ಹೊಸಪೇಟೆಯಲ್ಲಿ ಮತದಾನ ಜಾಗೃತಿ ಅಭಿಯಾನ

| Published : Apr 09 2024, 12:54 AM IST

ಸಾರಾಂಶ

ಪ್ರಜಾಪ್ರಭುತ್ವದ ಯಶಸ್ವಿಗಾಗಿ ಅರ್ಹ ಮತದಾರರು ಮತದಾನದ ದಿನ ಮತಗಟ್ಟೆಗೆ ಬಂದು ಮತ ಚಲಾಯಿಸಬೇಕು. ಮತದಾನ ಮಾಡುವ ಮೂಲಕ ತಮ್ಮ ಜವಾಬ್ದಾರಿ ನಿಭಾಯಿಸಬೇಕು.

ಹೊಸಪೇಟೆ: ಮತದಾನದ ಪ್ರಕ್ರಿಯೆಯಲ್ಲಿ ಮತದಾರರು ಕಡ್ಡಾಯವಾಗಿ ಭಾಗವಹಿಸಬೇಕು. ಈ ಮೂಲಕ ತಮ್ಮ ಮತದಾನದ ಹಕ್ಕು ಚಲಾಯಿಸಿ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಬೇಕು ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಪಂ ಸಿಇಒ ಸದಾಶಿವ ಪ್ರಭು ಬಿ. ಹೇಳಿದರು.

ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಭಾರತೀಯ ವೈದ್ಯಕೀಯ ಸಂಘದ ಸಹಯೋಗದಲ್ಲಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಸೋಮವಾರ ಆಯೋಜಿಸಿದ್ದ ಮತದಾರರ ಜಾಗೃತಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಪ್ರಜಾಪ್ರಭುತ್ವದ ಯಶಸ್ವಿಗಾಗಿ ಅರ್ಹ ಮತದಾರರು ಮತದಾನದ ದಿನ ಮತಗಟ್ಟೆಗೆ ಬಂದು ಮತ ಚಲಾಯಿಸಬೇಕು. ಮತದಾನ ಮಾಡುವ ಮೂಲಕ ತಮ್ಮ ಜವಾಬ್ದಾರಿ ನಿಭಾಯಿಸಬೇಕು. ಚುನಾವಣೆಗಳು ಪ್ರಜಾಪ್ರಭುತ್ವದ ಹಬ್ಬ ಇದ್ದಂತೆ. ಎಲ್ಲರೂ ತಮ್ಮ ಬಹು ಅಮೂಲ್ಯ ಹಕ್ಕನ್ನು ಚಲಾಯಿಸಬೇಕು. ಈ ಮತದಾನದಿಂದ ಯಾರೂ ದೂರ ಉಳಿಯದೇ ಮತಗಟ್ಟೆಗಳಿಗೆ ಆಗಮಿಸಿ ಹಕ್ಕು ಚಲಾಯಿಸಬೇಕು ಎಂದರು.

ಜಿಲ್ಲೆಯಲ್ಲಿ ಹಲವಾರು ಸ್ವೀಪ್ ಕಾರ್ಯ ಚಟುವಟಿಕೆಗಳ ರೂಪುರೇಷೆ ಸಿದ್ಧಪಡಿಸಿಕೊಂಡು ಮತದಾನ ಜಾಗೃತಿ ಮೂಡಿಸಲಾಗುತ್ತಿದೆ. ಮತದಾರರು ತಮಗೆ ದೊರೆತಿರುವ ಹಕ್ಕನ್ನು ಮೇ 7ರಂದು ಮತಗಟ್ಟೆಗೆ ಆಗಮಿಸಿ ಮತದಾನ ಮಾಡಬೇಕು ಎಂದು ಹೇಳಿದರು.

ಮತದಾನ ಜಾಗೃತಿ ಅಭಿಯಾನ ನಗರದ ಡಾ.ಅಂಬೇಡ್ಕರ್ ವೃತ್ತದಿಂದ ಆರಂಭವಾಗಿ ರೈತ ಭವನ, ಪಟೇಲ್ ನಗರದ ಮೂಲಕ ಡಾ.ಪುನೀತ್ ರಾಜ್ ಕುಮಾರ್ ವೃತ್ತದವರೆಗೆ ಸಾಗಿತು.

ಡಿಎಚ್‌ಒ ಡಾ.ಎಲ್.ಆರ್.ಶಂಕರ್ ನಾಯ್ಕ, ಆರ್.ಸಿ.ಎಚ್. ಡಾ.ಜಂಬಯ್ಯ ನಾಯಕ, ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ಶ್ರೀನಿವಾಸ್‌ ದೇಶಪಾಂಡೆ, ಕಾರ್ಯದರ್ಶಿ ಡಾ.ರಾಜೀವ್ ಮತ್ತಿತರರಿದ್ದರು.