದು, ತಂಡಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಲಾಗಿದೆ. ತಂಡದಲ್ಲಿ ಕ್ಷೇತ್ರ ಮತಗಟ್ಟೆ ಅಧಿಕಾರಿ, ಮತಗಟ್ಟೆ ಅಧಿಕಾರಿ, ಮೈಕ್ರೋ ಅಬ್ಸರ್‌ವರ್, ಪೊಲೀಸ್ ಹಾಗೂ ವಿಡಿಯೋಗ್ರಾಫರ್ ಇರಲಿದ್ದಾರೆ. ತಂಡಗಳಿಗೆ ಈಗಾಗಲೇ ರೂಟ್ ಮ್ಯಾಪ್‌ಗಳನ್ನು ಸಹ ಸಿದ್ಧಪಡಿಸಿ ನೀಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ತಿಳಿಸಿದರು.

ಮನೆಯಲ್ಲಿ ಹಾಸಿಗೆ ಹಿಡಿದ ಹಿರಿಯ ನಾಗರಿಕರು ಮತಗಟ್ಟೆಗೆ ಬಂದು ಮತ ಚಲಾಯಿಸಲು ಸಾಧ್ಯವಿಲ್ಲದ ವಿಶೇಷಚೇತನರು 18 ವರ್ಷ ತುಂಬಿದ ಸಹಾಯಕರೊಬ್ಬರೊಂದಿಗೆ ಮತಗಟ್ಟೆಗೆ ಆಗಮಿಸಿ ಗುರುತಿನ ಚೀಟಿಯೊಂದಿಗೆ ಮತ ಚಲಾಯಿಸಲು ಅವಕಾಶ ನೀಡಲಾಗಿದೆ. ಸಹಾಯಕರು ಮತದಾರರಿಗೆ ಯಾವುದೇ ಶಿಫಾರಸ್ಸು ಮಾಡುವಂತಿಲ್ಲ. ಸದರಿ ಅಂಚೆ ಮತಪತ್ರದ ಮೂಲಕ ನಡೆಯುವ ಮತದಾನದಲ್ಲಿ ನೋಟಾ ಮತದಾನ ಮಾಡಲು ಅವಕಾಶವಿರುವುದಿಲ್ಲ. ಮನೆಯಲ್ಲಿಯೇ ಮತದಾನ ಮಾಡಿಸಲು ನಿಯೋಜಿಸಲಾಗಿರುವ ತಂಡ ಮನೆಗೆ ಭೇಟಿ ನೀಡಿದ ಸಮಯದಲ್ಲಿ ಮತದಾರರು ಮನೆಯಲ್ಲಿರದೇ ಬೇರೆಡೆ ಹೋಗಿದ್ದ ಸಂದರ್ಭದಲ್ಲಿ ಮತದಾನ ಮಾಡಲು 2ನೇ ಅವಕಾಶವನ್ನು ಸಹ ಕಲ್ಪಿಸಲಾಗಿದೆ. ರಾಜಕೀಯ ಪಕ್ಷಗಳ ನಿಯೋಜಿತ ಏಜೆಂಟರು ಕೂಡ ಅಂಚೆ ಮತದಾನ ಪ್ರಕ್ರಿಯೆಯನ್ನು ವೀಕ್ಷಿಸಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ತಿಳಿಸಿದರು.

ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ನೌಕರರನ್ನು (ಎ.ವಿ.ಇ.ಎಸ್) ಗೈರು ಮತದಾರರ ವರ್ಗದಡಿ 710ಸೇವಾ ವೃತ್ತಿ ನಿರತರನ್ನು ಗುರುತಿಸಲಾಗಿದ್ದು, ಇವರಿಗೆ ಅಂಚೆ ಮತಪತ್ರದ ಮೂಲಕ ಮತದಾನ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ. ಮತದಾನವನ್ನು ಏ.19 ರಿಂದ 21ರವರೆಗೆ ಜಿಲ್ಲಾಡಳಿತ ಭವನದ ಹಳೇ ಕಡಿಪಿ ಸಭಾಂಗಣದ ಕೊಠಡಿ ಸಂಖ್ಯೆ ೬ರಲ್ಲಿ ಮತದಾನ ಕೇಂದ್ರವನ್ನು ಸ್ಥಾಪಿಸಲಾಗಿದೆ. ಸದರಿ ದಿನಗಳಂದು ಚುನಾವಣಾ ಅಭ್ಯರ್ಥಿಗಳು ತಮ್ಮ ಅಧಿಕೃತ ಪ್ರತಿನಿಧಿಗಳನ್ನು ಅಂಚೆ ಮತದಾನ ಕೇಂದ್ರಕ್ಕೆ ಮತದಾನ ಪ್ರಕ್ರಿಯೆಯನ್ನು ಪರಿಶೀಲಿಸಲು ಕಳುಹಿಸಬೇಕು ಎಂದರು.

ಎರಡನೇ ಹಂತದ ಮತಗಟ್ಟೆ ಅಧಿಕಾರಿಗಳ ತರಬೇತಿಯನ್ನು ಏ.20 ಮತ್ತು 21ರಂದು ನಿಗದಿಪಡಿಸಲಾಗಿದೆ. ಎಲೆಕ್ಟ್ರಾನಿಕಲಿ ಟ್ರಾನ್ಸ್ಮೀಟೇಡ್ ಪೋಸ್ಟಲ್ ಬ್ಯಾಲೆಟ್ ಸಿಸ್ಟಮ್ (ಇಟಿಪಿಬಿಎಸ್) ವ್ಯವಸ್ಥೆಯಡಿ ಕ್ಷೇತ್ರ ವ್ಯಾಪ್ತಿಯಲ್ಲಿ 357 ಸೇವಾ ಮತದಾರರಿಗೆ ಅಂಚೆ ಪತ್ರ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಶಿಲ್ಪಾನಾಗ್ ತಿಳಿಸಿದರು.

ಅಪರ ಜಿಲ್ಲಾ ಚುನಾವಣಾಧಿಕಾರಿ ಗೀತಾ ಹುಡೇದ, 8 ವಿಧಾನಸಭಾ ಕ್ಷೇತ್ರಗಳ ಸಹಾಯಕ ಚುನಾವಣಾಧಿಕಾರಿಗಳು, ಪಕ್ಷೇತರ ಅಭ್ಯರ್ಥಿಗಳಾದ ಜಿ.ಡಿ. ರಾಜಗೋಪಾಲ, ಎಚ್.ಕೆ. ಸ್ವಾಮಿ, ವಿವಿಧ ರಾಜಕೀಯ ಪಕ್ಷಗಳ ಚುನಾವಣಾ ಏಜೆಂಟರು ಸಭೆಯಲ್ಲಿ ಉಪಸ್ಥಿತರಿದ್ದರು.