ಮತದಾನ ಹಿನ್ನೆಲೆ 24 ರಿಂದ 27 ರವರೆಗೆ ನಿಷೇಧಾಜ್ಞೆ ಜಾರಿ: ಜಿಲ್ಲಾಧಿಕಾರಿ ರವೀಂದ್ರ

| Published : Apr 14 2024, 01:54 AM IST

ಮತದಾನ ಹಿನ್ನೆಲೆ 24 ರಿಂದ 27 ರವರೆಗೆ ನಿಷೇಧಾಜ್ಞೆ ಜಾರಿ: ಜಿಲ್ಲಾಧಿಕಾರಿ ರವೀಂದ್ರ
Share this Article
  • FB
  • TW
  • Linkdin
  • Email

ಸಾರಾಂಶ

ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 26 ರಂದು ಮತದಾನ ನಡೆಯಲಿದ್ದು, ಮತದಾನವು ಮುಕ್ತಾಯಗೊಳ್ಳುವ ಅವಧಿಯ 48 ಗಂಟೆಗೆಳ ಪೂರ್ವದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಹಾಗೂ ಮತದಾನವು ಸುಗಮ ಹಾಗೂ ಮುಕ್ತವಾಗಿ ನಡೆಸುವ ಹಿತ ದೃಷ್ಠಿಯಿಂದ ಏಪ್ರಿಲ್ 24ರ ಸಂಜೆ 6 ಗಂಟೆಯಿಂದ ಏಪ್ರಿಲ್ 27ರ ಸಂಜೆ 6 ಗಂಟೆಯವರೆಗೆ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರನ್ವಯ ವಿವಿಧ ಷರತ್ತುಗಳಿಗೊಳಪಡಿಸಿ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ವಿಧಿಸಿ ಆದೇಶ ಹೊರಡಿಸಿರುವುದಾಗಿ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ತಿಳಿಸಿದರು

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 26 ರಂದು ಮತದಾನ ನಡೆಯಲಿದ್ದು, ಮತದಾನವು ಮುಕ್ತಾಯಗೊಳ್ಳುವ ಅವಧಿಯ 48 ಗಂಟೆಗೆಳ ಪೂರ್ವದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಹಾಗೂ ಮತದಾನವು ಸುಗಮ ಹಾಗೂ ಮುಕ್ತವಾಗಿ ನಡೆಸುವ ಹಿತ ದೃಷ್ಠಿಯಿಂದ ಏಪ್ರಿಲ್ 24ರ ಸಂಜೆ 6 ಗಂಟೆಯಿಂದ ಏಪ್ರಿಲ್ 27ರ ಸಂಜೆ 6 ಗಂಟೆಯವರೆಗೆ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರನ್ವಯ ವಿವಿಧ ಷರತ್ತುಗಳಿಗೊಳಪಡಿಸಿ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ವಿಧಿಸಿ ಆದೇಶ ಹೊರಡಿಸಿರುವುದಾಗಿ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ತಿಳಿಸಿದರು

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಮತದಾರರಿಗೆ ವಿವಿಧ ಆಸೆ-ಆಮಿಷಗಳಿಗೆ ಒಳಪಡಿಸುವುದು, ಬೆದರಿಸಲು ಯತ್ನಿಸುವುದು, ತಮ್ಮ ಪರವಾಗಿ ವರ್ತಿಸಲು ಪುಸಲಾಯಿಸುವುದು, ಮತಗಟ್ಟೆಗಳ ಹತ್ತಿರದಲ್ಲಿ ಪ್ರಚಾರ ಮಾಡುವುದು, ಸಾರ್ವಜನಿಕ ಸಭೆ ನಡೆಸುವುದು, ಮತದಾರರನ್ನು ವಿವಿಧ ಸಾರಿಗೆ ವ್ಯವಸ್ಥೆಗಳ ಮೂಲಕ ಮತಗಟ್ಟೆಗಳಿಗೆ ಕರೆ ತರುವುದು, ಶಾಂತಿ ಭಂಗ ಉಂಟು ಮಾಡುವುದು, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವುದು ಹಾಗೂ ಇತರೆ ಅಹಿತಕರ ಘಟನೆಗಳು ನಡೆಯುವಂತೆ ಮಾಡುವ ಸಂಭವನೀಯತೆಗಳಿದ್ದು, ಇದನ್ನು ತಡೆಗಟ್ಟಲು ಹಾಗೂ ಮತದಾನ ಪಾವಿತ್ರ್ಯತೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ದಂಡ ಪ್ರಕ್ರಿಯಾ ಸಂಹಿತೆ, 1973ರ ಕಲಂ 144ರ ಮೇರೆಗೆ ಪ್ರತಿಬಂಧಕಾಜ್ಞೆ ವಿಧಿಸಲಾಗಿದೆ ಎಂದರು.ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಲ್ಲಿ ಮೇಲೆ ತಿಳಿಸಿದ ಅವಧಿಯಲ್ಲಿ ಸಾರ್ವಜನಿಕರು ಕಾರಣವಿಲ್ಲದೆ 5 ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕ ರಸ್ತೆ, ಬೀದಿ, ಓಣಿ, ಕೇರಿಗಳಲ್ಲಿ ಸಾರ್ವಜನಿಕ ಸ್ಥಳ, ಸಾರ್ವಜನಿಕ ಕಟ್ಟಡ ಮತ್ತು ಮತದಾನ ಕೇಂದ್ರದ ಸುತ್ತಮುತ್ತ ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.ಚುನಾವಣಾ ಅಭ್ಯರ್ಥಿ, ಬೆಂಬಲಿಗರು ಸೇರಿ 5 ಜನರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಬಾರದು, ಯಾವುದೇ ಆಯುಧ, ಕುಡುಗೋಲು, ಖಡ್ಗ, ಭರ್ಜಿ, ಚೂರಿ, ದೊಣ್ಣೆ, ಲಾಠಿ ಅಥವಾ ದೈಹಿಕ ದಂಡನೆಗೆ ಕಾರಣವಾಗುವ ಅಥವಾ ಪೂರಕವಾಗುವ ಇನ್ಯಾವುದೇ ವಸ್ತುಗಳನ್ನು ಹೊಂದುವುದನ್ನು ಮತ್ತು ಸಾಗಾಟ ಮಾಡುವುದನ್ನು ನಿಷೇಧಿಸಲಾಗಿದೆ.ಈ ಪ್ರದೇಶದ ವ್ಯಾಪ್ತಿಯಲ್ಲಿ ಇರುವ ಜೆರಾಕ್ಸ್ ಅಂಗಡಿ, ಬುಕ್ ಸ್ಟಾಲ್, ಸೈಬರ್ ಕೆಫೆಗಳನ್ನು ನಿರ್ಬಂಧಿಸಲಾಗಿದೆ. ಮತದಾನದ ದಿನದಂದು ಮತಗಟ್ಟೆಗಳ 100 ಮೀಟರ್ ಒಳಗೆ ಚುನಾವಣೆ ಪ್ರಚಾರ ನಿಷೇಧಿಸಲಾಗಿದೆ ಹಾಗೂ ಪ್ರಚಾರಕ್ಕೆ ಸಂಬಂಧಿಸಿದ ಪೋಸ್ಟರ್, ಬ್ಯಾನರ್, ಇನ್ಯಾವುದೇ ವಸ್ತುಗಳನ್ನು ಬಳಸುವಂತಿಲ್ಲ. ಕಲ್ಲುಗಳನ್ನು, ಖಾರಪದಾರ್ಥ ಇಲ್ಲವೆ ಸ್ಫೋಟಕ ವಸ್ತುಗಳು ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ಸದರಿ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ. ಯಾವುದೇ ರೀತಿಯ ಬಂದ್, ಪ್ರತಿಭಟನೆ ಮುಷ್ಕರ, ಪ್ರತಿಕೃತಿ ದಹನ, ಪ್ರದರ್ಶನ, ಪೂರಕ ಚಟುವಟಿಕೆಗಳು, ಯಾವುದೇ ಖಾಸಗಿ, ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿಗೊಳಿಸುವ ಹಾಗೂ ವಿರೂಪಗೊಳಿಸುವ ಚಟುವಟಿಕೆಗಳನ್ನು, ಸಾರ್ವಜನಿಕವಾಗಿ ಕೂಗನ್ನು ಉಚ್ಚರಿಸುವುದು ಅಥವಾ ಪದ ಹಾಡುವುದು, ಚೇಷ್ಟೆ ಮಾಡುವುದು, ಸಂಜ್ಞೆಗಳನ್ನು ಉಪಯೋಗಿಸುವುದು ಮತ್ತು ಚಿತ್ರಗಳ ಮೂಲಕ ಪ್ರದರ್ಶನ, ಪ್ರಸಾರ ಮಾಡುವುದು, ಪ್ರಕಟಣಾ ಪತ್ರಿಕೆಗಳ, ವಸ್ತುಗಳ ಪ್ರದರ್ಶನ, ಭಿತ್ತಿ ಪತ್ರಗಳನ್ನು ಅಂಟಿಸುವುದರಿಂದ, ಸಭ್ಯತನ, ಸದಾಚಾರ, ಸಾರ್ವಜನಿಕ ಭದ್ರತೆ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಅಪರಾಧ ಎಸಗುವಂತೆ ಪ್ರೇರೇಪಿಸುವ ಕ್ರಮಗಳನ್ನು ನಿಷೇಧಿಸಲಾಗಿದೆ.ಯಾವುದೇ ವ್ಯಕ್ತಿಯ ಜಾತಿ-ಧರ್ಮ, ಕೋಮು ಪಂಥಗಳಿಗೆ, ಸಾರ್ವಜನಿಕ ನೈತಿಕತೆಗೆ ಬಾಧಕ ಉಂಟುಮಾಡಬಾರದು, ಈ ಅವಧಿಯಲ್ಲಿ ಸಂತೆ, ಜಾತ್ರೆ, ಇತರೆ ಜನಸಮೂಹಗಳನ್ನು ಹಾಗೂ ಧ್ವನಿವರ್ಧಕ ಬಳಸುವುದನ್ನು ನಿಷೇಧಿಸಲಾಗಿದೆ. ನಿಷೇಧಾಜ್ಞೆಯು ಮದುವೆ, ಶುಭ ಸಮಾರಂಭಗಳು, ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಶವ ಸಂಸ್ಕಾರ, ಕೋವಿಡ್-19 ಕಾರ್ಯಗಳಿಗೆ, ಚುನಾವಣಾ ಮತದಾನ ಕೇಂದ್ರಕ್ಕೆ ಅನ್ವಯಿಸುವುದಿಲ್ಲ ಎಂದರು.

ಮತದಾನ ದಿನದಂದು ಮತಗಟ್ಟೆಗಳ ಸುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಮೊಬೈಲ್ ಪೋನ್, ಕಾರ್ಡ್ ಲೆಸ್ ಪೋನ್, ಇನ್ನಿತರೆ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. (ಚುನಾವಣಾ ಕಾರ್ಯದಲ್ಲಿ ನಿರತರಾದ ಅಧಿಕಾರಿಗಳು, ಸಿಬ್ಬಂದಿ ಹೊರತುಪಡಿಸಿ) ಎಂದು ತಿಳಿಸಿದರು.