ಸಾರಾಂಶ
ತಪ್ಪದೇ ಮತ ಚಲಾಯಿಸುವ ಮೂಲಕ ಸಂವಿಧಾನತ್ಮಕವಾಗಿರುವ ಹಕ್ಕನ್ನು ಚಲಾಯಿಸಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಶ್ರೀನಿವಾಸ್ ತಿಳಿಸಿದರು. ಆಲೂರಲ್ಲಿ ಜಿಲ್ಲಾ ಮತ್ತು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಏರ್ಪಡಿಸಲಾಗಿದ್ದ ಮತದಾನ ಜಾಗೃತಿ ಹಾಗೂ ಬೀದಿ ನಾಟಕ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮತದಾನ ಜಾಗೃತಿ, ಬೀದಿ ನಾಟಕ
ಕನ್ನಡಪ್ರಭ ವಾರ್ತೆ ಆಲೂರುತಪ್ಪದೇ ಮತ ಚಲಾಯಿಸುವ ಮೂಲಕ ಸಂವಿಧಾನತ್ಮಕವಾಗಿರುವ ಹಕ್ಕನ್ನು ಚಲಾಯಿಸಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಶ್ರೀನಿವಾಸ್ ತಿಳಿಸಿದರು.
ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ಜಿಲ್ಲಾ ಮತ್ತು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಏರ್ಪಡಿಸಲಾಗಿದ್ದ ಮತದಾನ ಜಾಗೃತಿ ಹಾಗೂ ಬೀದಿ ನಾಟಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ‘ಮತದಾನ ಸಂವಿಧಾನ್ಮಕ ಹಕ್ಕಾಗಿದ್ದು ತಪ್ಪದೇ ಏ.೨೬ ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರು ಮತದಾನ ಕೇಂದ್ರಕ್ಕೆ ತೆರಳಿ ಮತ ಚಲಾಯಿಸಿ. ನಿಮ್ಮ ಮತ ನಿಮ್ಮ ಹಕ್ಕು. ಸದೃಢ ಪ್ರಜಾಪ್ರಭುತ್ವ, ಮತದಾನ ಮಾಡುವುದು ಪ್ರತಿ ಮತದಾರರ ಹಕ್ಕು ಮತ್ತು ಕರ್ತವ್ಯ, ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಚುನಾವಣೆಗೆ ಸಹಕರಿಸಿ. ಚುನಾವಣೆ ಪ್ರಜಾಪ್ರಭುತ್ವದ ಭದ್ರ ಬುನಾದಿ, ಯಾವುದೇ ಆಸೆ ಆಮಿಷಗಳಿಗೆ ತುತ್ತಾಗದೆ ನಿರ್ಭೀತಿಯಿಂದ ಮತ ಚಲಾಯಿಸಿ’ ಎಂದು ಹೇಳಿದರು.ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸ್ಟೀಫನ್ ಪ್ರಕಾಶ್ ಮಾತನಾಡಿ, ಚುನಾವಣಾ ಆಯೋಗ ಮತದಾರರ ವ್ಯವಸ್ಥಿತ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ವತಿಯಿಂದ ಶೇಕಡವಾರು ಮತದಾನ ಹೆಚ್ಚಳ ಮಾಡುವ ಉದ್ದೇಶದಿಂದ ಮತದಾರರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ನಡೆಸುತ್ತಿದೆ. ಆದ್ದರಿಂದ ಪ್ರತಿಯೊಬ್ಬ ಮತದಾರರು ಮತದಾನ ಕೇಂದ್ರಕ್ಕೆ ತೆರಳಿ ಮತದಾನ ಮಾಡಬೇಕು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣೇಗೌಡ ಮಾತನಾಡಿ, ಪ್ರತಿಯೊಬ್ಬ ಮತದಾರನು ಈ ದೇಶದ ಹಾಗೂ ಪ್ರಜಾಪ್ರಭುತ್ವದ ಆಸ್ತಿ. ಮತದಾರರು ಯಾವುದೇ ರೀತಿಯ ಚುನಾವಣಾ ಅಕ್ರಮವನ್ನು ಮಾಡದೆ ನೈತಿಕ ಮತದಾನವನ್ನು ಮಾಡಿ ಬೇರೆಯವರಿಗೂ ನೈತಿಕ ಮತದಾನ ಮಾಡುವಂತೆ ಅರಿವು ಮೂಡಿಸಬೇಕು ಎಂದರು.ಕಲಾವಿದ ಬಿ.ಟಿ.ಮಾನವ ರವರ ನೇತೃತ್ವದ ಕಲಾ ತಂಡವು ಜಾನಪದ ಸಂಗೀತ ಮತ್ತು ಬೀದಿನಾಟಕ ಪ್ರದರ್ಶಿಸುವ ಮೂಲಕ ನಾಗರಿಕರಿಗೆ ಮತದಾನದ ಮಹತ್ವ ಕುರಿತು ತಿಳಿಸಿದರು.
ಆರೋಗ್ಯ ಇಲಾಖೆ ಶಿಕ್ಷಣಾಧಿಕಾರಿ ಸತೀಶ್, ಆಹಾರ ಇಲಾಖೆ ಸಹಾಯಕ ನಿರ್ದೇಶಕ ಮೋಹನ್, ಉದ್ಯೋಗ ಖಾತ್ರಿ ಯೋಜನೆ ಸಹಾಯಕ ನಿರ್ದೇಶಕ ಕೇಶವಮೂರ್ತಿ, ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳ ಪಿಡಿಒಗಳು, ಕಾರ್ಯದರ್ಶಿಗಳು, ನೀರಗಂಟಿಗಳು, ಹಾಗೂ ಸ್ವ-ಸಹಾಯ ಸಂಘದ ಸದಸ್ಯರು ಹಾಜರಿದ್ದರು.ಆಲೂರಿನ ಜಿಲ್ಲಾ ಮತ್ತು ತಾಲೂಕು ಸ್ವೀಪ್ ಸಮಿತಿಯಿಂದ ಆಯೋಜಿಸಿದ್ದ ಮತದಾನ ಜಾಗೃತಿ ಮತ್ತು ಬೀದಿ ನಾಟಕ ಕಾರ್ಯಕ್ರಮಕ್ಕೆ ತಾಲೂಕು ಪಂಚಾಯಿತಿ ಕಾರ್ಯನಿರ್ವಣಾಧಿಕಾರಿ ಶ್ರೀನಿವಾಸ್ ಹಸಿರು ಬಾವುಟ ತೋರಿಸಿ ಚಾಲನೆ ನೀಡಿದರು.