ಸಾರಾಂಶ
ರಟ್ಟೀಹಳ್ಳಿ: ತಾಲೂಕಿನ ತೋಟಗಂಟಿ ಗ್ರಾಮದ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ವಾರ್ಡ್ ನಂ. 8ರಲ್ಲಿ ಮೂಲ ಸೌಕರ್ಯಗಳನ್ನು ಕಲ್ಪಿಸಿಲ್ಲ. ಹೀಗಾಗಿ ಮತದಾನ ಬಹಿಷ್ಕರಿಸುವಾಗಿ ತಾಲೂಕಾಡಳಿತಕ್ಕೆ ಹಾಗೂ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಂತೋಷ ಚಂದ್ರಕೇರ ಅವರಿಗೆ ಸಾರ್ವಜನಿಕರು ಮನವಿ ಸಲ್ಲಿಸಿದರು.ನಂತರ ಮಾತನಾಡಿದ ಆನಂದ ಪಾಟೀಲ್ ಅವರು, ರಟ್ಟೀಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ತೋಟಗಂಟಿ ಗ್ರಾಮದ ವಾರ್ಡ್ ನಂ. 8ರಲ್ಲಿ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲ. ರಸ್ತೆಗಳ ಅಭಿವೃದ್ದಿ ಕಾಣದೆ ಅನೇಕ ವರ್ಷಗಳೇ ಕಳೆದಿವೆ. ಜನಪ್ರತಿನಿಧಿಗಳು, ಅಧಿಕಾರಿಗಳು ಮನವಿ ಆಲಿಸದೇ ನಿರ್ಲಕ್ಷ್ಯ ವಹಿಸಿರುವುದು ಅತ್ಯಂತ ನೋವಿನ ಸಂಗತಿ. ಸರಿಯಾದ ಕಾಲುವೆ ವ್ಯವಸ್ಥೆ ಇಲ್ಲದಿರುವುದರಿಂದ ಚರಂಡಿಗಳು ತುಂಬಿ ರಸ್ತೆ ಮೇಲೆ ಗಲೀಜು ನೀರು ಹರಿದು ಗಬ್ಬು ನಾರುತ್ತಿದೆ.
ಸೊಳ್ಳೆಗಳ ಉತ್ಪತ್ತಿ ತಾಣವಾಗಿದೆ. ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ಕಾಯಿಲೆಗಳು ಹೆಚ್ಚುವ ಭೀತಿ ಕಾಡುತ್ತಿದೆ. ಮೂಲ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಅನೇಕ ತಿಂಗಳುಗಳಿಂದ ತಹಸೀಲ್ದಾರ್ ಹಾಗೂ ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನ ಆಗಿಲ್ಲ. ಮುಂಬರುವ ಪಟ್ಟಣ ಪಂಚಾಯಿತಿ ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿದ್ದೇವೆ ಎಂದು ರಾಮಚಂದ್ರಪ್ಪ ಓಲೇಕಾರ್, ರವಿಚಂದ್ರ ನಾಯಕ, ರಮೇಶ ಅಂತರವಳ್ಳಿ ತಿಳಿಸಿದರು.ಬಸ್ ನಿಲ್ದಾಣ ಅವ್ಯವಸ್ಥೆ ಸರಿಪಡಿಸಲು ಆಗ್ರಹಶಿಗ್ಗಾಂವಿ: ಪಟ್ಟಣದ ಹೊಸ ಬಸ್ ನಿಲ್ದಾಣದಲ್ಲಿ ಶೌಚಾಲಯ, ವಾಹನ ನಿಲುಗಡೆ, ವ್ಯವಸ್ಥೆಯನ್ನು ಸರಿಪಡಿಸುವಂತೆ ಆಗ್ರಹಿಸಿ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ ಎನ್‌ಡಬ್ಲ್ಯುಕೆಎಸ್ಆರ್‌ಟಿಸಿ ಡಿಪೋ ಮ್ಯಾನೇಜರರಿಗೆ ಮನವಿ ಸಲ್ಲಿಸಲಾಯಿತು.ಬಸ್ ನಿಲ್ದಾಣದಲ್ಲಿ ಸಾರ್ವಜನಿಕ ಶೌಚಾಲಯವು ಗಬ್ಬು ನಾರುತ್ತಿದ್ದು, ಮಹಿಳೆಯರು, ಮಕ್ಕಳು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ಇದೆ. ಶುದ್ಧ ಕುಡಿಯುವ ನೀರಿನ ಘಟಕ ಇದ್ದರೂ ಕೆಟ್ಟಿದೆ.
ಬಸ್ ನಿಲ್ದಾಣದಲ್ಲಿ ದ್ವಿಚಕ್ರ ವಾಹನ ನಿಲುಗಡೆಗೆ ಸೂಕ್ತ ವ್ಯವಸ್ಥೆ ಮಾಡಬೇಕು. ಇಲ್ಲದೆ ಹೋದರೆ ಮುಂದಿನ ದಿನಗಳಲ್ಲಿ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಬಸ್ ನಿಲ್ದಾಣದ ಎದುರು ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ನಿತ್ಯಾನಂದ ಕುಂದಾಪೂರ, ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಜಾಧವ, ರಾಜ್ಯ ಸಂಚಾಲಕ ಮಲ್ಲಿಕಾರ್ಜುನ, ರಾಜ್ಯ ಉಪಾಧ್ಯಕ್ಷ ಸಿದ್ಧಾರೂಢ ಗುರುಂ, ಕಾರ್ಮಿಕ ಜಿಲ್ಲಾ ಘಟಕದ ಅಧ್ಯಕ್ಷ ಪರಸಪ್ಪ ಕುರವತ್ತಿ, ರೀಯಾಜ ದೊಡ್ಡಮನಿ, ಮೃತ್ಯುಂಜಯ ಕರಿಯಜ್ಜಿ, ತಾಲೂಕು ಅಧ್ಯಕ್ಷ ಬಸವರಾಜ ಗೊಬ್ಬಿ, ಉಪಾಧ್ಯಕ್ಷ ಗುರುನಾಥ ಹುಬ್ಬಳ್ಳಿ ಸೇರಿದಂತೆ ಹಲವರು ಇದ್ದರು.