ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಪಂ ಸಿಇಒ
ಕನ್ನಡಪ್ರಭ ವಾರ್ತೆ ಕಾರವಾರವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಆ್ಯಂಡ್ ಅಜೀವಿಕ ಮಿಷನ್ ಗ್ರಾಮೀಣ ಯೋಜನೆಯಡಿ ಜಲ ಸಂರಕ್ಷಣೆ ಕೇಂದ್ರಿಕೃತ ಕಾಮಗಾರಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಷ ಶಶಿ ಹೇಳಿದರು.
ಬುಧವಾರ ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯಲ್ಲಿ ಘಟ್ಟದ ಮೇಲಿನ ತಾಲೂಕುಗಳಲ್ಲಿ ಈಗಾಗಲೇ ಅಂತರ್ಜಲ ಮಟ್ಟ ಕುಸಿತದ ಕಾರಣ ಕೊಳವೆ ಬಾವಿಗಳು ಬತ್ತುತ್ತಿವೆ ಮತ್ತು ಘಟ್ಟದ ಕೆಳಗಿನ ಭಾಗದಲ್ಲಿ ಕುಡಿಯುವ ನೀರಿನ ಬಾವಿಗಳಲ್ಲಿ ಉಪ್ಪು ನೀರು ಕಾಣಲಾರಂಭಿಸಿದೆ. ಹೀಗಾಗಿ ಭವಿಷ್ಯದಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವ ಮತ್ತು ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ವಿಬಿ-ಜಿ ರಾಮ್-ಜಿ ಯೋಜನೆಯಡಿ ಜನರಿಗೆ ಕೂಲಿ ಕೆಲಸ ಒದಗಿಸುವುದರೊಂದಿಗೆ ಜಲ ಸಂರಕ್ಷಣೆ ಕೇಂದ್ರಿಕೃತ ಕಾಮಗಾರಿಗಳ ಅನುಷ್ಠಾನಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದರು.
ಈಗಾಗಲೇ ಗ್ರಾಪಂ ವ್ಯಾಪ್ತಿಯಲ್ಲಿ ಕೆರೆಗಳ ಗುರುತಿಸುವಿಕೆ ಪ್ರಕ್ರಿಯೆ ಆರಂಭಿಸಿದ್ದು, ಅವುಗಳ ಸರ್ವಾಂಗೀಣ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುವುದು. ಇದರೊಂದಿಗೆ ವೈಯಕ್ತಿಕ ಮತ್ತು ಸಮುದಾಯ ಕೊಳವೆ ಬಾವಿಗಳಿಗೆ ಅಂತರ್ಜಲ ಮರುಪೂರಣ ಘಟಕ ನಿರ್ಮಿಸುವುದು, ಸಾಂಪ್ರದಾಯಿಕ ಜಲಮೂಲಗಳ ಪುನಶ್ಚೇತನ, ಪ್ರವಾಹ ತಡೆಗೋಡೆ, ನಾಲಾ ಬಂಡ್, ಕೃಷಿ ಹೊಂಡ, ಕಾಂಟೂರು ಟ್ರಂಚ್, ಚೆಕ್ ಡ್ಯಾಮ್ ನಿರ್ಮಾಣಗಳಂತಹ ಜಲ ಸಂರಕ್ಷಣಾ ಪೂರಕ ಕಾಮಗಾರಿಗಳನ್ನು ಕ್ರಿಯಾ ಯೋಜನೆಯಲ್ಲಿ ತೆಗೆದುಕೊಳ್ಳಲಾಗುವುದು ಎಂದರು.
ಜಿಪಂ ಆಡಳಿತ ಶಾಖೆಯ ಉಪ ಕಾರ್ಯದರ್ಶಿ ಅಲ್ಲಾಭಕ್ಷ, ಯೋಜನಾ ನಿರ್ದೇಶಕ ಕರೀಂ ಅಸದಿ, ಅಭಿವೃದ್ಧಿ ಶಾಖೆ ಉಪ ಕಾರ್ಯದರ್ಶಿ ಪ್ರಕಾಶ ಹಾಲಮ್ಮನವರ, ಮುಖ್ಯ ಲೆಕ್ಕಾಧಿಕಾರಿ ಆನಂದಸಾ ಹಬೀಬ್ ಮತ್ತಿತರರಿದ್ದರು.