ಸಾರಾಂಶ
ಕನ್ನಡಪ್ರಭ ವಾರ್ತೆ, ತುಮಕೂರು
ಜಿಲ್ಲೆಯಲ್ಲಿ ಗುರುತಿಸಲಾದ 40 ಅಪಘಾತ ವಲಯಗಳ 100 ಮೀಟರ್ ಅಂತರದಲ್ಲಿ ಎಚ್ಚರಿಕೆ ಸೂಚನಾ ಫಲಕಗಳನ್ನು ಅಳವಡಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಸ್ತೆ ಸುರಕ್ಷತೆ ಸಭೆ ನಡೆಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಯಿಂದ ಗುರುತಿಸಲಾದ 40 ಅಪಘಾತ ವಲಯಗಳನ್ನು ಗುರುತಿಸಿ ಸಂಬಂಧಪಟ್ಟ ಇಲಾಖೆಗಳಿಗೆ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ. ಇದುವರೆಗೂ ಯಾವುದೇ ರೀತಿ ಕ್ರಮ ಕೈಗೊಂಡಿಲ್ಲ, ಇದಕ್ಕೆ ಸಂಬಂಧ ಪಟ್ಟಂತೆ 40 ಅಪಘಾತ ವಲಯಗಳಲ್ಲಿ ಅಪಘಾತ ಸಂಭವಿಸಿದರೆ ಸಂಬಂಧ ಪಟ್ಟ ಇಲಾಖೆಯ ಕಾರ್ಯ ನಿರ್ವಾಹಕ ಎಂಜಿನಿಯರ್‌ಗಳೇ ನೇರ ಹೊಣೆಯಾಗಲಿದ್ದಾರೆ. ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇಲಾಖೆ ಅಧಿಕಾರಿಗಳು ರಸ್ತೆ ಸುರಕ್ಷತೆ ಬಗ್ಗೆ ಹೆಚ್ಚು ಗಮನ ಹರಿಸಬೇಕು. ರಸ್ತೆಗಳಲ್ಲಿ ಅನಗತ್ಯವಾಗಿ ಹಾಕಿರುವ ವೇಗ ನಿಯಂತ್ರಕಗಳನ್ನು ತೆರವುಗೊಳಿಸಿ, ಅವಶ್ಯಕತೆ ಇರುವ ಕಡೆ ಮಾತ್ರ ಅಳವಡಿಸಬೇಕು ಎಂದು ತಿಳಿಸಿದರು.
ಪೊಲೀಸ್ ಇಲಾಖೆ ಈಗಾಗಲೇ 40 ಅಪಘಾತ ವಲಯಗಳನ್ನು ಗುರುತಿಸಿದ್ದು, ಇದುವರೆಗೆ ಎಷ್ಟು ಅಪಘಾತ ವಲಯಗಳಿಗೆ ಕ್ರಮಕೈಗೊಳ್ಳಲಾಗಿದೆ ಎಂಬ ಮಾಹಿತಿಯನ್ನು ಸಂಬಂಧ ಪಟ್ಟ ಅಧಿಕಾರಿಗಳು ವರದಿ ನೀಡುವಂತೆ ಸೂಚನೆ ನೀಡಿದರು. ಹೈವೇಗಳಲ್ಲಿ ಅಪಘಾತ ಸಂಭವಿಸಿದಾಗ ಆಂಬುಲೆನ್ಸ್ ಹಾಗೂ ಕ್ರೇನ್ ಸೇವೆಗಳು ತಕ್ಷಣ ಕಾರ್ಯನಿರ್ವಹಿಸಬೇಕು, ಹೈವೆಗಳಲ್ಲಿ ಅಪಘಾತ ಸಂಭವಿಸಿದಾಗ ಸಾರ್ವಜನಿಕರು ತುರ್ತು ಸಂದರ್ಭದಲ್ಲಿ 1033 ಎಂಬ ಸಹಾಯವಾಣಿ ಸಂಖ್ಯೆಗೆ ಕರೆಮಾಡಿ ಮಾಹಿತಿ ನೀಡಬೇಕು, ಸಹಾಯವಾಣಿ ಸಂಖ್ಯೆ ದಿನದ 24 ಗಂಟೆಯು ಸಾರ್ವಜನಿಕರ ಸೇವೆಗೆ ಸಿದ್ಧರಾಗಿರಬೇಕು ಎಂದು ತಿಳಿಸಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ ಅಶೋಕ್ ಮಾತನಾಡಿ, ಜಿಲ್ಲೆಯ 40 ಅಪಘಾತ ವಲಯಗಳಿಗೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಬೇಕು, ಅವಶ್ಯಕವಾದ ಬೆಳಕಿನ ವ್ಯವಸ್ಥೆ, ಪೇಂಟಿಂಗ್ ರಸ್ತೆಯ ಮಧ್ಯದಲ್ಲಿ ಬೆಳೆದಿರುವ ಅನಗತ್ಯ ಗಿಡಗಳನ್ನು ತೆರವುಗೊಳಿಸಲು ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.ಸಭೆಯಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಸಾದ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಜಿ.ರಾಜು, ಪಂಚಾಯತ್ ರಾಜ್ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಹನುಮಂತಪ್ಪ, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.