ಸಾರಾಂಶ
ಶ್ರೀಶೈಲ ಮಠದ
ಕನ್ನಡಪ್ರಭ ವಾರ್ತೆ ಬೆಳಗಾವಿಗಡಿ ಜಿಲ್ಲೆ ಬೆಳಗಾವಿಯಲ್ಲಿ ಕೃಷ್ಣಾ, ಮಲಪ್ರಭಾ, ಘಟಪ್ರಭಾ ಸೇರಿ ಸಪ್ತ ನದಿಗಳು ಹರಿದುಹೋಗಿವೆ. ಬೇಸಿಗೆ ಬೇಗೆಯಿಂದ ಜಲಮೂಲಗಳು ಬತ್ತಿ ಹೋಗುತ್ತಿದ್ದು, ಈ ಬಾರಿ ಮತ್ತೆ ಜಲ ಸಂಕಷ್ಟ ಎದುರಾಗುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ. ಜಲಮೂಲಗಳು ಬತ್ತಿ ಹೋಗುತ್ತಿದ್ದು, ಕುಡಿಯುವ ನೀರಿನ ಸಮಸ್ಯೆ ತಲೆ ದೋರಿದೆ. ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ನೀರು ಯಾವಾಗ ಬಿಡುಗಡೆಯಾಗುತ್ತದೆ ಎಂದು ನದಿ ತೀರದ ಗ್ರಾಮಸ್ಥರು ಎದುರು ನೋಡುತ್ತಿದ್ದಾರೆ.
ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 2 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾರಾಷ್ಟ್ರ ಸರ್ಕಾರಕ್ಕೆ ಏ. 1ರಂದು ಪತ್ರ ಬರೆದಿದ್ದರು. ಆದರೆ, ಈವರೆಗೂ ಮಹಾರಾಷ್ಟ್ರ ಸರ್ಕಾರ ನೀರು ಬಿಡುಗಡೆ ಮಾಡಿಲ್ಲ. ಇದರಿಂದಾಗಿ ಕೃಷ್ಣಾ ನದಿ ತೀರದಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಹಾಹಾಕಾರ ಉಂಟಾಗಿದೆ. ಮಹಾರಾಷ್ಟ್ರ ಸರ್ಕಾರ ನೀರು ಬಿಡುಗಡೆಯಲ್ಲಿಯೂ ರಾಜಕೀಯ ಮಾಡುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡುವಂತೆ ರೈತರು ಆಗ್ರಹಿಸಿದ್ದಾರೆ.ಮಳೆಗಾಲದ ಸಂದರ್ಭದಲ್ಲಿ ಬೇಕಾಬಿಟ್ಟಿಯಾಗಿ ಕೋಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುವ ಮಹಾರಾಷ್ಟ್ರ ಸರ್ಕಾರ ಉತ್ತರ ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗುವಂತೆ ಮಾಡುತ್ತದೆ. ಆದರೆ, ಈಗ ಕೃಷ್ಣಾ ನದಿ ಒಡಲು ಬರಿದಾದರೂ ಕೂಡ ನೀರು ಬಿಡಲು ಮಹಾರಾಷ್ಟ್ರ ಸರ್ಕಾರ ವಿಳಂಬ ನೀತಿ ಅನುಸರಿಸುವ ಮೂಲಕ ರಾಜಕೀಯ ಮಾಡುತ್ತಿದೆ. ಇದು ನದಿತೀರದ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.ಬತ್ತಿರುವ ಜಲಮೂಲಗಳು:ಜಿಲ್ಲೆಯ ಜಲಮೂಲಗಳು ಬತ್ತಿ ಬರಿದಾಗುತ್ತಿದೆ. ಕೃಷ್ಣಾ ನದಿಯ ನೀರಿನ ಪ್ರಮಾಣ ಕಡಿಮೆಯಾಗುತ್ತಿರುವುದು ನದಿತೀರದ ಗ್ರಾಮಸ್ಥರ ತೀವ್ರ ಆತಂಕಕ್ಕೆ ಕಾರಣವಾಗಿದೆ. ಚಿಕ್ಕೋಡಿಯಲ್ಲಿ 327 ಮತ್ತು ಬೆಳಗಾವಿಯಲ್ಲಿ 96 ಸೇರಿ ಒಟ್ಟು 423 ಗ್ರಾಮಗಳಲ್ಲಿ ನೀರಿನ ಸಮಸ್ಯೆ ತಲೆದೋರುವ ಸಾಧ್ಯತೆಗಳಿವೆ. ಅಲ್ಲದೇ, ಬಹುಗ್ರಾಮ ಕುಡಿಯುವ ನೀರಿನ ಯೋಜನಗಳು ಸ್ಥಗಿತವಾಗುವ ಲಕ್ಷಣಗಳು ಗೋಚರವಾಗುತ್ತಿವೆ. ಕೃಷ್ಣಾ ನದಿ ನೀರು ಬತ್ತುತ್ತಿರುವುದು ನದಿ ತೀರದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ. ಮಹಾರಾಷ್ಟ್ರ ಸರ್ಕಾರ ಕೊಯ್ನಾ ಜಲಾಶಯದಿಂದ ನೀರು ಬಿಡುಗಡೆ ಮಾಡಬೇಕಿದೆ. ಇಲ್ಲದಿದ್ದರೆ , ಕುಡಿಯುವ ನೀರಿನ ಪರಿಸ್ಥಿತಿ ಮತ್ತಷ್ಟು ಜಟಿಲವಾಗುವ ಸಾದ್ಯತೆಗಳಿವೆ.ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರುವ ಸಮಸ್ಯಾತ್ಮಕ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಡಳಿತ ಸಂಬಂಧಿತ ಇಲಾಖೆಗೆ ಸೂಚನೆ ನೀಡಿದೆ. ಅಲ್ಲದೇ, ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಅಥಣಿ, ರಾಯಬಾಗ, ಕಾಗವಾಡ ತಾಲೂಕುಗಳಲ್ಲಿ ಜಲಸಂಕಷ್ಟು ಸಮಸ್ಯೆ ಎದುರಾಗಿದೆ. ಗ್ರಾಮಸ್ಥರು ಜಲಮೂಲಗಳು ಅರಿಸುತ್ತ ಅಲೆದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಎಲ್ ಆ್ಯಂಡ್ ಟಿ ಕಂಪನಿ ನಗರದಲ್ಲಿ ಕುಡಿಯುವ ನೀರಿನ ಕೊಳವೆ ಮಾರ್ಗದ ಕಾಮಗಾರಿ ಕೈಗೊಂಡಿದೆ. ಇದರಿಂದಾಗಿ ನಗರದಲ್ಲಿ ಸಮರ್ಪಕವಾಗಿ ನೀರು ಪೂರೈಕೆ ಮಾಡುತ್ತಿದೆ. 10ರಿಂದ 15 ದಿನಕ್ಕೊಮ್ಮೆ ನೀರು ಪೂರೈಕೆ ಮಾಡಲಾಗುತ್ತಿದೆ. ಬೆಳಗಾವಿಯಲ್ಲಿ ಕುಡಿಯುವ ನೀರಿನಗಾಗಿ ಹಾಹಾಕಾರ ಉಂಟಾಗಿದೆ. ಜನರು ಟ್ಯಾಂಕರ್ ನೀರಿನ ಮೊರೆಹೋಗುವಂತಾಗಿದೆ.ಜಿಲ್ಲೆಯ ಜನತೆಗೆ ಜೀವಜಲವಾಗಿರುವ ಪ್ರಮುಖ ಘಟಪ್ರಭಾ ಮತ್ತು ಮಲಪ್ರಭಾ ಜಲಾಶಯಗಳು ಕೂಡ ಬರಿದಾಗುತ್ತ ಸಾಗಿದ್ದು, ಸದ್ಯ ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರನ್ನು ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಕೆ ಮಾಡಲಾಗುತ್ತಿದೆ. ಗರಿಷ್ಠ 2175.00 ಅಡಿ ನೀರಿನ ಸಂಗ್ರಹ ಸಾಮರ್ಥ್ಯ ಹೊಂದಿರುವ ಘಟಪ್ರಭಾ ಜಲಾಶಯದಲ್ಲಿ 2120.567 ಅಡಿ ನೀರು ಸಂಗ್ರಹವಾಗಿದ್ದರೆ, ಗರಿಷ್ಠ 2079.50 ಅಡಿ ನೀರಿನ ಸಂಗ್ರಹ ಸಾಮರ್ಥ್ಯ ಹೊಂದಿರುವ ಮಲಪ್ರಭಾ ಜಲಾಶಯದಲ್ಲಿ ಸದ್ಯ 2056.26 ಅಡಿ ನೀರು ಸಂಗ್ರಹವಿದೆ. ಬರಗಾಲ ಎದುರಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರನ್ನು ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಕೆ ಮಾಡಲಾಗುತ್ತಿದೆ.
ಮಹಾರಾಷ್ಟ್ರ ಕೊಯ್ನಾ ಜಲಾಶಯದಿಂದ 2 ಟಿಎಂಸಿ ನೀರು ಬಿಡಗಡೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಅವರಿಗೆ ಪತ್ರ ಬರೆದಿದ್ದಾರೆ. ಈ ಬಗ್ಗೆ ಶೀಘ್ರವೇ ಮಹಾರಾಷ್ಟ್ರ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ.ಸತೀಶ ಜಾರಕಿಹೊಳಿ,
ಜಿಲ್ಲಾ ಉಸ್ತುವಾರಿ ಸಚಿವ.