ಸಾರಾಂಶ
ರಾಯಚೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮತದಾನದ ಕುರಿತು ಜಾಗೃತಿ ಮುಡಿಸಲು ಜಿಲ್ಲೆಯಲ್ಲಿ ಸಂಚರಿಸಲಿರುವ ಸ್ವೀಪ್ ಟ್ಯಾಬ್ಲೋ(ಸ್ಥಬ್ಧಚಿತ್ರ ಉಳ್ಳ ವಾಹನ)ಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎಲ್.ಚಂದ್ರಶೇಖರ ನಾಯಕ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಪಾಂಡ್ವೆ ರಾಹುಲ್ ತುಕಾರಾಮ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಇದೇ ವೇಳೆ ಜಿಲ್ಲಾಧಿಕಾರಿ ಮಾತನಾಡಿ, ಕಳೆದ ಚುನಾವಣೆಗಳಲ್ಲಿ ಕಡಿಮೆ ಮತದಾನಾವಾಗಿರುವಲ್ಲಿಗೆ ಮತದಾನದ ಕುರಿತು ಹಾಗೂ ಮತದಾನ ಪ್ರಕ್ರಿಯೆಯ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾ ಸ್ವೀಪ್‌ಸಮಿತಿಯಿಂದ ಮತದಾನ ಪ್ರಾತ್ಯಕ್ಷತೆಯ ಸ್ತಬ್ಧಚಿತ್ರ ಸಂಚರಿಸಲಿದ್ದು, ವಾಹನದ ಮೂಲಕ ಮತದಾರರಲ್ಲಿ ಮತದಾನದ ಮಹತ್ವದ ಕುರಿತು ಅರಿವು ಮೂಡಿಸಲಾಗುವುದು ಎಂದು ಹೇಳಿದರು.ಈ ವಾಹನದಲ್ಲಿ ಇವಿಎಂ ಯಂತ್ರದ ಕಂಟ್ರೋಲ್ ಯೂನಿಟ್, ವಿವಿಪ್ಯಾಟ್ ಹಾಗೂ ಬ್ಯಾಲೆಟ್ ಯೂನಿಟ್ ಸ್ತಬ್ಧ ಚಿತ್ರವಿದ್ದು, ವಾಹನದಲ್ಲಿರುವ ಬ್ಯಾಲೆಟ್ ಯೂನಿಟ್‌ನಲ್ಲಿರುವ ಗುಂಡಿ ಒತ್ತಿದಾಗ ಕಂಟ್ರೋಲ್ ಯೂನಿಟ್‌ನಲ್ಲಿ ಮತದಾನ ಪೂರ್ಣವಾದಂತೆ ಶಬ್ದವಾಗುತ್ತದೆ ಈ ರೀತಿ ವಿನೂತನವಾಗಿರುವ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಮೇ 7ರಂದು ನಡೆಯುತ್ತಿರುವ ಲೋಕಸಭಾ ಕ್ಷೇತ್ರದ ಮತದಾನಕ್ಕೆ ಎಲ್ಲಾ ಮತದಾರರು ಕಡ್ಡಾಯವಾಗಿ ಮತದಾನ ಮಾಡಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ನೀಡಲಾದ ಮತದಾನದ ಹಕ್ಕನ್ನು ಪಡೆಯಬೇಕು ಎಂದರು.ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಸಹಾಯಕ ಆಯುಕ್ತ ಎಸ್.ಎಸ್.ಸಂಪಗಾವಿ, ನಗರಾಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಜಗದೀಶ ಗಂಗಣ್ಣನವರ, ನಗರಸಭೆ ಪೌರಾಯುಕ್ತ ಜಿ.ಎನ್ ಚಲಪತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.