ಕನ್ನಡಪ್ರಭ ವಾರ್ತೆ ಬೆಳಗಾವಿ

ಉತ್ತರ ಕರ್ನಾಟಕದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಹಿನ್ನೆಲೆಯಲ್ಲಿ ಸಂಭವನೀಯ ಬರ ಪರಿಸ್ಥಿತಿ ಎದುರಿಸಲು ರಾಜ್ಯ ಸರ್ಕಾರ ಸಮರೋಪಾದಿ ಸಿದ್ಧತೆ ಕೈಗೊಂಡಿದೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಘೋಷಿಸಿದರು.

ನಗರದ ಸುವರ್ಣ ವಿಧಾನಸೌಧದಲ್ಲಿ ಗುರುವಾರ ಬೆಳಗಾವಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಡಿಯುವ ನೀರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಮುನ್ನೆಚ್ಚರಿಕಾ ಕ್ರಮಗಳಿಗೆ ಆದ್ಯತೆ ನೀಡಲಾಗಿದ್ದು, ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ತುರ್ತು ಕುಡಿಯುವ ನೀರಿನ ಕಾಮಗಾರಿಗಳಿಗೆ ₹1 ಕೋಟಿ ವರೆಗೆ ಯೋಜನೆ ರೂಪಿಸಲು ಅನುಮತಿ ನೀಡಲಾಗಿದೆ ಎಂದರು.

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆ ಎದುರಾಗಿರುವುದರಿಂದ ಈಗಿನಿಂದಲೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ. ಕೆಲವು ಭಾಗಗಳಲ್ಲಿ ಮಾತ್ರ ಮಳೆಯಾಗಿದೆ. ಅದನ್ನು ಉತ್ತಮ ಮಳೆ ಎಂದು ಹೇಳಲು ಸಾಧ್ಯವಿಲ್ಲ. ಎಲ್ಲೆಡೆ ಸಮಾನ ಪ್ರಮಾಣದಲ್ಲಿ ಮಳೆಯಾಗಿಲ್ಲ. ಕೆಲವೆಡೆ ಶೇ.10, ಇನ್ನೂ ಕೆಲವೆಡೆ ಶೇ.20 ಅಥವಾ ಶೇ.30ರಷ್ಟು ಮಾತ್ರ ಮಳೆಯಾಗಿದೆ. ಹೀಗಾಗಿ ರೈತರು ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಮುಂಚಿತವಾಗಿ ಸಿದ್ಧತೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಪ್ರಧಾನಮಂತ್ರಿಯವರೂ ಮಳೆಯ ಅನಿಶ್ಚಿತತೆ ಕುರಿತು ಎಚ್ಚರಿಕೆ ನೀಡಿರುವುದಾಗಿ ಉಲ್ಲೇಖಿಸಿದ ಮುಖ್ಯಮಂತ್ರಿ, ರಾಜ್ಯ ಸರ್ಕಾರ ಈಗಾಗಲೇ ಜಿಲ್ಲಾಧಿಕಾರಿಗಳ ವರದಿ ಪಡೆದು ಅಗತ್ಯ ಕ್ರಮ ಆರಂಭಿಸಿದೆ ಎಂದರು.


ಕುಡಿಯುವ ನೀರಿಗೆ ಮೊದಲ ಆದ್ಯತೆ:

ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಸಮಿತಿ ಸಭೆ ನಡೆಸಿ ತುರ್ತು ಕ್ರಿಯಾ ಯೋಜನೆ ಸಿದ್ಧಪಡಿಸಬೇಕು. ಅಗತ್ಯವಿದ್ದಲ್ಲಿ ₹1 ಕೋಟಿ ರವರೆಗೆ ಯೋಜನೆ ಸಲ್ಲಿಸಬಹುದು. ಸರ್ಕಾರ ತ್ವರಿತ ಅನುಮೋದನೆ ನೀಡಿ ಕಾಮಗಾರಿ ಆರಂಭಿಸಲಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರದಿಂದ ಅನುದಾನ ಬರಲಿ ಅಥವಾ ಬರದಿರಲಿ, ರಾಜ್ಯ ಸರ್ಕಾರ ತನ್ನ ಸಂಪನ್ಮೂಲಗಳಿಂದಲೇ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಸಿದ್ಧವಾಗಿದೆ. ಜಲಾಶಯಗಳು, ಕೆರೆಗಳು ಹಾಗೂ ಅಣೆಕಟ್ಟುಗಳಲ್ಲಿ ಲಭ್ಯವಿರುವ ನೀರನ್ನು ಸಂರಕ್ಷಿಸಿ ಕುಡಿಯುವ ನೀರಿಗೆ ಮೀಸಲಿಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.

ಕಳೆದ ವರ್ಷ ತುಂಗಭದ್ರ ಅಣೆಕಟ್ಟಿನ 19ನೇ ಗೇಟ್ ಹಾನಿಗೊಳಗಾದ ಘಟನೆ ಸರ್ಕಾರಕ್ಕೆ ದೊಡ್ಡ ಪಾಠವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ 50 ವರ್ಷಕ್ಕಿಂತ ಹಳೆಯ ಎಲ್ಲ ಅಣೆಕಟ್ಟುಗಳ ಗೇಟ್‌ಗಳ ತಾಂತ್ರಿಕ ಪರಿಶೀಲನೆ ಆರಂಭಿಸಲಾಗಿದೆ. ಯಾವ ಅಣೆಕಟ್ಟಿನ ಗೇಟ್ ಬದಲಾವಣೆ ಅಗತ್ಯವಿದೆಯೋ ಅದನ್ನು ತಕ್ಷಣ ಬದಲಾಯಿಸಲಾಗುವುದು. ರೈತರ ಬದುಕು ಉಳಿಸುವುದು ಸರ್ಕಾರದ ಮೊದಲ ಕರ್ತವ್ಯ ಎಂದರು.

3 ರಾಜ್ಯಗಳ ಐತಿಹಾಸಿಕ ಜಲ ಒಪ್ಪಂದ:

ತುಂಗಭದ್ರ ನೀರಿನ ಸದ್ಬಳಕೆಗೆ ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳು ಮೊದಲ ಬಾರಿಗೆ ಒಮ್ಮತಕ್ಕೆ ಬಂದಿವೆ. ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬ್ಯಾಲೆನ್ಸಿಂಗ್ ರಿಸರ್ವಾಯರ್ ನಿರ್ಮಾಣಕ್ಕೆ ತಾತ್ವಿಕ ಒಪ್ಪಿಗೆ ನೀಡಲಾಗಿದೆ. 3 ರಾಜ್ಯಗಳ ಅಧಿಕಾರಿಗಳು ಹಾಗೂ ಕೇಂದ್ರದ ತಜ್ಞರನ್ನು ಒಳಗೊಂಡ ತಾಂತ್ರಿಕ ಸಮಿತಿ 3 ತಿಂಗಳೊಳಗೆ ವರದಿ ಸಲ್ಲಿಸಲಿದ್ದು, ಅದರ ಆಧಾರದ ಮೇಲೆ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಕೃಷ್ಣ-ಕಾವೇರಿ-ಗೋದಾವರಿ ಜೋಡಣೆ:

ಕೃಷ್ಣ, ಕಾವೇರಿ ಹಾಗೂ ಗೋದಾವರಿ ನದಿ ಜೋಡಣೆ ಯೋಜನೆಗೂ ರಾಜ್ಯ ಸರ್ಕಾರ ಸಮ್ಮತಿ ನೀಡಿದೆ. ಸುಮಾರು ₹1 ಲಕ್ಷ ಕೋಟಿ ವೆಚ್ಚದ ರಾಷ್ಟ್ರೀಯ ಯೋಜನೆಗೆ ಕೇಂದ್ರ ಸರ್ಕಾರ ಶೇ.90 ಹಾಗೂ ರಾಜ್ಯಗಳು ಶೇ.10 ವೆಚ್ಚ ಭರಿಸುವ ಮಾದರಿಯಲ್ಲಿ ಯೋಜನೆ ಜಾರಿಯಾಗಲಿದೆ ಎಂದರು.

ಮುಂಗಾರು ಹಂಗಾಮಿನಲ್ಲಿ ರೈತರಿಗೆ ಗುಣಮಟ್ಟದ ಬೀಜ ಹಾಗೂ ರಸಗೊಬ್ಬರ ಕೊರತೆಯಾಗದಂತೆ ಈಗಿನಿಂದಲೇ ಸಂಗ್ರಹ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ರಾಜ್ಯಕ್ಕೆ ಅಗತ್ಯ ಪ್ರಮಾಣದಲ್ಲಿ ರಸಗೊಬ್ಬರ ಪೂರೈಕೆಯಾಗದಿರುವ ಬಗ್ಗೆ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ತಿಳಿಸಿದರು.

ಕುಡಿಯುವ ನೀರಿನ ಪೈಪ್‌ಲೈನ್ ಕಾಮಗಾರಿಗಳಿಗೆ ಅರಣ್ಯ ಇಲಾಖೆ ಅನಗತ್ಯ ಅಡ್ಡಿಪಡಿಸಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಸುಮಾರು 40ಕ್ಕೂ ಹೆಚ್ಚು ಸ್ಥಳಗಳಲ್ಲಿ ಕಾಮಗಾರಿಗಳಿಗೆ ತೊಂದರೆ ಉಂಟಾಗುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಕುಡಿಯುವ ನೀರು ಮಾನವೀಯ ಹಕ್ಕು ಎಂಬ ಕಾರಣಕ್ಕೆ ಈ ಕಾಮಗಾರಿಗಳಿಗೆ ಆದ್ಯತೆ ನೀಡಬೇಕು ಎಂದರು.

ಅರಣ್ಯ ಪ್ರದೇಶಗಳಲ್ಲಿ ಹಲವು ವರ್ಷಗಳಿಂದ ಕೃಷಿ ಮಾಡಿಕೊಂಡು ಬದುಕುತ್ತಿರುವ ರೈತರನ್ನು ಕಾನೂನುಬದ್ಧವಾಗಿ ರಕ್ಷಿಸಲಾಗುವುದು. ಕಾನೂನು ವ್ಯಾಪ್ತಿಯಲ್ಲಿ ಸಿಗಬೇಕಾದ ಹಕ್ಕುಗಳನ್ನು ಒದಗಿಸಲಾಗುವುದು. ಯಾರನ್ನೂ ಬಲವಂತವಾಗಿ ಒಕ್ಕಲೆಬ್ಬಿಸಬಾರದು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಗ್ಯಾರಂಟಿ ಯೋಜನೆಗಳು ಮುಂದುವರಿಕೆ:

ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿದಂತೆ ಯಾವುದೇ ಗ್ಯಾರಂಟಿ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಫಲಾನುಭವಿಗಳ ಮಾಹಿತಿಯನ್ನು ನವೀಕರಿಸುವ ಪ್ರಕ್ರಿಯೆ ಮಾತ್ರ ನಡೆಯಲಿದ್ದು, ಅನರ್ಹರನ್ನು ಗುರುತಿಸಿ ವ್ಯವಸ್ಥೆಯನ್ನು ಪಾರದರ್ಶಕಗೊಳಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

ರೈತರ ಬೆಳೆ ವಿಮೆ, ಭೂ ದಾಖಲೆಗಳ ಡಿಜಿಟಲೀಕರಣ, 60:40 ನಿಯಮದಡಿ ಕಟ್ಟಡಗಳ ಕ್ರಮಬದ್ಧೀಕರಣ, ಆಲಮಟ್ಟಿ ಜಲಾಶಯ ಸಂತ್ರಸ್ತರಿಗೆ ಪರಿಹಾರ ಸೇರಿದಂತೆ ಹಲವು ವಿಷಯಗಳ ಕುರಿತು ಬೆಂಗಳೂರಿನಲ್ಲಿ ಪ್ರತ್ಯೇಕ ಸಭೆ ನಡೆಸಿ ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.