ಸಾರಾಂಶ
ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯಗಳಲ್ಲಿ 80.58 ಟಿಎಂಸಿ ನೀರು ಸಂಗ್ರಹವಾಗಿದ್ದು, ಜುಲೈ 8 ರಿಂದ ಕೃಷ್ಣಾ ಅಚ್ಚುಕಟ್ಟು ಪ್ರದೇಶಗಳಿಗೆ ಹೆಚ್ಚು ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಕೃಷ್ಣಾ ಮೇಲ್ದಂಡೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರಾದ ಆರ್.ಬಿ. ತಿಮ್ಮಾಪೂರ ತಿಳಿಸಿದರು.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯಗಳಲ್ಲಿ 80.58 ಟಿಎಂಸಿ ನೀರು ಸಂಗ್ರಹವಾಗಿದ್ದು, ಜುಲೈ 8 ರಿಂದ ಕೃಷ್ಣಾ ಅಚ್ಚುಕಟ್ಟು ಪ್ರದೇಶಗಳಿಗೆ ಹೆಚ್ಚು ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಕೃಷ್ಣಾ ಮೇಲ್ದಂಡೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರಾದ ಆರ್.ಬಿ. ತಿಮ್ಮಾಪೂರ ತಿಳಿಸಿದರು.ಬೆಂಗಳೂರಿನ ವಿಕಾಸಸೌಧದಲ್ಲಿ ಮಂಗಳವಾರ ಜರುಗಿದ ಕೃಷ್ಣಾ ಮೇಲ್ದಂಡೆ ಯೋಜನೆ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ನೀರಾವರಿ ಸಲಹಾ ಸಮಿತಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಆಲಮಟ್ಟಿ ಮತ್ತು ನಾರಾಯಣಪುರ ಡ್ಯಾಂಗಳಲ್ಲಿ 80.58 ನೀರು ಸಂಗ್ರಹವಾಗಿದ್ದು, ಕಳೆದ ಸಾಲಿಗಿಂತ 54.77 ಟಿಎಂಸಿ ಹೆಚ್ಚುವರಿ ನೀರು ಸಂಗ್ರಹವಾಗಿದೆ. ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶವು ಮುಂಗಾರು ಹಂಗಾಮಿನ ಮಳೆ ಆಧರಿತವಾಗಿದ್ದು, ಮಳೆಯನ್ನು ಆಧರಿಸಿ ಅವಶ್ಯಕತೆಗೆ ತಕ್ಕಂತೆ ನೀರು ಹರಿಸಲು ಸಚಿವರು ಸೂಚಿಸಿದರು.
ಸಭೆಯಲ್ಲಿ ಜುಲೈ 8 ರಿಂದ ಮುಂದಿನ 120 ದಿನಗಳಿಗೆ ಮುಂಗಾರು ಹಂಗಾಮಿಗೆ ನೀರು ಪೂರೈಸಲು ತೀರ್ಮಾನಿಸಲಾಯಿತು. ಒಳಹರಿವು ಆಧರಿಸಿ ಕಾಲುವೆಗಳಿಗೆ ಸತತವಾಗಿ ನೀರು ಬಿಡಲು ಸಚಿವ ತಿಮ್ಮಾಪೂರ ಅಧಿಕಾರಿಗಳಿಗೆ ತಿಳಿಸಿದರು. ಸಭೆಯಲ್ಲಿ ಬೀಳಗಿ ಶಾಸಕ ಹಾಗೂ ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷ ಜೆ.ಟಿ.ಪಾಟೀಲ ಸೇರಿದಂತೆ ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯಕ್ಕೆ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.