18 ವರ್ಷ ಪೂರೈಸಿದ ಯುವಕ-ಯುವತಿಯರು ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆಯಾಗಬೇಕು

ಕುಷ್ಟಗಿ: ಸುಭದ್ರ ದೇಶ ನಿರ್ಮಾಣದಲ್ಲಿ ಮತದಾರರ ಪಾತ್ರ ಅತ್ಯಂತ ಮಹತ್ವದ್ದು. ಪ್ರತಿಯೊಂದು ಮತವೂ ಅಮೂಲ್ಯವಾಗಿದ್ದು, ಮತದಾನವು ಪ್ರಜಾಪ್ರಭುತ್ವದ ಪವಿತ್ರ ಕರ್ತವ್ಯವಾಗಿದೆ ಎಂದು ತಾಪಂ ಇಒ ಸ್ವೀಪ್‌ ಸಮಿತಿ ಅಧ್ಯಕ್ಷ ಅಮರೇಶ ಹೇಳಿದರು.

ಪಟ್ಟಣದ ಮಲ್ಲಯ್ಯ ವೃತ್ತದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಕರೆ ನೀಡಿದ ಅವರು, ಅರ್ಹ ಮತದಾರರೆಲ್ಲರೂ ವಿಶೇಷ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಭಾಗವಹಿಸಿ ತಮ್ಮ ಹೆಸರು ನೋಂದಾಯಿಸಿ, ಪರಿಷ್ಕರಿಸಿಕೊಳ್ಳಬೇಕು ಎಂದು ತಿಳಿಸಿದರು.

ತಹಸೀಲ್ದಾರ್ ಗುರುರಾಜ್ ಛಲವಾದಿ ಮಾತನಾಡಿ, 18 ವರ್ಷ ಪೂರೈಸಿದ ಯುವಕ-ಯುವತಿಯರು ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆಯಾಗಬೇಕು. ನಿಧನ ಹೊಂದಿದವರ ಹೆಸರು ತೆಗೆದುಹಾಕುವುದು, ಒಂದಕ್ಕಿಂತ ಹೆಚ್ಚು ಕಡೆ ಮತದಾರರ ಗುರುತಿನ ಚೀಟಿ ಹೊಂದಿರುವವರ ಹೆಸರು ಪರಿಷ್ಕರಿಸುವುದು ಹಾಗೂ ಅಗತ್ಯ ತಿದ್ದುಪಡಿ ಕೈಗೊಳ್ಳುವುದು ಈ ವಿಶೇಷ ಅಭಿಯಾನದ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು.

ಜಾಥಾ ಮೆರವಣಿಗೆ: ಕುಷ್ಟಗಿ ಪಟ್ಟಣದ ಮಲ್ಲಯ್ಯ ವೃತ್ತದಿಂದ ಆರಂಭವಾದ ಜಾಗೃತಿ ಜಾಥಾ ಮಾರುತಿ ಸರ್ಕಲ್, ಬಸವೇಶ್ವರ ಸರ್ಕಲ್ ಮಾರ್ಗವಾಗಿ ಪುರಸಭೆ ಕಚೇರಿಯವರೆಗೆ ಸಾಗಿತು.

ಈ ಜಾಗೃತಿ ಜಾಥಾದಲ್ಲಿ ಪುರಸಭೆ ಮುಖ್ಯಾಧಿಕಾರಿ ವೆಂಕಪ್ಪ ಬೀಳಗಿ, ಬಿಇಒ ಉಮಾದೇವಿ ಬಸಾಪೂರು, ತಾಲೂಕು ಆರೋಗ್ಯಾಧಿಕಾರಿ ಡಾ. ಆನಂದ ಗೋಟೂರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿ, ಶಿಕ್ಷಕರು, ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.