ತ್ಯಾಜ್ಯ ನಿರ್ವಹಣೆ, ಪ್ಲಾಸ್ಟಿಕ್‌ ದುಷ್ಪರಿಣಾಮಗಳ ಜನಜಾಗೃತಿ

| Published : Sep 06 2025, 01:00 AM IST

ತ್ಯಾಜ್ಯ ನಿರ್ವಹಣೆ, ಪ್ಲಾಸ್ಟಿಕ್‌ ದುಷ್ಪರಿಣಾಮಗಳ ಜನಜಾಗೃತಿ
Share this Article
  • FB
  • TW
  • Linkdin
  • Email

ಸಾರಾಂಶ

ದೊಡ್ಡಬಳ್ಳಾಪುರ: ನಗರದ ಹಸಿ ತ್ಯಾಜ್ಯ ನಿರ್ವಹಣೆ ಮತ್ತು ವ್ಯವಸಾಯದಲ್ಲಿ ರಾಸಾಯನಿಕ ಗೊಬ್ಬರ ಬಳಕೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ನಗರಸಭೆ ಮತ್ತು ರೈತರ ಸಹಭಾಗಿತ್ವದಲ್ಲಿ ಘನತ್ಯಾಜ್ಯ ನಿರ್ವಹಣೆ ಕಾರ್ಯಕ್ರಮ ರೂಪಿಸಲಾಗಿದ್ದು, ರೈತರ ಜಾಗದಲ್ಲಿಯೇ ಸಾವಯವ ಗೊಬ್ಬರವನ್ನಾಗಿ ಪರಿವರ್ತಿಸುವ ಕ್ರಮಗಳನ್ನು ಕೈಗೊಂಡಿದೆ ಎಂದು ನಗರಸಭೆ ಪೌರಾಯುಕ್ತ ಆರ್.ಕಾರ್ತಿಕೇಶ್ವರ ತಿಳಿಸಿದರು.

ದೊಡ್ಡಬಳ್ಳಾಪುರ: ನಗರದ ಹಸಿ ತ್ಯಾಜ್ಯ ನಿರ್ವಹಣೆ ಮತ್ತು ವ್ಯವಸಾಯದಲ್ಲಿ ರಾಸಾಯನಿಕ ಗೊಬ್ಬರ ಬಳಕೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ನಗರಸಭೆ ಮತ್ತು ರೈತರ ಸಹಭಾಗಿತ್ವದಲ್ಲಿ ಘನತ್ಯಾಜ್ಯ ನಿರ್ವಹಣೆ ಕಾರ್ಯಕ್ರಮ ರೂಪಿಸಲಾಗಿದ್ದು, ರೈತರ ಜಾಗದಲ್ಲಿಯೇ ಸಾವಯವ ಗೊಬ್ಬರವನ್ನಾಗಿ ಪರಿವರ್ತಿಸುವ ಕ್ರಮಗಳನ್ನು ಕೈಗೊಂಡಿದೆ ಎಂದು ನಗರಸಭೆ ಪೌರಾಯುಕ್ತ ಆರ್.ಕಾರ್ತಿಕೇಶ್ವರ ತಿಳಿಸಿದರು.

ದೊಡ್ಡಬಳ್ಳಾಪುರ ನಗರಸಭೆ, ಭಾರತೀಯ ಮಾನವ ವಸಾಹತುಗಳ ಸಂಸ್ಥೆ (ಐಐಎಚ್.ಎಸ್) ಮತ್ತು ಗೋದ್ರೇಜ್ ಪ್ರಾಪರ್ಟಿಸ್ ಲಿಮಿಟೆಡ್ ಸಹಯೋಗದೊಂದಿಗೆ ನಗರಸಭೆ ಮತ್ತು ರೈತರ ಸಹಭಾಗಿತ್ವದಲ್ಲಿ ಘನತ್ಯಾಜ್ಯ ನಿರ್ವಹಣೆ ಯೋಜನೆ ಹಾಗೂ ಪ್ಲಾಸ್ಟಿಕ್ ಬಳಕೆ ಕುರಿತ ಜಾಗೃತಿ ಜಾಥಾದಲ್ಲಿ ಅವರು ಮಾತನಾಡಿದರು.

ನಗರದಲ್ಲಿ ಉತ್ಪತ್ತಿಯಾಗುವ ಹಸಿ ಕಸವನ್ನು ರೈತರ ಜಾಗದಲ್ಲಿಯೇ ಸಾವಯವ ಗೊಬ್ಬರವನ್ನಾಗಿ ಪರಿವರ್ತಿಸುವ ಕ್ರಮಗಳನ್ನು ಕೈಗೊಂಡಿದೆ. ಈ ಯೋಜನೆಯ ಯಶಸ್ಸಿಗಾಗಿ, ಮೂಲದಲ್ಲಿಯೇ ಕಸವಿಂಗಡಣೆ ಮತ್ತು ತ್ಯಾಜ್ಯ ನಿರ್ವಹಣೆಯ ಪ್ರಗತಿಗಾಗಿ ನಗರದ ಪ್ರತಿ ವಾರ್ಡ್ ನಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

720 ಟನ್‌ಗಳಷ್ಟು ಹಸಿ ತ್ಯಾಜ್ಯ ವಿಲೇ:ನಗರದ ಹಸಿ ತ್ಯಾಜ್ಯ ನಿರ್ವಹಣೆ ಮತ್ತು ವ್ಯವಸಾಯದಲ್ಲಿ ರಾಸಾಯನಿಕ ಗೊಬ್ಬರ ಬಳಕೆಯನ್ನು ಕಡಿಮೆ ಮಾಡಲು ನಗರಸಭೆ ಮತ್ತು ರೈತರ ಸಹಭಾಗಿತ್ವದಲ್ಲಿ ಘನ ತ್ಯಾಜ್ಯ ನಿರ್ವಹಣೆಯ ಅಂಗವಾಗಿ ಕಳೆದ ಮೂರು ತಿಂಗಳುಗಳಲ್ಲಿ ಸುಮಾರು 32 ರೈತರಿಗೆ 720 ಟನ್ನುಗಳಷ್ಟು ಹಸಿ ತ್ಯಾಜ್ಯ ನೀಡಲಾಗಿತ್ತು. ರೈತರಿಗೆ ರಾಸಾಯನಿಕ ಗೊಬ್ಬರ ಬಳಕೆಯನ್ನು ಕಡಿಮೆ ಮಾಡಲು ಸೂಚಿಸಲಾಗಿದೆ. ಸಾರ್ವಜನಿಕರಿಗೆ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡದಂತೆ ಜಾಗೃತಿ ಮೂಡಿಸಲಾಗುತ್ತಿದೆ. ಜನತೆ ಸಹಕರಿಸಿ ಮೂಲದಲ್ಲಿಯೇ ಕಸ ವಿಂಗಡಿಸಿದರೆ, ನಗರ ಸ್ವಚ್ಛವಾಗುವುದಲ್ಲದೇ, ದೇಶಕ್ಕೆ ಮಾದರಿ ನಗರವಾಗಿ ರೂಪಿಸುವ ವಿಶ್ವಾಸ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳಿಂದ ಜಾಗೃತಿ:

ಜಾಥಾದಲ್ಲಿ ಶ್ರೀ ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ನಗರದ ಪ್ರಮುಖ ಬೀದಿಗಳಲ್ಲಿ ಸಾಗಿ ಜನರಲ್ಲಿ ಮೂಲದಲ್ಲಿಯೇ ಕಸ ವಿಂಗಡಿಸುವ ಬಗ್ಗೆ ಹಾಗೂ ಮರು ಬಳಕೆಯಾಗದ ಪ್ಲಾಸ್ಟಿಕ್ ಬಳಕೆಯಿಂದ ಉಂಟಾಗುವ ತೊಂದರೆಗಳನ್ನು ತಿಳಿಸಿದರು.

ಪ್ಲಾಸ್ಟಿಕ್ ಬಳಸದಂತೆ ಜನರಲ್ಲಿ ಅರಿವು ಮೂಡಿಸಿದರು. ಒಂದು ಬಟ್ಟೆಯ ಚೀಲ 100 ಪ್ಲಾಸ್ಟಿಕ್ ಚೀಲಕ್ಕೆ ಸಮ, 100 ಬಟ್ಟೆಯ ಚೀಲಗಳು ವರ್ಷಕ್ಕೆ 2 ಟನ್ ಪ್ಲಾಸ್ಟಿಕ್ ಬಳಕೆಯನ್ನು ಉಳಿಸುತ್ತವೆ ಎನ್ನುವ ಘೋಷಣೆ ಕೂಗಿದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್, ಉಪಾಧ್ಯಕ್ಷ ಎಂ.ಮಲ್ಲೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಎಸ್.ರವಿಕುಮಾರ್, ನಗರಸಭಾ ಸದಸ್ಯರು, ಪರಿಸರ ವಿಭಾಗದ ಎಇಇ ಈರಣ್ಣ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರಾಮೇಗೌಡ ಸೇರಿದಂತೆ ಆರೋಗ್ಯ ಅಧಿಕಾರಿಗಳು, ಐಐಎಚ್‌.ಎಸ್ ಸಂಸ್ಥೆಯ ಸಿಬ್ಬಂದಿ ಭಾಗವಹಿಸಿದ್ದರು.

5ಕೆಡಿಬಿಪಿ3-

ದೊಡ್ಡಬಳ್ಳಾಪುರ ನಗರಸಭೆ ವತಿಯಿಂದ ಘನ ತ್ಯಾಜ್ಯ ನಿರ್ವಹಣೆ ಹಾಗೂ ಪ್ಲಾಸ್ಟಿಕ್ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.