ಹಾಗಲವಾಡಿ ಕೆರೆಗೆ ನೀರು ಹರಿಸುವ ಕಾಮಗಾರಿ ಅವೈಜ್ಞಾನಿಕವಾಗಿದೆ ಎಂದು ಆರೋಪಿಸಿ ಹಾಗಲವಾಡಿ ಹಾಗೂ ಶಿವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರು ನೂರಕ್ಕೂ ಅಧಿಕ ಅರ್ಜಿಗಳನ್ನು ಸಲ್ಲಿಸಿ ಗಮನ ಸೆಳೆದರು.
ಕನ್ನಡಪ್ರಭ ವಾರ್ತೆ ಗುಬ್ಬಿ
ಜನವರಿ ತಿಂಗಳ ಒಳಗೆ ಹಾಗಲವಾಡಿ ಕೆರೆಗೆ ನೀರು ಹರಿಸಲು ಕ್ರಮ ಕೈಗೊಳ್ಳಲಾಗುವುದು. ಕಾಮಗಾರಿ ಪೂರ್ಣಗೊಳಿಸಲು ಸರ್ಕಾರದಿಂದ ಒಂದು ಕೋಟಿ ರು. ಅನುದಾನ ಬಿಡುಗಡೆಗೊಳಿಸಿ ಕಾಮಗಾರಿ ಮುಗಿಸಲು ಸೂಚಿಸಲಾಗಿದೆ ಎಂದು ಶಾಸಕ ಎಸ್.ಆರ್. ಶ್ರೀನಿವಾಸ್ ತಿಳಿಸಿದರು.ತಾಲೂಕಿನ ಹಾಗಲವಾಡಿ ಗ್ರಾಮದ ಕರಿಯಮ್ಮ ದೇವಾಲಯದ ಸಮುದಾಯ ಭವನದಲ್ಲಿ ತಾಲೂಕು ಆಡಳಿತ ಆಯೋಜಿಸಿದ್ದ ಪ್ರಜಾ ಸೇವಾ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎತ್ತಿನಹೊಳೆ ಮತ್ತು ಹೇಮಾವತಿ ಯೋಜನೆಗಳ ಮೂಲಕ ಕೆರೆಗೆ ನೀರು ಹರಿಸಲು ಕ್ರಮ ಕೈಗೊಳ್ಳಲಾಗಿದ್ದು, ತಾಂತ್ರಿಕ ಸಮಸ್ಯೆಗಳಿಂದ ಕಾಮಗಾರಿ ವಿಳಂಬವಾಗಿದೆ. ಕಾಮಗಾರಿ ಪೂರ್ಣಗೊಂಡ ಬಳಿಕ ಪೊಲೀಸ್ ಸಿಬ್ಬಂದಿ ಭದ್ರತೆಯಲ್ಲಿ ಕೆರೆಗೆ ನೀರು ಹರಿಸಲಾಗುವುದು. ಅಲ್ಲಿಯವರೆಗೆ ರೈತರು ತಾಳ್ಮೆಯಿಂದ ಸಹಕರಿಸಬೇಕು ಎಂದು ಮನವಿ ಮಾಡಿದರು.
ಹಾಗಲವಾಡಿ ಕೆರೆಗೆ ನೀರು ಹರಿಸುವ ಕಾಮಗಾರಿ ಅವೈಜ್ಞಾನಿಕವಾಗಿದೆ ಎಂದು ಆರೋಪಿಸಿ ಹಾಗಲವಾಡಿ ಹಾಗೂ ಶಿವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರು ನೂರಕ್ಕೂ ಅಧಿಕ ಅರ್ಜಿಗಳನ್ನು ಸಲ್ಲಿಸಿ ಗಮನ ಸೆಳೆದರು.ತಹಸೀಲ್ದಾರ್ ಬಿ.ಆರತಿ ಮಾತನಾಡಿ, ಪ್ರಜಾ ಸೇವಾ ಅಭಿಯಾನದ ಮೂಲಕ ಸಾರ್ವಜನಿಕರ ಅಹವಾಲುಗಳನ್ನು ಸ್ಥಳದಲ್ಲೇ ಪರಿಹರಿಸಲು ಆದ್ಯತೆ ನೀಡಲಾಗುತ್ತಿದೆ. ವಿವಿಧ ಪಿಂಚಣಿಗಳಿಗೆ ಅರ್ಹರಾದ ಫಲಾನುಭವಿಗಳಿಗೆ ಕೆಲವೇ ಗಂಟೆಗಳಲ್ಲಿ ಆದೇಶದ ಪ್ರತಿ ವಿತರಿಸಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ 12 ಫಲಾನುಭವಿಗಳಿಗೆ ವಿಧವಾ ಪಿಂಚಣಿ ಆದೇಶದ ಪ್ರತಿಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕ ರಂಗನಾಥ್, ಎಇಇ ನಾಗೇಂದ್ರಪ್ಪ, ಮುಖಂಡರಾದ ಗುರು ರೇಣುಕಾರಾಧ್ಯ, ಸಣ್ಣರಂಗಯ್ಯ, ಉಪತಹಸೀಲ್ದಾರ್ ವರುಣ್, ಕಂದಾಯ ನಿರೀಕ್ಷಕ ಗುರುಪ್ರಸಾದ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.